ಮಡಿಕೇರಿ, ಸೆ.17: ಮಡಿಕೇರಿ ಜನೋತ್ಸವ ದಸರಾ ಸಮೀಪಿಸುತಿದ್ದು, ವಿವಿಧ ಇಲಾಖೆಗಳು ಅಗತ್ಯ ತಯಾರಿ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಸೂಚಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ದಸರಾ ಸಿದ್ಧತೆ ಬಗ್ಗೆ ಮಂಗಳವಾರ ಅಧಿಕಾರಿಗಳ ಜತೆ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ನಗರದಲ್ಲಿ ವಿಶಿಷ್ಟ ಹಾಗೂ ಸಾಂಪ್ರದಾಯಿಕವಾಗಿ ಜನೋತ್ಸವ ದಸರಾ ನಡೆಯಲಿದ್ದು, ವಿವಿಧ ಇಲಾಖೆಯ ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯ ನಿರ್ವಹಿಸಬೇಕು. ಸಾರ್ವಜನಿಕರಿಗೆ ಯಾವದೇ ರೀತಿಯ ತೊಂದರೆಯಾಗದಂತೆ ನೋಡಿಕೊಳ್ಳುವದು ಪ್ರಥಮ ಆದ್ಯತೆಯಾಗಬೇಕು ಎಂದರು. ದಸರಾ ಸಂದರ್ಭದಲ್ಲಿ ವಾಹನ ನಿಲುಗಡೆಗೆ ಸೂಕ್ತ ವ್ಯವಸ್ಥೆ ಮಾಡುವದು, ಆಂಬ್ಯುಲೆನ್ಸ್ ಹಾಗೂ ತುರ್ತು ಆರೋಗ್ಯ ಸೇವೆ ಕಲ್ಪಿಸುವದು, ಅಗ್ನಿಶಾಮಕ ದಳದ ಸಿಬ್ಬಂದಿ ಅಗತ್ಯ ಸೇವೆ ಒದಗಿಸುವದು, ಮಹಿಳಾ ಸ್ವಸಹಾಯ ತಂಡಗಳಿಗೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಅನುಕೂಲವಾಗುವಂತೆ ಅಗತ್ಯ ಕ್ರಮವಹಿಸುವ ಬಗ್ಗೆ ಸಂಬಂಧಪಟ್ಟ ಇಲಾಖೆಗಳು ಗಮನಹರಿಸಬೇಕು.

ಕೆಎಸ್‍ಆರ್‍ಟಿಸಿ ವತಿಯಿಂದ ಹೆಚ್ಚುವರಿ ವಿಶೇಷ ಬಸ್ಸು ಓಡಾಟಕ್ಕೆ ಅವಕಾಶ ನೀಡುವದು, ರಾಜಸೀಟು ಉದ್ಯಾನವನ ಸೇರಿದಂತೆ ಸರ್ಕಾರಿ ಕಚೇರಿಗಳ ಕಟ್ಟಡಗಳಿಗೆ ಮೂರ ದಿನಗಳ ಕಾಲ ದೀಪಾಲಂಕಾರ ಮಾಡುವದು, ಸೇರಿದಂತೆ ಹಲವು ರೀತಿಯ ಕಾರ್ಯಕ್ರಮ ಆಯೋಜನೆಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸಲಹೆ ನೀಡಿದರು.

ದಸರಾ ಸಮಿತಿ ಕಾರ್ಯಧ್ಯಕ್ಷರಾದ ರಾಬಿನ್ ದೇವಯ್ಯ ಅವರು ಮಾತನಾಡಿ ಮಡಿಕೇರಿ ಜನೋತ್ಸವ ದಸರಾ ಸಂಬಂಧ ಈಗಾಗಲೇ ವಿವಿಧ ಸಮಿತಿಗಳನ್ನು ರಚಿಸಲಾಗಿದ್ದು, ಸಮಿತಿಗಳ ಜೊತೆಗೆ ವಿವಿಧ ಇಲಾಖೆಗಳ ಅಧಿಕಾರಿಗಳ ಸಹಕಾರ ಅತ್ಯಗತ್ಯವಾಗಿದೆ ಎಂದು ಮನವಿ ಮಾಡಿದರು.

ಸಮಿತಿ ಪ್ರಧಾನ ಕಾರ್ಯದರ್ಶಿ ಜಗದೀಶ್, ಪೌರಯುಕ್ತ ಎಂ.ಎಲ್.ರಮೇಶ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಧಿಕಾರಿ ಡಾ ಕೆ.ಮೋಹನ್, ಡಿಡಿಪಿಐ ಮಚ್ಚಾಡೋ, ಮಹಿಳಾ ಮತ್ತು

(ಮೊದಲ ಪುಟದಿಂದ) ಮಕ್ಕಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕಿ ಕೆ.ರಾಧ, ಅಗ್ನಿಶಾಮಕ ಅಧಿಕಾರಿ ಚಂದನ್, ತೋಟಾಗಾರಿಕೆ ಇಲಾಖೆ ಉಪ ನಿರ್ದೇಶಕ ಚಂದ್ರಶೇಖರ್, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಕೆಂಚಪ್ಪ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಕೆ.ಟಿ.ದರ್ಶನ್, ಪೊಲೀಸ್ ಇನ್ಸ್‍ಪೆಕ್ಟರ್ ಅನೂಪ್ ಮಾದಪ್ಪ, ನಗರಸಭೆ ಇಂಜಿನಿಯರ್ ನಾಗರಾಜು, ವನಿತಾ, ಪ್ರಾದೇಶಿಕ ಸಾರಿಗೆ, ಸೆಸ್ಕ್, ಬಿಎಸ್‍ಎನ್‍ಎಲ್ ಅಧಿಕಾರಿಗಳು ಇತರರು ಇದ್ದರು.