ಮಡಿಕೇರಿ, ಅ. 6: ಕೊಡಗಿನ ಮಳೆಹಾನಿ ಸಂತ್ರಸ್ತರನ್ನು ರಾಜ್ಯ ಸರ್ಕಾರ ಸಂಪೂರ್ಣವಾಗಿ ಕಡೆಗಣಿಸಿದೆ ಎಂದು ಆರೋಪಿಸಿರುವ ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾದ ಜಿಲ್ಲಾ ಘಟಕ, ಮುಂದಿನ ಒಂದು ವಾರದ ಒಳಗೆ ತುರ್ತು ಪರಿಹಾರ ಕಾರ್ಯಗಳನ್ನು ಕೈಗೊಳ್ಳದಿದ್ದಲ್ಲಿ ಜಿಲ್ಲಾಧಿಕಾರಿಗಳ ಕಚೇರಿಗೆ ಮುತ್ತಿಗೆ ಹಾಕುವದಾಗಿ ಎಚ್ಚರಿಕೆ ನೀಡಿದೆ.

ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಎಸ್‍ಡಿಪಿಐ ಜಿಲ್ಲಾಧ್ಯಕ್ಷ ಟಿ.ಹೆಚ್. ಅಬೂಬಕ್ಕರ್, ಅ. 11 ರಂದು ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸುವದಾಗಿ ತಿಳಿಸಿದರು.

ಕಳೆದ ಆಗಸ್ಟ್ ತಿಂಗಳಿನಲ್ಲಿ ಸಂಭವಿಸಿದ ಪ್ರಾಕೃತಿಕ ವಿಕೋಪದಿಂದ ಕೊಡಗಿನ ಅನೇಕ ಸಂತ್ರಸ್ತರು ಸಂಕಷ್ಟವನ್ನು ಎದುರಿಸುತ್ತಿದ್ದಾರೆ. ಆದರೆ ಪರಿಹಾರವನ್ನು ಬಿಡುಗಡೆಗೊಳಿಸಬೇಕಾದ ಜವಾಬ್ದಾರಿಯುತ ಸ್ಥಾನದಲ್ಲಿರುವ ಸಂಸದ ಪ್ರತಾಪ್ ಸಿಂಹ ಉಡಾಫೆ ಉತ್ತರ ನೀಡುತ್ತಿದ್ದಾರೆ.

ಮುಖ್ಯಮಂತ್ರಿಗಳು ತಂತಿ ಮೇಲೆ ನಡೆಯುತ್ತಿದ್ದೇನೆ ಎಂದು ಅಸಹಾಯಕತೆ ವ್ಯಕ್ತಪಡಿಸಿದ್ದಾರೆ. ಇದು ಕೊಡಗಿನ ಸಂತ್ರಸ್ತರ ಮೇಲಿನ ನಿರ್ಲಕ್ಷ್ಯಕ್ಕೆ ಸಾಕ್ಷಿಯಾಗಿದೆ ಎಂದು ಅಬೂಬಕ್ಕರ್ ಆರೋಪಿಸಿದರು.

ಕಳೆದ ಬಾರಿ ಸಂಭವಿಸಿದ ಮಳೆಹಾನಿ ಸಂತ್ರಸ್ತರಿಗಾಗಿ ನಿರ್ಮಿಸಲಾಗಿರುವ ನೂತನ ಮನೆಗಳನ್ನು ಅ. 30 ರೊಳಗೆ ಹಸ್ತಾಂತರಿಸಬೇಕೆಂದು ಅವರು ಇದೇ ಸಂದರ್ಭ ಒತ್ತಾಯಿಸಿದರು. ಜಿಲ್ಲೆಯನ್ನು ಪ್ರತಿನಿಧಿಸುವ ಸಂಸದರು ಕೊಡಗಿನ ಪುನಶ್ಚೇತನಕ್ಕೆ ವಿಶೇಷ ಪ್ಯಾಕೆಜ್ ತಾರದಿದ್ದಲ್ಲಿ ಸಂಸದರ ವಿರುದ್ಧ ಪ್ರತಿಭಟನೆ ನಡೆಸುವದಾಗಿ ಎಚ್ಚರಿಕೆ ನೀಡಿದರು. ಎಸ್‍ಡಿಪಿಐ ರಾಜ್ಯ ಸಮಿತಿ ಸದಸ್ಯ ಅಮಿನ್ ಮೊಹ್ಸಿನ್ ಮಾತನಾಡಿ, ಕಳೆದ ಎರಡು ವರ್ಷಗಳಿಂದ ಕೊಡಗು ಜಿಲ್ಲೆ ಪ್ರಾಕೃತಿಕ ವಿಕೋಪದಿಂದ ಸಂಕಷ್ಟವನ್ನು ಎದುರಿಸುತ್ತಿದ್ದು, ಇದನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಿ ಸೂಕ್ತ ಪರಿಹಾರ ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿದರು.

ಸುದ್ದಿಗೋಷ್ಟಿಯಲ್ಲಿ ಎಸ್‍ಡಿಪಿಐ ಉಪಾಧ್ಯಕ್ಷ ಕೆ.ಜಿ.ಪೀಟರ್, ಪ್ರಧಾನ ಕಾರ್ಯದರ್ಶಿ ಅಬ್ದುಲ್ ಅಡ್ಕರ್, ಕಾರ್ಯದರ್ಶಿ ಅಹಮದ್ ಕಬೀರ್ ಹಾಗೂ ನಗರಾಧ್ಯಕ್ಷ ಮನ್ಸೂರ್ ಉಪಸ್ಥಿತರಿದ್ದರು.