ಸೋಮವಾರಪೇಟೆ, ಅ. 6: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಪ್ರಗತಿಬಂದು ಸ್ವ ಸಹಾಯ ಸಂಘಗಳ ಒಕ್ಕೂಟ, ಗಣಗೂರು, ಗೋಣಿಮರೂರು ಮತ್ತು ಹೆಬ್ಬಾಲೆ ವಲಯದ ವತಿಯಿಂದ ‘ನಮ್ಮೂರು ನಮ್ಮ ಕೆರೆ’ ಕಾರ್ಯಕ್ರಮದಡಿಯಲ್ಲಿ ಪುನಶ್ಚೇತನಗೊಳಿಸಲಾದ ಗಣಗೂರಿನ ಕೆರೆಗೆ ಬಾಗಿನ ಅರ್ಪಿಸುವ ಮೂಲಕ, ಕೆರೆಯನ್ನು ಸಾರ್ವಜನಿಕ ಉಪಯೋಗಕ್ಕೆ ಒದಗಿಸಲಾಯಿತು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪ್ರಾದೇಶಿಕ ನಿರ್ದೇಶಕ ಮಹಾವೀರ ಅಜ್ರಿಯವರು ಕೆರೆಗೆ ಬಾಗಿನ ಅರ್ಪಿಸಿ ಮಾತನಾಡಿ, ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಶ್ರೀ ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದೊಂದಿಗೆ ಗಣಗೂರು ಕೆರೆಯ ಹೂಳನ್ನು ತೆಗೆದು ಪುನಶ್ಚೇತನಗೊಳಿಸಲಾಗಿದೆ ಎಂದರು.
ಕೆರೆಗಳ ಸಂರಕ್ಷಣೆ, ಅಂತರ್ಜಲ ವೃದ್ಧಿಗೆ ಶ್ರೀಕ್ಷೇತ್ರ ಧರ್ಮಸ್ಥಳದಿಂದ ಹೆಚ್ಚಿನ ಆದ್ಯತೆ ನೀಡುತ್ತಿದ್ದು, ಕೃಷಿಗೆ ಅಗತ್ಯವಾಗಿರುವ ಕೆರೆಗಳ ಉಳಿವು ಎಲ್ಲರ ಜವಾಬ್ದಾರಿಯಾಗಿದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗಣಗೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸವಿತಾ ಸುಕುಮಾರ್ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ತಾಲೂಕು ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಡಾ.ಹೆಚ್.ಎಸ್. ರಾಜಶೇಖರ್, ಪ್ರಾಂಶುಪಾಲ ನಂಗಾರು ನಿಂಗರಾಜ್, ಪ್ರಮುಖರಾದ ಎ.ಬಿ ಧರ್ಮಪ್ಪ, ನಾಗವರ ಕೆರೆ ಅಭಿವೃದ್ಧಿ ಸಮಿತಿ ಅಧ್ಯಕ್ಷ ಜಿ.ಎ.ನಂಜಪ್ಪ, ಜಿ.ಎಂ. ಮೋಹನ್ ಕುಮಾರ್ ಪಾಲ್ಗೊಂಡಿದ್ದರು.
ಕಾರ್ಯಕ್ರಮದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೊಡಗು ಜಿಲ್ಲೆಯ ನಿರ್ದೇಶಕರಾದ ಡಾ. ಯೋಗೇಶ್, ಕೃಷಿ ಅಧಿಕಾರಿ ಎನ್. ಗೀತಾ, ಗಣಗೂರು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಕಾವೇರಿ, ಎರಪಾರೆ ಕೆರೆ ಸಮಿತಿ ಅಧ್ಯಕ್ಷ ರೇವಣ್ಣ ಉಪಸ್ಥಿತರಿದ್ದರು.
ಕೆರೆ ಅಭಿವೃದ್ಧಿ ಸಮಿತಿಯ ವತಿಯಿಂದ ಯೋಜನೆ ಪ್ರಾದೇಶಿಕ ನಿರ್ದೇಶಕರಾದ ಮಹಾವೀರ ಅಜ್ರಿಯವನ್ನು ಸನ್ಮಾನಿಸಲಾಯಿತು.