ಶನಿವಾರಸಂತೆ, ಅ. 13: ಸರಕಾರ ರೂಪಿಸಿರುವ ಕೃಷಿ ಅಭಿಯಾನ ಕಾರ್ಯಕ್ರಮದಿಂದ ರೈತರಿಗೆ ಕೃಷಿ ಬಗ್ಗೆ ಹೆಚ್ಚಿನ ಆಸಕ್ತಿ ಮೂಡಲು ಸಾಧ್ಯವಾಗುತ್ತದೆ ಎಂದು ಜಿ.ಪಂ. ಕೃಷಿ ಮತ್ತು ಕೈಗಾರಿಕೆ ಸ್ಥಾಯಿ ಸಮಿತಿ ಅಧ್ಯಕ್ಷೆ ಸರೋಜಮ್ಮ ಅಭಿಪ್ರಾಯಪಟ್ಟರು.
ಹಂಡ್ಲಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಭಾಂಗಣದಲ್ಲಿ ಕೊಡಗು ಜಿಲ್ಲಾ ಪಂಚಾಯಿತಿ, ಸೋಮವಾರಪೇಟೆ ತಾಲೂಕು, ಕೃಷಿ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ಕೊಡ್ಲಿಪೇಟೆ ಹೋಬಳಿಯ 2019-20ನೇ ಸಾಲಿನ ಇಲಾಖೆಗಳ ನಡಿಗೆ ರೈತರ ಮನೆ ಬಾಗಿಲಿಗೆ ಕೃಷಿ ಅಭಿಯಾನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಕೃಷಿ ಅಭಿಯಾನ ಕಾರ್ಯಕ್ರಮದಿಂದ ರೈತರಿಗೆ ತುಂಬಾ ಅನುಕೂಲವಾಗುತ್ತದೆ. ಸರಕಾರದಿಂದ ರೈತರಿಗೆ ದೊರೆಯುವ ಸೌಲಭ್ಯ, ಕೃಷಿ ಬೆಳೆಗಳ ಬಗ್ಗೆ ಮಾಹಿತಿ ಮುಂತಾದವುಗಳನ್ನು ತಿಳಿದುಕೊಳ್ಳಲು ಅನುಕೂಲವಾಗುತ್ತದೆ ಎಂದರು.
ಕೊಡ್ಲಿಪೇಟೆ ಕ್ಷೇತ್ರ ಜಿ.ಪಂ. ಸದಸ್ಯ ಸಿ.ಪಿ. ಪುಟ್ಟರಾಜು ಮಾತನಾಡಿ, ಇಂದಿನ ರೈತರು ಕೃಷಿ ಬಗ್ಗೆ ಆಸಕ್ತಿ ಕಳೆದುಕೊಳ್ಳುತ್ತಿರುವ ನಿಟ್ಟಿನಲ್ಲಿ ಸರಕಾರ ಮತ್ತು ಕೃಷಿ ಇಲಾಖೆ ಕೃಷಿ ಅಭಿಯಾನ ಕಾರ್ಯಕ್ರಮ ಹಮ್ಮಿಕೊಂಡು ರೈತಾಪಿ ಜನರನ್ನು ಕೃಷಿಯಲ್ಲಿ ತೊಡಗಿಸಿಕೊಳ್ಳಲು ಪ್ರೇರೇಪಿಸುತ್ತಿರುವದು ಶ್ಲಾಘನೀಯ ಎಂದರು.
ಸೋಮವಾರಪೇಟೆ ತಾಲೂಕು ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಡಾ. ಎಸ್.ಆರ್. ರಾಜಶೇಖರ್ ಪ್ರಾಸ್ತಾವಿಕವಾಗಿ ಮಾತನಾಡಿ, ಹಿಂದೆ ಜಿಲ್ಲೆ ಮತ್ತು ತಾಲೂಕು ಮಟ್ಟದಲ್ಲಿ ನಡೆಸುತ್ತಿದ್ದ ಕೃಷಿ ಅಭಿಯಾನ ಕಾರ್ಯಕ್ರಮವನ್ನು ಕಳೆದ 3 ವರ್ಷದಿಂದ ಪ್ರತಿಯೊಂದು ಹೋಬಳಿ ಮಟ್ಟದಲ್ಲೂ ನಡೆಸಲಾಗುತ್ತಿದೆ ಎಂದರು.
ವಿಜ್ಞಾನಿಗಳೊಂದಿಗೆ ರೈತ ಸಂವಾದ ಕಾರ್ಯಕ್ರಮದಲ್ಲಿ ಡಾ. ವೆಂಕಟರಮಣಪ್ಪ ತೋಟಗಾರಿಕೆ ಬೆಳೆಗಳ ಬಗ್ಗೆ, ಭತ್ತ ಬೆಳೆ ಕುರಿತು ಡಾ. ಬಸವಲಿಂಗಯ್ಯ, ತರಕಾರಿ ಬೆಳೆಗಳ ಕುರಿತು ಡಾ. ವಿದ್ಯಾಶ್ರೀ ಮಾಹಿತಿಯಿತ್ತರು. ಕೊಡ್ಲಿಪೇಟೆ ಧರ್ಮಸ್ಥಳ ಯೋಜನೆಯ ವ್ಯವಸ್ಥಾಪಕ ಸದಾಶಿವ ಮಾತನಾಡಿದರು.
ಕಾರ್ಯಕ್ರಮದಲ್ಲಿ ತಾ.ಪಂ. ಸದಸ್ಯ ಕುಶಾಲಪ್ಪ, ತಾಲೂಕು ಕೃಷಿ ತಾಂತ್ರಿಕ ಅಧಿಕಾರಿ ಡಾ. ಎಸ್. ಮುಕುಂದ್, ಕೊಡ್ಲಿಪೇಟೆ ಕೃಷಿ ಅಧಿಕಾರಿ ಆಯೇಷ ತಜಸುಮ್, ಹಂಡ್ಲಿ ಗ್ರಾ.ಪಂ. ಅಧ್ಯಕ್ಷ ಸಂದೀಪ್, ಕೊಡ್ಲಿಪೇಟೆ ಗ್ರಾ.ಪಂ. ಅಧ್ಯಕ್ಷೆ ರೋಹಿಣಿ, ಹಂಡ್ಲಿ ಕೃಷಿ ಸಹಕಾರ ಸಂಘದ ಅಧ್ಯಕ್ಷ ಎಸ್.ಎಸ್. ಗಣೇಶ್, ಗ್ರಾ.ಪಂ. ಸದಸ್ಯರು, ವಿವಿಧ ಇಲಾಖೆ ಅಧಿಕಾರಿಗಳು ಹಾಜರಿದ್ದರು. ಕೃಷಿ ಅಭಿಯಾನ ಕಾರ್ಯಕ್ರಮದಲ್ಲಿ ಕೃಷಿ ಪ್ರಾತ್ಯಕ್ಷಿಕೆ ಏರ್ಪಡಿಸಲಾಗಿತ್ತು.