ಗೋಣಿಕೊಪ್ಪ ವರದಿ, ಸೆ. 5: ವೀರಾಜಪೇಟೆ ತಾಲೂಕು ಕ್ಷೇತ್ರ ಶಿಕ್ಷಣ ಇಲಾಖೆ ಸಹಯೋಗದಲ್ಲಿ ಇಲ್ಲಿನ ಕಾಪ್ಸ್ ಶಾಲಾ ಸಭಾಂಗಣದಲ್ಲಿ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆಯಲ್ಲಿ ನಿವೃತ್ತ ಶಿಕ್ಷಕರು, ಸಿಬ್ಬಂದಿ, ಎಸೆಸೆಲ್ಸಿಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸುವ ಮೂಲಕ ಆಚರಿಸಲಾಯಿತು.
ಸಂಪನ್ಮೂಲ ವ್ಯಕ್ತಿಯಾಗಿ ಪೊನ್ನಂಪೇಟೆ ಅರಣ್ಯ ಮಹಾವಿದ್ಯಾಲಯ ಮುಖ್ಯಸ್ಥ ಡಾ. ಚೆಪ್ಪುಡೀರ ಜಿ. ಕುಶಾಲಪ್ಪ ಪಾಲ್ಗೊಂಡು ಮಾತನಾಡಿದರು. ಸರ್ಕಾರಿ ಶಾಲೆಯಲ್ಲಿ ಉತ್ತಮ ಹಾಗೂ ಗುಣಮಟ್ಟ ಶಿಕ್ಷಣ ಲಭಿಸುತ್ತಿದೆ. ಇದರಿಂದ ಸಮಾಜಕ್ಕೆ ಹೆಚ್ಚಿನ ಕೊಡುಗೆ ಲಭ್ಯವಾಗುತ್ತಿದೆ ಎಂದರು. ಶಿಕ್ಷಕರ ಪಾತ್ರ ಅರಿತು ಮುನ್ನಡೆಯಬೇಕು ಎಂದು ಅವರು ಸಲಹೆ ನೀಡಿದರು.
ಶಾಸಕ ಕೆ. ಜಿ. ಬೋಪಯ್ಯ ಮಾತನಾಡಿ, ಶಿಸ್ತು, ಸಂಯಮ, ಉದಾರ ಮನೋಭಾವ, ಹಿರಿಯರಿಗೆ ಗೌರವ ನೀಡುವುದು ಎಲ್ಲವೂ ಶಿಕ್ಷಕರಿಂದಲೇ ಕಲಿಯಲು ಸಾಧ್ಯವಾಗುತ್ತಿದೆ. ಉತ್ತಮ ಶಿಕ್ಷಣ ನೀಡಲು ಶಿಕ್ಷಕರು ಮತ್ತಷ್ಟು ಪ್ರಯತ್ನ ನಡೆಸಬೇಕು ಎಂದರು. ಜಿ. ಪಂ ಸಾಮಾಜಿಕ ಮತ್ತು ನ್ಯಾಯಸ್ಥಾಯಿ ಸಮಿತಿ ಅಧ್ಯಕ್ಷ ಸಿ.ಕೆ. ಬೋಪಣ್ಣ ಕಾರ್ಯಕ್ರಮ ಉದ್ಘಾಟಿಸಿದರು.
ಈ ಸಂದರ್ಭ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಕಿರಣ್ ಕಾರ್ಯಪ್ಪ, ತಾಲೂಕು ಶಿಕ್ಷಕರ ಕಲ್ಯಾಣ ಸಮಿತಿ ಅಧ್ಯಕ್ಷ ಕುಂಬೇರ ಮನು, ಜಿಲ್ಲಾ ಪಂಚಾಯಿತಿ ಸದಸ್ಯರಾದ ಬಾನಂಡ ಪ್ರತ್ಯು, ತಾಲೂಕು ಪಂಚಾಯಿತಿ ಸದಸ್ಯೆ ಆಶಾ ಜೇಮ್ಸ್, ಸುಮ, ಇಒ ಷಣ್ಮುಗಂ, ಕೂರ್ಗ್ ಪಬ್ಲಿಕ್ ಶಾಲೆ ಪ್ರಾಂಶುಪಾಲ ಡಾ. ಬೆನ್ನಿಕೊರಿಯೊಕೋಸ್, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ರಾಜೇಶ್, ಬಿಇಒ ಶ್ರೀಶೈಲ ಬೀಳಗಿ, ಕ್ಷೇತ್ರ ಸಂಪನ್ಮೂಲ ಸಮನ್ವಯ ಅಧಿಕಾರಿ ವನಜಾಕ್ಷಿ, ಗೋಣಿಕೊಪ್ಪ ರೋಟರಿ ಕ್ಲಬ್ ಅಧ್ಯಕ್ಷ ಕಾಡ್ಯಮಾಡ ನೆವಿನ್, ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಇ. ಸುರೇಂದ್ರ, ಕಾರ್ಯದರ್ಶಿ ದೇವರಾಜ್, ಅನುದಾನಿತ ಪ್ರೌಡ ಶಾಲೆಗಳ ಶಿಕ್ಷಕರ ಸಂಘದ ಅಧ್ಯಕ್ಷ ರೋಹಿತ್ ಉಪಸ್ಥಿತರಿದ್ದರು.
ಶಿಕ್ಷಣ ಇಲಾಖೆ ಕ್ಷೇತ್ರ ಸಂಪನ್ಮೂಲ ವ್ಯಕ್ತಿಗಳು ಪಾಲ್ಗೊಂಡಿದ್ದರು. -ಸುದ್ದಿಪುತ್ರ.