ಸೋಮವಾರಪೇಟೆ, ಸೆ.9: ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಜನವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಕಾರ್ಯಕರ್ತರು ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದರು.

ಪಟ್ಟಣದ ವಿವೇಕಾನಂದ ವೃತ್ತದಲ್ಲಿ ಮಾನವ ಸರಪಳಿ ರಚಿಸಿದ ಕಾಂಗ್ರೆಸ್ ಮತ್ತು ಜೆಡಿಎಸ್ ಕಾರ್ಯ ಕರ್ತರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ನಂತರ ಪಟ್ಟಣದ ಮುಖ್ಯ ಬೀದಿಗಳಲ್ಲಿ ಮೆರವಣಿಗೆ ಮೂಲಕ ತೆರಳಿ ತಾಲೂಕು ಕಚೇರಿ ಬಳಿ ಪ್ರತಿಭಟನೆ ನಡೆಸಿ, ತಹಶೀಲ್ದಾರರ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದರು.

ಕಾಂಗ್ರೆಸ್ ಮುಖಂಡ ಡಿ.ಕೆ. ಶಿವಕುಮಾರ್ ಬಂಧನ ದ್ವೇಷದ ರಾಜ ಕಾರಣವೆಂದು ಆಕ್ರೋಶ ವ್ಯಕ್ತಪಡಿಸಿದ ಕಾರ್ಯಕರ್ತರು, ದೇಶದಲ್ಲಿ ಆರ್ಥಿಕ ವ್ಯವಸ್ಥೆ ಸಂಪೂರ್ಣ ಹದಗೆಡಲು ಬಿಜೆಪಿ ಸರ್ಕಾರವೇ ಕಾರಣವೆಂದು ದೂರಿದರು.

ಪ್ರತಿಭಟನೆಯಲ್ಲಿದ್ದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಕೆ. ಮಂಜುನಾಥ್ ಕುಮಾರ್ ಮಾತನಾಡಿ, ಕೇಂದ್ರ ಮತ್ತು ರಾಜ್ಯದಲ್ಲಿ ಅಸ್ತಿತ್ವದಲ್ಲಿರುವ ಬಿಜೆಪಿ ಸರ್ಕಾರವು ದ್ವೇಷದ ರಾಜಕಾರಣ ಮಾಡುವ ಮೂಲಕ ವಿಪಕ್ಷಗಳನ್ನು ಹತ್ತಿಕ್ಕುವ ಯತ್ನ ನಡೆಸುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಕೇಂದ್ರ ಸರ್ಕಾರದ ಅಧೀನದಲ್ಲಿ ರುವ ಇ.ಡಿ., ಐ.ಟಿ, ಸಿಬಿಐ ಸಂಸ್ಥೆ ಗಳನ್ನು ಸರ್ಕಾರ ದುರುಪಯೋಗ ಪಡಿಸಿಕೊಳ್ಳುತ್ತಿದೆ. ಸ್ಥಳೀಯವಾಗಿ ರೌಡಿಗಳ ಮೂಲಕ ಬೆದರಿಕೆ ಹಾಕಲಾಗುತ್ತಿದೆ. ಇಂತಹ ಸಂವಿಧಾನ ವಿರೋಧಿ ನೀತಿಯನ್ನು ಜನರು ಖಂಡಿಸ ಬೇಕು ಎಂದು ಅಭಿಪ್ರಾಯಿಸಿದರು.

ಪ್ರಾಕೃತಿಕ ವಿಕೋಪದಿಂದ ಜಿಲ್ಲೆಯಲ್ಲಿ ಸಂತ್ರಸ್ತರು ಸಂಕಷ್ಟಕ್ಕೆ ಸಿಲುಕಿದ್ದು, ಇಲ್ಲಿನ ಶಾಸಕರುಗಳು ನಾಟಕ ಮಾಡುವದರಲ್ಲೇ ಕಾಲ ಕಳೆದಿದ್ದಾರೆ. ಸರ್ಕಾರದಿಂದ ಸೂಕ್ತ ಪರಿಹಾರ ಕೊಡಿಸುವಲ್ಲಿ ವಿಫಲರಾಗಿದ್ದಾರೆ ಎಂದು ದೂರಿದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಎಂ. ಲೋಕೇಶ್ ಮಾತನಾಡಿ, ಕೇಂದ್ರ ಸರ್ಕಾರವು ವರ್ಷಕ್ಕೆ 2ಕೋಟಿ ಉದ್ಯೋಗವನ್ನು ನೀಡುತ್ತೇವೆಂದು ಭರವಸೆ ನೀಡಿತ್ತು. ಆದರೆ ಮೂರು ಲಕ್ಷ ಯುವಕರು ಈಗಾಗಲೇ ಉದ್ಯೋಗ ಕಳೆದುಕೊಂಡಿದ್ದಾರೆ. ಜಿ.ಎಸ್.ಟಿ., ನೋಟು ಅಮಾನ್ಯ ದಿಂದಾಗಿ ದೇಶದ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದ್ದು ಸಾವಿರಾರು ಸಣ್ಣಕೈಗಾರಿಕೆಗಳು ಮುಚ್ಚಿಹೋಗಿವೆ ಎಂದು ದೂರಿದರು.

ಪ್ರತಿಭಟನೆಯಲ್ಲಿ ಜಿಲ್ಲಾ ಪಂಚಾಯತ್ ಸದಸ್ಯೆ ಕೆ.ಪಿ.ಚಂದ್ರಕಲಾ, ಜೆ.ಡಿ.ಎಸ್. ಕ್ಷೇತ್ರ ಸಮಿತಿ ಅಧ್ಯಕ್ಷ ಎಚ್.ಆರ್. ಸುರೇಶ್, ಕಾಂಗ್ರೆಸ್ ಮುಖಂಡರಾದ ಕೆ.ಎ.ಆದಂ, ಮಿಥುನ್ ಹಾನಗಲ್, ಕೆ.ಎ.ಯಾಕುಬ್, ಟಿ.ಈ. ಸುರೇಶ್, ಎಂ.ಡಿ.ರಮೇಶ್, ಬಿ.ಇ. ಜಯೇಂದ್ರ, ಮಂಜುಳಾ ಹರೀಶ್, ಎಚ್.ಎ. ನಾಗರಾಜ್, ಜನಾರ್ದನ್, ಜೆಡಿಎಸ್ ಪ್ರಮುಖರಾದ ಅನಿಲ್‍ಕುಮಾರ್, ಸಿ.ಎನ್.ಅಶ್ವಥ್, ಕೆ.ಟಿ. ಪರಮೇಶ್ ಮತ್ತಿತರರು ಭಾಗವಹಿಸಿದ್ದರು.