ಸೋಮವಾರಪೇಟೆ, ಅ. 1: ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲು ತಾಲೂಕು ಆಡಳಿತ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಿದ್ದತೆ ನಡೆಸಿದೆ.

ತಾಲೂಕು ಕಚೇರಿ ಸಭಾಂಗಣದಲ್ಲಿ ತಹಶೀಲ್ದಾರ್ ಗೋವಿಂದರಾಜು ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ನಡೆಯಿತು. ತಾ. 13 ರಂದು ನಡೆಯಲಿರುವ ಕಾರ್ಯಕ್ರಮವನ್ನು ಕುಶಾಲನಗರದ ವಾಲ್ಮೀಕಿ ಸಮುದಾಯ ಭವನದಲ್ಲಿ ನಡೆಸಲು ತೀರ್ಮಾನಿಸಲಾಯಿತು. ಕಾರ್ಯಕ್ರಮಕ್ಕೆ ಶಾಸಕರು, ಜನಪ್ರತಿನಿಧಿಗಳನ್ನು ಆಹ್ವಾನಿಸುವದು ಹಾಗೂ ಸಮುದಾಯದ ಸಹಕಾರದೊಂದಿಗೆ ಸಾಂಸ್ಕøತಿಕ ಕಾರ್ಯಕ್ರಮ ಸೇರಿದಂತೆ 2018/19ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ಹಾಗೂ ಪಿ.ಯು.ಸಿ ಯಲ್ಲಿ ಹೆಚ್ಚಿನ ಅಂಕಗಳಿಸಿದ ವಾಲ್ಮೀಕಿ ಸಮುದಾಯದ ತಲಾ ಇಬ್ಬರು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಸಾಧನೆ ತೋರಿದ ಒಬ್ಬರನ್ನು ಸನ್ಮಾನಿಸುವಂತೆ ತೀರ್ಮಾನಿಸಲಾಯಿತು. ಕಾರ್ಯಕ್ರಮದಂದು ಸಾಮಾಜಿಕ ಅರಣ್ಯ ಇಲಾಖೆ ವತಿಯಿಂದ ಗಿಡನೆಡುವ ಬಗ್ಗೆ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಯಿತು.

ಸಭೆಯಲ್ಲಿ ಸಮಾಜಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಶೇಖರ್, ಕೃಷಿ ಇಲಾಖೆ ಸಹಾಯಕ ನಿರ್ದೇಶಕ ರಾಜಶೇಖರ್, ಸಾಮಾಜಿಕ ಅರಣ್ಯ ಇಲಾಖೆ ಆರ್.ಎಫ್.ಒ. ನಮನ್, ಬಿ.ಇ.ಒ ಕಚೇರಿ ಅಧೀಕ್ಷಕ ಚನ್ನಪ್ಪ, ವಿಮಲ, ರವೀಂದ್ರ, ಬಾಲಕೃಷ್ಣ ರೈ, ಧರ್ಮಮ್ಮ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಪಾಲ್ಗೊಂಡಿದ್ದರು.