ಮಡಿಕೇರಿ, ಅ. 2: ಮಕ್ಕಳಂತೆ ಹಿರಿಯರನ್ನು ಹೆಚ್ಚಿನ ನಿಗಾವಹಿಸಿ ನೋಡಿಕೊಳ್ಳುವಂತಾಗಬೇಕು. ಇದರಿಂದ ಕುಟುಂಬದಲ್ಲಿ ನೆಮ್ಮದಿ ಬದುಕು ನಡೆಸಬಹುದು ಎಂದು ಜಿ.ಪಂ. ಅಧ್ಯಕ್ಷ ಬಿ.ಎ.ಹರೀಶ್ ಅವರು ಅಭಿಪ್ರಾಯಪಟ್ಟಿದ್ದಾರೆ.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಯುವಜನ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ, ಕನ್ನಡ ಮತ್ತು ಸಂಸ್ಕøತಿ ಇಲಾಖೆ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಹಿರಿಯ ನಾಗರಿಕರ ಸ್ವಯಂ ಸೇವಾ ಸಂಸ್ಥೆಗಳು ಹಾಗೂ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಮಂಗಳವಾರ ನಗರದ ಶಿಶು ಕಲ್ಯಾಣ ಸಂಸ್ಥೆಯಲ್ಲಿ ನಡೆದ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಹಿರಿಯ ನಾಗರಿಕರ ಸಲಹೆ, ಮಾರ್ಗದರ್ಶನ ಪಡೆದು ಅಭಿವೃದ್ಧಿ ಸಾಧಿಸಬೇಕು. ಹಿರಿಯ ನಾಗರಿಕರಿಗೆ ಸರ್ಕಾರದ ಸೌಲಭ್ಯಗಳನ್ನು ತಲುಪಿಸುವಂತಾಗಬೇಕು ಎಂದು ಅವರು ಸಲಹೆ ಮಾಡಿದರು.

ಜಿ.ಪಂ. ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್ ಅವರು ಮಾತನಾಡಿ ಕುಟುಂಬದಲ್ಲಿ ಶಾಂತಿ, ನೆಮ್ಮದಿಗೆ ಹಿರಿಯರು ಇರಬೇಕು. ಇವರೊಂದಿಗೆ ಮಕ್ಕಳು ಆಟವಾಡಬೇಕು. ಹಿರಿಯರು ಇದ್ದಾಗ ಕುಟುಂಬದಲ್ಲಿ ಸಂತಸ, ಸಂಭ್ರಮ ಇರುತ್ತದೆ ಎಂದು ಅವರು ಅಭಿಪ್ರಾಯಪಟ್ಟರು.

ಹಿರಿಯರು ಆತ್ಮವಿಶ್ವಾಸದಿಂದ ಬದುಕಬೇಕು. ವಯಸ್ಸು ಆಗಿದೆ ಎಂದು ಮನೋಸ್ಥೈರ್ಯ ಕಳೆದುಕೊಳ್ಳಬಾರದು ಎಂದು ಲೋಕೇಶ್ವರಿ ಗೋಪಾಲ್ ಸಲಹೆ ಮಾಡಿದರು.

ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನೂರುನ್ನಿಸ ಅವರು ಮಾತನಾಡಿ ಮಕ್ಕಳನ್ನು ಐಷರಾಮಿ ಬದುಕಿನಲ್ಲಿ ನೋಡಿಕೊಳ್ಳುತ್ತೇವೆ. ಆದರೆ ತಂದೆ ತಾಯಂದಿರನ್ನು ಕಡೆಗಣಿಸುತ್ತೇವೆ. ಇದು ಸರಿಯೇ ಎಂದು ಪ್ರಶ್ನಿಸಿದರು.

ಮಕ್ಕಳನ್ನು ಅಜ್ಜ ಅಜ್ಜಿಯರೊಂದಿಗೆ ಬೆರೆಯಲು ಬಿಡಬೇಕು. ಇತ್ತೀಚಿನ ದಿನಗಳಲ್ಲಿ ಮಕ್ಕಳು ಮೊಬೈಲ್, ಟಿ.ವಿ. ನೋಡುವದರಲ್ಲಿ ತಲ್ಲೀನರಾಗಿರುತ್ತಾರೆ. ಇದು ಒಳ್ಳೆಯ ಬೆಳವಣಿಗೆಯಲ್ಲ ಎಂದು ಅವರು ಹೇಳಿದರು.

ಮಕ್ಕಳಿಗೆ ಮಾನವೀಯ ಮೌಲ್ಯ ಮತ್ತು ಸಂಸ್ಕಾರ ಬೆಳೆಸಲು ಹಿರಿಯರ ಮಾರ್ಗದರ್ಶನ ಅತ್ಯಗತ್ಯ. ಹಿರಿಯರ ಅನುಭವ ಪಡೆದು ಮುಂದೆ ಸಾಗಬೇಕು ಎಂದು ಅವರು ಹೇಳಿದರು.

ವೃದ್ಧಾಶ್ರಮಗಳಲ್ಲಿ ಉತ್ತಮ ಕುಟುಂಬದವರೇ ಇದ್ದಾರೆ. ಆದರೆ ಮಕ್ಕಳು ಸರಿಯಾಗಿ ನೋಡಿಕೊಳ್ಳದೆ ವೃದ್ಧಾಶ್ರಮಕ್ಕೆ ಸೇರುವ ಪರಿಸ್ಥಿತಿ ನಿರ್ಮಾಣವಾಗಿದೆ. ಇದು ದಿನೇ ದಿನೇ ಹೆಚ್ಚಾಗುತ್ತಿದ್ದು, ಈ ಬಗ್ಗೆ ಸಮಾಜ ಯೋಚಿಸಬೇಕಿದೆ ಎಂದರು.

ಹಿರಿಯ ನಾಗರಿಕರ ಹಕ್ಕುಗಳ ಕುರಿತು ವಕೀಲ ಕೆ.ಡಿ. ದಯಾನಂದ ಅವರು ಮಾತನಾಡಿದರು. ವಕೀಲರ ಸಂಘದ ಅಧ್ಯಕ್ಷ ಕೆ.ಎಸ್. ಕವನ್, ಡಿವೈಎಸ್‍ಪಿ ದಿನೇಶ್‍ಕುಮಾರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕಿ ಕೆ. ರಾಧ ಅವರು ಮಾತನಾಡಿದರು.

ಹಿರಿಯರಾದ ಮಾದಪ್ಪ, ನಂಜಪ್ಪ, ಕಾಳಪ್ಪ ಅವರನ್ನು ಸನ್ಮಾನಿಸಲಾಯಿತು. ಜಿಲ್ಲಾ ವಿಕಲಚೇತನ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಅಧಿಕಾರಿ ಆರ್. ಸಂಪತ್‍ಕುಮಾರ್ ಅವರು ಸ್ವಾಗತಿಸಿದರು. ಮಾದಪ್ಪ ಪ್ರಾರ್ಥಿಸಿದರು. ಕಾನೂನು ಸೇವಾ ಪ್ರಾಧಿಕಾರದ ಆಡಳಿತ ಸಹಾಯಕ ಜಯಪ್ಪ ನಿರೂಪಿಸಿ, ವಂದಿಸಿದರು.