ಸೋಮವಾರಪೇಟೆ, ಸೆ.5: ಲೋಕಾಯುಕ್ತ ಕಾಯ್ದೆಗಳ ಬಗ್ಗೆ ತಾಲೂಕು ಮಟ್ಟದ ಅಧಿಕಾರಿಗಳು ಹಾಗೂ ಸಾರ್ವಜನಿಕರಿಗೆ ಮಾಹಿತಿ ಕಾರ್ಯಾಗಾರ ಇಲ್ಲಿನ ಪಟ್ಟಣ ಪಂಚಾಯಿತಿ ಸಭಾಂಗಣದಲ್ಲಿ ನಡೆಯಿತು.

ಲೋಕಾಯುಕ್ತ ಇನ್ಸ್‍ಪೆಕ್ಟರ್ ಪೂಣಚ್ಚ ಮಾತನಾಡಿ, ಸರ್ಕಾರಿ ಅಧಿಕಾರಿಗಳು ತಮ್ಮ ಅಧಿಕಾರ ವ್ಯಾಪ್ತಿಯಲ್ಲಿ ಆಗುವಂತಹ ಸಾರ್ವಜನಿಕ ಕೆಲಸ ಕಾರ್ಯಗಳನ್ನು ನಿಗದಿತ ದಿನಗಳಲ್ಲಿ ಮಾಡಿಕೊಡಬೇಕು ಎಂದರು.

ಸರ್ಕಾರಿ ಕೆಲಸ ಕಾರ್ಯಗಳಿಗೆ ಅಧಿಕಾರಿಗಳು ಮತ್ತು ಸಿಬ್ಬಂದಿ ಲಂಚದ ಹಣಕ್ಕೆ ಬೇಡಿಕೆ ಇಡುವದು, ಅಲೆದಾಡಿಸುವದು ಆಗುತ್ತಿದ್ದರೆ ಸಾರ್ವಜನಿಕರು ಲೋಕಾಯುಕ್ತಕ್ಕೆ ದೂರು ನೀಡಬಹುದು ಎಂದು ಪೂಣಚ್ಚ ತಿಳಿಸಿದರು.

ರಾಜ್ಯ ಲೋಕಾಯುಕ್ತ ವಿಶ್ವನಾಥ್ ಶೆಟ್ಟಿ ಅವರ ಆದೇಶದ ಮೇರೆಗೆ ಎಲ್ಲಾ ಜಿಲ್ಲೆಗಳಲ್ಲೂ ಇಂತಹ ಮುಖಾಮುಖಿ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ. ತಾ. 7ರಂದು (ನಾಳೆ) ಬೆಳಿಗ್ಗೆ 11 ಗಂಟೆಯಿಂದ ವೀರಾಜಪೇಟೆಯ ಪಟ್ಟಣ ಪಂಚಾಯಿತಿ ಸಭಾಂಗಣದಲ್ಲಿ ಅಧಿಕಾರಿಗಳು- ಸಾರ್ವಜನಿಕರ ನಡುವೆ ಕಾರ್ಯಾಗಾರ ಆಯೋಜಿಸಲಾಗಿದೆ. ದೂರುಗಳಿದ್ದರೆ ಕಾರ್ಯಾಗಾರದಲ್ಲಿ ಇತ್ಯರ್ಥಪಡಿಸಿಕೊಳ್ಳಬಹುದಾಗಿದೆ ಎಂದು ಪೂಣಚ್ಚ ತಿಳಿಸಿದರು.

ಈ ಸಂದರ್ಭ ಲೋಕಾಯುಕ್ತ ಇಲಾಖೆಯ ಮಂಜುನಾಥ್, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ನಟರಾಜ್ ಅವರುಗಳು ಉಪಸ್ಥಿತರಿದ್ದರು. ಸಭೆಯಲ್ಲಿ ತಾಲೂಕು ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು, ಸಾರ್ವಜನಿಕರು ಭಾಗಿಯಾಗಿದ್ದರು.