*ಗೋಣಿಕೊಪ್ಪಲು, ಸೆ. 29: ಹಾತೂರು, ಕುಂದ ಗ್ರಾಮದ ಬಸವೇಶ್ವರ ಬಡಾವಣೆ ನಿವಾಸಿಗಳಿಗೆ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿಕೊಡಲು ಸೂಕ್ತ ಕ್ರಮ ಕೈಗೊಳ್ಳಲಾಗುವದು ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಭರವಸೆ ನೀಡಿದರು.

ಕುಂದಾ ಗ್ರಾಮದಲ್ಲಿ ನೂತನವಾಗಿ ರಚನೆಗೊಂಡಿರುವ ಬುಡಕಟ್ಟು ಜನರ ಬಡಾವಣೆಗೆ ಭೇಟಿ ನೀಡಿ ಅಲ್ಲಿನ ಸಮಸ್ಯೆಗಳನ್ನು ಪರಿಶೀಲಿಸಿದರು. ನಂತರ ತಕ್ಷಣವೇ ಇಲ್ಲಿನ 120 ಕುಟುಂಬಗಳಿಗೆ ಕುಡಿಯುವ ನೀರಿನ ವ್ಯವಸ್ಥೆಗೆ ಮತ್ತು ವಿದ್ಯುತ್ ಸಂಪರ್ಕಕ್ಕೆ ಕ್ರಮ ಕೈಗೊಳ್ಳಲಾಗುವದು. ಅಲ್ಲದೇ ಹಂತ ಹಂತವಾಗಿ ಮನೆ ನಿರ್ಮಾಣಕ್ಕೆ ಮುಂದಾಗುವದಾಗಿ ಇದಕ್ಕೆ ಅಧಿಕಾರಿಗಳು ಶೀಘ್ರ ಕ್ರಮ ಕೈಗೊಂಡು ಕಾಮಗಾರಿಗಳ ಪ್ರಗತಿಗೆ ಮುಂದಾಗಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು. ಈ ಸಂದರ್ಭ ಜಿ.ಪಂ. ಕಾರ್ಯ ನಿರ್ವಹಣಾಧಿಕಾರಿ ಲಕ್ಷ್ಮಿಪ್ರಿಯ, ತಾ.ಪಂ. ಕಾರ್ಯನಿರ್ವಹಣಾದಿಕಾರಿ ಷÀಣ್ಮುಗ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಹಾಜರಿದ್ದರು. ಇದೇ ಸಂದರ್ಭ ಗೋಣಿಕೊಪ್ಪಲುವಿನ ಕೀರೆ ಹೊಳೆ ದಡದಲ್ಲಿ ವಾಸಿಸುತ್ತಿರುವ ನಿವಾಸಿಗಳ ಮತ್ತು ಪೌರ ಕಾರ್ಮಿಕರ ಸಮಸ್ಯೆಗಳನ್ನು ಆಲಿಸಿ ಅವರುಗಳು ವಾಸಿಸುವ ಸ್ಥಳವನ್ನು ಪರಿಶೀಲಿಸಿ ಶೀಘ್ರ ಸಮಸ್ಯೆಗೆ ಪರಿಹಾರ ಕಲ್ಪಿಸುವದಾಗಿ ಜಿಲ್ಲಾಧಿಕಾರಿಗಳು ತಿಳಿಸಿದರು. ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷ ಸಿ.ಕೆ. ಬೋಪಣ್ಣ ಸೇರಿದಂತೆ ಗ್ರಾ.ಪಂ. ಸದಸ್ಯರುಗಳು ಹಾಜರಿದ್ದರು.