ಸುಂಟಿಕೊಪ್ಪ, ಸೆ. 28: ಸರಕಾರದ ನೂತನ ಆದೇಶದನ್ವಯ ಇದೇ ಪ್ರಥಮ ಬಾರಿಗೆ ಸುಂಟಿಕೊಪ್ಪ ಗ್ರಾಮ ಪಂಚಾಯಿತಿ ವತಿಯಿಂದ ಪಂಚಾಯಿತಿ ವ್ಯಾಪ್ತಿಯ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯನ್ನು ನಡೆಸಲಾಯಿತು. ಪ್ರಗತಿ ಪರಿಶೀಲನಾ ಸಮಿತಿಯ ಅಧ್ಯಕ್ಷರೂ ಆದ ರೋಸ್ ಮೇರಿ ರಾಡ್ರಿಗಸ್ ಅವರ ಅಧ್ಯಕ್ಷತೆಯಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ನಡೆಯಿತು. ಪ್ರಸ್ತಾವಿಕವಾಗಿ ಮಾತನಾಡಿದ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಾದ ಬಿ.ಹೆಚ್. ವೇಣುಗೋಪಾಲ್ ರವರು ಕೆ.ಡಿ.ಪಿ. ಸಭೆಗೆ ಗೈರಾದ ಅಧಿಕಾರಿಗಳ ವಿರುದ್ಧ ಮೇಲಧಿಕಾರಿಗಳ ಗಮನಕ್ಕೆ ತಂದು ನೋಟೀಸ್ ಜಾರಿಗೊಳಿಸುವದಾಗಿ ತಿಳಿಸಿದರು. ಪಂಚಾಯಿತಿ ಮಟ್ಟದಲ್ಲಿ ಕೆ.ಡಿ.ಪಿ. ಸಭೆ ನಡೆಯುವದರಿಂದ ಇಲಾಖಾಧಿಕಾರಿಗಳು ಅಗತ್ಯ ಸಿದ್ಧತೆಗಳೊಂದಿಗೆ ಸಭೆಗೆ ಆಗಮಿಸಿ ಮಾಹಿತಿಯನ್ನು ಒದಗಿಸಬೇಕಾಗುತ್ತದೆ ಎಂದರು. ವಿವಿಧ ಇಲಾಖೆಯ ಅಧಿಕಾರಿಗಳು, ಅಂಗನವಾಡಿ ಕಾರ್ಯಕರ್ತೆಯರು, ಪಂಚಾಯಿತಿ ಉಪಾಧ್ಯಕ್ಷ ಪಿ.ಆರ್. ಸುಕುಮಾರ್ ಮತ್ತಿತರರು ಇದ್ದರು.