ಮಡಿಕೇರಿ, ಅ. 11: ಜಿಲ್ಲೆಯಲ್ಲಿ ತಾ. 14 ರಿಂದ ನವೆಂಬರ್ 10 ರವರೆಗೆ 16 ನೇ ಸುತ್ತಿನ ಕಾಲುಬಾಯಿ ಜ್ವರ ಲಸಿಕಾ ಕಾರ್ಯಕ್ರಮ ನಡೆಯಲಿದೆ ಎಂದು ಪಶುಪಾಲನಾ ಇಲಾಖೆಯ ಉಪ ನಿರ್ದೇಶಕ ತಮ್ಮಯ್ಯ ತಿಳಿಸಿದ್ದಾರೆ.
ದನ, ಎಮ್ಮೆ, ಆಡು, ಕುರಿ ಹಂದಿ, ಸೇರಿದಂತೆ ಎಲ್ಲಾ ಸೀಳುಗೊರಸಿನ ಪ್ರಾಣಿಗಳಲ್ಲಿ ಈ ರೋಗವು ಕಾಣಿಸಿಕೊಳ್ಳುವ ಸಾಧ್ಯತೆ ಇದ್ದು, ರೈತರಿಗೆ ಆರ್ಥಿಕ ನಷ್ಟ ಉಂಟುಮಾಡುವ ರೋಗವಾಗಿದೆ ಎಂದು ತಿಳಿಸಿದ್ದಾರೆ.
ಕಾಲುಬಾಯಿ ಜ್ವರವು ಒಂದು ವೈರಾಣು ರೋಗವಾಗಿದ್ದು, ನಿರ್ಧಿಷ್ಟ ಚಿಕಿತ್ಸೆ ಅಸಾಧ್ಯವಾಗಿದೆ. ಕಾಲುಬಾಯಿ ರೋಗದಿಂದ ಗುಣಮುಖವಾದರೂ ಸಹ ಜಾನುವಾರುಗಳು ಬಿಸಿಲಿಗೆ ಏದುಸಿರು ಬಿಡುತ್ತವೆ. ಹೈನು ರಾಸುಗಳಲ್ಲಿ ಹಾಲಿನ ಇಳುವರಿ ಇಳಿಮುಖವಾಗಲಿದ್ದು ಗರ್ಭಪಾತ, ಗರ್ಭಕಟ್ಟುವಲ್ಲಿ ವಿಳಂಬ, ಎತ್ತು, ಹೋರಿಗಳಲ್ಲಿ ಕೆಲಸ ಮಾಡುವ ಸಾಮಥ್ರ್ಯ ಕ್ಷೀಣಿಸಿ ತೀವ್ರ ಆರ್ಥಿಕ ನಷ್ಟ ಉಂಟುಮಾಡುತ್ತದೆ ಎಂದು ಹೇಳಿದ್ದಾರೆ.
ಲಸಿಕೆ ಹಾಕಿಸುವದೊಂದೇ ಕಾಲುಬಾಯಿ ರೋಗ ನಿಯಂತ್ರಿಸಲು ಇರುವ ಏಕೈಕ ಮಾರ್ಗವಾಗಿದ್ದು, ಈ ರೋಗದ ವಿರುದ್ಧ ಪ್ರತಿ 6 ತಿಂಗಳಿಗೊಮ್ಮೆ ಲಸಿಕೆ ಹಾಕಿಸಿ, ರೋಗ ಬಾರದಂತೆ ತಡೆಗಟ್ಟಬಹುದಾಗಿರುತ್ತದೆ. 19ನೇ ಜಾನುವಾರು ಗಣತಿಯಂತೆ ಜಿಲ್ಲೆಯಲ್ಲಿ ದನ ಹಾಗೂ ಎಮ್ಮೆಗಳ ಸಂಖ್ಯೆ 1,02,904 ಇದ್ದು 16,948 ಹಂದಿಗಳಿರುತ್ತವೆ. ಒಟ್ಟು 1,19,852 ಜಾನುವಾರುಗಳಿಗೆ ಲಸಿಕೆ ಹಾಕುವ ಗುರಿ ಹೊಂದಲಾಗಿದೆ. ಈಗಾಗಲೇ ಲಸಿಕಾ ಕಾರ್ಯಕ್ರಮಕ್ಕೆ ಎಲ್ಲಾ ಪೂರ್ವ ಸಿದ್ಧತೆ ಮಾಡಿಕೊಳ್ಳಲಾಗಿದ್ದು 85 ಲಸಿಕಾದಾರರನ್ನೊಳಗೊಂಡ ಒಟ್ಟು 11 ತಂಡಗಳನ್ನು ರಚಿಸಲಾಗಿದೆ. ಲಸಿಕಾದಾರರು ರೈತರ/ಜಾನುವಾರು ಮಾಲೀಕರ ಮನೆ ಮನೆಗೆ ತೆರಳಿ ಲಸಿಕೆಯನ್ನು ಹಾಕಲಿದ್ದಾರೆ ಎಂದು ಪಶುಪಾಲನಾ ಇಲಾಖೆಯ ಉಪ ನಿರ್ದೇಶಕರು ಮಾಹಿತಿ ನೀಡಿದ್ದಾರೆ.
ಲಸಿಕೆಯು ಸಂಪೂರ್ಣವಾಗಿ ಉಚಿತವಾಗಿದ್ದು ಯಾವದೇ ರೀತಿಯ ಶುಲ್ಕವಿರುವದಿಲ್ಲ. ಇದೊಂದು ರಾಷ್ಟ್ರೀಯ ಕಾರ್ಯಕ್ರಮವಾಗಿದ್ದು, ಲಸಿಕಾದಾರರು ಜಾನುವಾರು ಮಾಲೀಕರ ಮನೆಗಳಿಗೆ ಬಂದಾಗ ಸಹಕಾರ ನೀಡಿ 4 ತಿಂಗಳ ಮೇಲ್ಪಟ್ಟ ಎಲ್ಲಾ ದನ ಮತ್ತು ಹಂದಿಗಳಿಗೆ ಲಸಿಕೆ ಹಾಕಿಸುವಂತೆ ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯ ಉಪ ನಿರ್ದೇಶಕರು ಮನವಿ ಮಾಡಿದ್ದಾರೆ.