ಮಡಿಕೇರಿ, ಸೆ. 12 : ಕೊಡಗು ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ಇತ್ತೀಚೆಗೆ ಸಂಭವಿಸಿದ ಪ್ರಾಕೃತಿಕ ವಿಕೋಪದಿಂದ ಸಂಕಷ್ಟಕ್ಕೆ ಸಿಲುಕಿರುವ ಸಂತ್ರಸ್ತರಿಗೆ ಪುನರ್ವಸತಿ ಕಲ್ಪಿಸುವಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿ ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿ ನಗರದಲ್ಲಿ ಪ್ರತಿಭಟನೆ ನಡೆಸಿತು.

ಜಿಲ್ಲಾಧಿಕಾರಿ ಕಚೇರಿ ಎದುರು ಜಮಾಯಿಸಿದ ಕಾಂಗ್ರೆಸ್ ಪ್ರಮುಖರು, ಕಾರ್ಯಕರ್ತರು ಹಾಗೂ ವಿವಿಧ ಗ್ರಾಮಗಳ ಸಂತ್ರಸ್ತರು ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.

ಈ ಸಂದರ್ಭ ಮಾತನಾಡಿದ ವಿಧಾನ ಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ, ಕಳೆದ ವರ್ಷ ಕೇರಳ ರಾಜ್ಯ ಹಾಗೂ ಕೊಡಗು ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಸಾವು, ನೋವುಗಳು ಸಂಭವಿಸಿತ್ತು. ಆದರೆ ಪ್ರಧಾನಮಂತ್ರಿ ನರೇಂದ್ರಮೋದಿ ಅವರು ಕೇವಲ ಕೇರಳಕ್ಕೆ ಮಾತ್ರ ಭೇಟಿ ನೀಡಿದ್ದರು. ಈ ಬಾರಿಯೂ ಕೊಡಗಿಗೆ ಭೇಟಿ ನೀಡಿಲ್ಲ. ಸಂಸದ ಪ್ರತಾಪ್ ಸಿಂಹ ಅವರು ಕೂಡ ನಿರ್ಲಕ್ಷಿಸುತ್ತಿದ್ದಾರೆ ಎಂದು ದೂರಿದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಕೆ.ಮಂಜುನಾಥ್ ಕುಮಾರ್ ಮಾತನಾಡಿ, ಕಾಂಗ್ರೆಸ್ ಪಕ್ಷದ ವತಿಯಿಂದ ಸಂತ್ರಸ್ತರಿಗೆ ಬೇಕಾದ ಅಗತ್ಯ ವಸ್ತುಗಳನ್ನು ನೀಡಲಾಗಿದೆ ಮತ್ತು ಹಾನಿಗೊಳಗಾದ ಬಹುತೇಕ ಪ್ರದೇಶಗಳಿಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಲಾಗಿದೆ ಎಂದರು.

ಪ್ರತಿಭಟನೆಯಲ್ಲಿ ಕೆ.ಪಿ.ಸಿ.ಸಿ. ಹಿರಿಯ ಮುಖಂಡ ಮಿಟ್ಟುಚಂಗಪ್ಪ, ಸದಸ್ಯ ಜೋಸೆಫ್ ಶ್ಯಾಂ, ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷÀ ಅಪ್ರು ರವೀಂದ್ರ, ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಕಲ್ ರಮಾನಾಥ್, ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷರಾದ ಸುರಯ್ಯ ಅಬ್ರಹಾರ್, ರಾಹುಲ್ ಬ್ರಿಗೇಡ್‍ನ ಅಧ್ಯಕ್ಷ ಚುಮ್ಮಿದೇವಯ್ಯ, ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಯೋಜಕÀ ತೆನ್ನಿರಾ ಮೈನಾ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿ.ಪಿ.ಸುರೇಶ್, ನಗರ ಕಾಂಗ್ರೆಸ್ ಅಧ್ಯಕ್ಷ ಅಬ್ದುಲ್ ರಜಾಕ್, ಪ್ರಧಾನ ಕಾರ್ಯದರ್ಶಿ ಆರ್.ಪಿ.ಚಂದ್ರಶೇಖರ್, ಡಿ.ಸಿ.ಸಿ. ಉಪಾಧ್ಯಕ್ಷÀ ಸುನಿಲ್ ಪತ್ರವೋ, ಸಾಮಾಜಿಕ ಜಾಲತಾಣದ ಅಧ್ಯಕ್ಷ ಹೊಸೂರು ಸೂರಜ್, ನಗರ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪಾರ್ವತಿ ಫ್ಯಾನ್ಸಿ, ಜಿ.ಪಂ. ಸದಸ್ಯೆ ಸುನಿತ ಮಂಜುನಾಥ್ ಸೇರಿದಂತೆ ವಿವಿಧ ಗ್ರಾಮಗಳ ಸಂತ್ರಸ್ತರು ಪಾಲ್ಗೊಂಡಿದ್ದರು.