ಮಡಿಕೇರಿ, ಅ.2: ಜಿಲ್ಲಾ ಮತ್ತು ತಾಲೂಕು ಮಟ್ಟದ ಎಲ್ಲಾ ಸರ್ಕಾರಿ ಕಚೇರಿಗಳು ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧಿತ ಪ್ರದೇಶ ಎಂಬ ಫಲಕವನ್ನು ಕಡ್ಡಾಯವಾಗಿ ಅಳವಡಿಸಲು ಕ್ರಮಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿ ಡಾ.ಸ್ನೇಹಾ ಸೂಚನೆ ನೀಡಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಜಿಲ್ಲಾ ತಂಬಾಕು ನಿಯಂತ್ರಣ ಘಟಕದ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ಶಿಕ್ಷಣ, ಪ್ರವಾಸೋದ್ಯಮ, ಆರೋಗ್ಯ ಇಲಾಖೆ ಜಂಟಿಯಾಗಿ ತಂಬಾಕು ಬಳಕೆ ನಿಯಂತ್ರಣಕ್ಕೆ ನಿಯಮಗಳನ್ವಯ ಕಾರ್ಯನಿರ್ವಹಿಸುವಂತೆ ಸೂಚಿಸಿದರು.

ಎಲ್ಲಾ ಶಾಲಾ- ಕಾಲೇಜು ವ್ಯಾಪ್ತಿಯಲ್ಲಿ ತಂಬಾಕು ಉತ್ಪನ್ನಗಳ ಮಾರಾಟ ನಿಯಂತ್ರಣದ ಬಗ್ಗೆ ಮಾಹಿತಿಯನ್ನು ಪ್ರಕಟಿಸುವಂತೆ ನಿರ್ದೇಶಿಸಿದರು.

ವಿದ್ಯಾರ್ಥಿಗಳಿಗೆ ತಂಬಾಕಿನಿಂದ ಆಗುವ ದುಷ್ಪರಿಣಾಮಗಳ ಕುರಿತು ಹೆಚ್ಚು ಅರಿವು ಮೂಡಿಸುವಂತೆ ಸಲಹೆ ನೀಡಿದರು.

ಪ್ರವಾಸಿ ತಾಣಗಳಲ್ಲಿ ಕೂಡ ಪ್ರವಾಸೋದ್ಯಮ ಇಲಾಖೆ ವತಿಯಿಂದ ಧೂಮಪಾನ ನಿಷೇಧಿತ ಪ್ರದೇಶವೆಂಬ ಫಲಕಗಳನ್ನು ಕಡ್ಡಾಯವಾಗಿ ಅಳವಡಿಸಲು ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕರಿಗೆ ಸೂಚನೆ ನೀಡಿದರು.

ನಗರಸಭೆ, ಪಟ್ಟಣ ಪಂಚಾಯಿತಿ ವ್ಯಾಪ್ತಿಗಳಲ್ಲಿ ಅಂಗಡಿಗಳ ಪರವಾನಗಿ ನೀಡುವ ಸಂದರ್ಭದಲ್ಲಿ ಕೋಟ್ಪಾ ಕಾಯ್ದೆಯ ಮಾನದಂಡದಂತೆ ಪರವಾನಗಿ ನೀಡಲು ಕ್ರಮಕೈಗೊಳ್ಳುವಂತೆ ಸ್ಥಳೀಯ ಸಂಸ್ಥೆ ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿ ಸೂಚನೆ ನೀಡಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಮೋಹನ್ ಅವರು ಕಳೆದ ಸಭೆಯ ಅನುಪಾಲನಾ ವರದಿಯ ಮಾಹಿತಿಯನ್ನು ಸಭೆಗೆ ನೀಡಿದರು.

ಜಿಲ್ಲಾ ತಂಬಾಕು ನಿಯಂತ್ರಣ ಕೋಶ, ಕಾರ್ಯಕ್ರಮಾಧಿಕಾರಿ ಡಾ.ಶಿವಕುಮಾರ್ ಜಿಲ್ಲೆಯಲ್ಲಿ ತಂಬಾಕು ಬಳಕೆ ತಡೆ ನಿಯಂತ್ರಣಕ್ಕೆ ನಡೆಸಿರುವ ಜಾಗೃತಿ ಕಾರ್ಯಕ್ರಮಗಳು, ಗುಂಪು ಸಭೆಗಳ ಕುರಿತು ಹಾಗೂ ತಂಬಾಕು ವ್ಯಸನ ಮುಕ್ತ ಕೇಂದ್ರದಲ್ಲಿ ದೊರೆಯುವ ಸೌಲಭ್ಯಗಳ ಕುರಿತು ಸಭೆಗೆ ಮಾಹಿತಿ ನೀಡಿದರು.

ಸಭೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಮಚ್ಚಾಡೋ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಕೆಂಚಪ್ಪ, ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕರಾದ ರಾಘವೇಂದ್ರ, ಪೊಲೀಸ್ ಇನ್‍ಸ್ಪೆಕ್ಟರ್ ಜಯರಾಮ್, ತಾಲೂಕು ಕಾರ್ಮಿಕ ಅಧಿಕಾರಿ ಯತ್ನಟಿ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಆಡಳಿತ ಸಹಾಯಕರಾದ ಜಯಪ್ಪ, ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಸಿಬ್ಬಂದಿಗಳು, ವಿವಿಧ ಇಲಾಖೆಯ ಅಧಿಕಾರಿಗಳು, ಇತರರು ಇದ್ದರು.