ವೀರಾಜಪೇಟೆ, ಸೆ. 26: ಮಾನವ ಸಂಪನ್ಮೂಲಗಳು ಸದೃಢವಾಗಿದ್ದರೆ ದೇಶವೂ ಸದೃಢವಾಗಿರಲು ಸಾಧ್ಯ. ಇಂದು ತಾಯಿ ಹಾಗೂ ಮಗುವಿನ ಆರೋಗ್ಯದ ದೃಷ್ಟಿಯಿಂದ ಪೌಷ್ಟಿಕ ಆಹಾರಗಳನ್ನು ಸೂಕ್ತ ಸಮಯದಲ್ಲಿ ಸರಿಯಾಗಿ ಒದಗಿಸುವದು ಮುಖ್ಯವಾಗಿದೆ ಎಂದು ವೀರಾಜಪೇಟೆ ಸಮುಚ್ಚಯ ನ್ಯಾಯಾಲಯದ ಹಿರಿಯ ಸಿವಿಲ್ ನ್ಯಾಯಾಧೀಶ ಡಿ.ಆರ್. ಜಯಪ್ರಕಾಶ್ ಹೇಳಿದರು.

ವೀರಾಜಪೇಟೆ ತಾಲೂಕು ಕಾನೂನು ಸೇವೆಗಳ ಸಮಿತಿ, ಪೊನ್ನಂಪೇಟೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಬಿಟ್ಟಂಗಾಲದ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ರಾಷ್ಟ್ರೀಯ ಪೌಷ್ಟಿಕ ಆಹಾರ ಸಪ್ತಾಹ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿ ಅವರು ಮಾತನಾಡಿದರು. ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಎಲ್ಲಾ ಕುಟುಂಬ ವರ್ಗದವರಿಗೆ ಪೌಷ್ಟಿಕ ಆಹಾರವನ್ನು ಒದಗಿಸಲು ಯೋಜನೆಯೊಂದನ್ನು ಕಾರ್ಯಗತಗೊಳಿಸಿರುವದನ್ನು ಜನರು ಸದುಪಯೋಗ ಪಡಿಸಿಕೊಳ್ಳುವಂತಾಗಬೇಕು ಎಂದರು.

ಬಿಟ್ಟಂಗಾಲ ಗ್ರಾಮ ಪಂಚಾಯಿತಿ ಅಧ್ಯಕ್ಷ ಪುಚ್ಚಿಮಂಡ ಬೆಳ್ಳಿಯಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆದ ರಾಷ್ಟ್ರೀಯ ಪೌಷ್ಟಿಕಾಂಶ ಸಪ್ತಾಹ ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಜಿಲ್ಲಾ ಪಂಚಾಯಿತಿ ಸದಸ್ಯೆ ಭವ್ಯ, ವಕೀಲರ ಸಂಘದ ಅಧ್ಯಕ್ಷ ಎಂ.ಎಂ. ನಂಜಪ್ಪ, ಮಹಿಳಾ ಮತ್ತು ಮಕ್ಕಳ ಕಲ್ಯಾಣಾಧಿüಕಾರಿ ಸೀತಾಲಕ್ಷ್ಮಿ ಸಭೆಯಲ್ಲಿ ಮಾತನಾಡಿದರು. ವೇದಿಕೆಯಲ್ಲಿ ತಾಲೂಕು ಪಂಚಾಯಿತಿ ಸದಸ್ಯ ರಾಜು, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸ್ವರೂಪ ಮತ್ತಿತರರು ಉಪಸ್ಥಿತರಿದ್ದರು.