ಮಡಿಕೇರಿ, ಸೆ. 25: ಐತಿಹಾಸಿಕ ಮಡಿಕೇರಿ ದಸರಾ ಜನೋತ್ಸವದ ಪ್ರಯುಕ್ತ ನಗರ ದಸರಾ ಸಮಿತಿ ಮತ್ತು ದಸರಾ ಕ್ರೀಡಾ ಸಮಿತಿ ವತಿಯಿಂದ ಆಯೋಜಿಸಲಾಗಿರುವ ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿ ಮತ್ತು ವುಶು ಕ್ರೀಡಾಕೂಟ ತಾ. 28 ರಂದು ನಡೆಯಲಿದೆ ಎಂದು ಕ್ರೀಡಾ ಸಮಿತಿಯ ಪ್ರಧಾನ ಕಾರ್ಯದರ್ಶಿ ಕಪಿಲ್ ದುಗ್ಗಳ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಗ್ಗೆ 10.30ಕ್ಕೆ ನಗರದ ಜನರಲ್ ತಿಮ್ಮಯ್ಯ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯುವ ಪಂದ್ಯಾವಳಿಗೆ ಮಡಿಕೇರಿ ನಗರ ಪೊಲೀಸ್ ಠಾಣೆಯ ವೃತ್ತ ನಿರೀಕ್ಷಕ ಅನೂಪ್ ಮಾದಪ್ಪ ಚಾಲನೆ ನೀಡಲಿದ್ದಾರೆ ಎಂದರು.

ಅಂದು ಸಂಜೆ 5.30ಕ್ಕೆ ಪಂದ್ಯಾವಳಿಯ ಸಮಾರೋಪ ಸಮಾರಂಭ ನಡೆಯಲಿದೆ. ಅ. 5 ರಂದು ಬೆಳಗ್ಗೆ 10.30 ಗಂಟೆಗೆ ಟೇಬಲ್ ಟೆನ್ನಿಸ್ ಪಂದ್ಯಾವಳಿಯನ್ನು ಆಯೋಜಿಸಲಾಗಿದೆ ಎಂದರು.

ತಾ. 28 ರಂದು ವುಶು ಆಕರ್ಷಣೆÉ

ರಾಜ್ಯ ವುಶು ತರಬೇತುದಾರ ಎನ್.ಸಿ.ಸುದರ್ಶನ್ ಮಾತನಾಡಿ, ತಾ. 28 ರಂದು ಬೆಳಗ್ಗೆ 10 ಗಂಟೆಗೆ ನಗರದ ಪೊಲೀಸ್ ಸಮುದಾಯ ಭವನ (ಮೈತ್ರಿ ಹಾಲ್)ನಲ್ಲಿ ವುಶು ಕ್ರೀಡಾಕೂಟ ನಡೆಯಲಿದೆ ಎಂದರು. ಅಂದು ಸಂಜೆ 5.30ಕ್ಕೆ ಸಮಾರೋಪ ಸಮಾರಂಭ ನಡೆಯಲಿದೆ ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ದಸರಾ ಸಮಿತಿಯ ಉಪಾಧ್ಯಕ್ಷ ಪ್ರಭು ರೈ, ರಾಜೇಶ್ ಕುಯ್ಯಮುಡಿ ಹಾಗೂ ದಸರಾ ಕ್ರೀಡಾ ಸಮಿತಿ ಅಧ್ಯಕ್ಷ ಬಿ.ಎಂ. ಹರೀಶ್ ಉಪಸ್ಥಿತರಿದ್ದರು.