ಕೂಡಿಗೆ, ಅ. 12: ಜಿಲ್ಲಾ ಪಂಚಾಯತ್, ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಸೋಮವಾರಪೇಟೆ ತಾಲೂಕು ಹಾಗೂ ಯೂನಿಕ್ ಆಕಾಡೆಮಿ ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆ ಕೂಡ್ಲೂರು ಇವರ ಸಂಯುಕ್ತ ಆಶ್ರಯದಲ್ಲಿ 14-17ರ ವಯೋಮಿತಿಯ ಬಾಲಕ ಮತ್ತು ಬಾಲಕಿಯರ ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ವಿಭಾಗ ಮಟ್ಟದ ವಾಲಿಬಾಲ್ ಪಂದ್ಯಾಟ ಕೂಡಿಗೆ ಡಯಟ್ ಮೈದಾನದಲ್ಲಿ ನಡೆದವು.
ಪಂದ್ಯಾಟದಲ್ಲಿ ಮೈಸೂರು, ಚಾಮರಾಜನಗರ, ಕೊಡಗು, ಚಿಕ್ಕಮಗಳೂರು, ಹಾಸನ, ಉಡುಪಿ, ಮಂಡ್ಯ, ದಕ್ಷಿಣ ಕನ್ನಡ ಜಿಲ್ಲೆಗಳ ತಂಡಗಳು ಭಾಗವಹಿಸಿದ್ದವು.
17ರ ವಯೋಮಿತಿಯ ಬಾಲಕರ ವಿಭಾಗದಲ್ಲಿ ಹಾಸನ ಜಿಲ್ಲೆಯ ತಂಡ ಪ್ರಥಮ ಸ್ಥಾನ ಹಾಗೂ ಚಿಕ್ಕಮಗಳೂರು ತಂಡ ದ್ವಿತೀಯ ಸ್ಥಾನ ಪಡೆದುಕೊಂಡವು. ಬಾಲಕಿಯರ ವಿಭಾಗದಲ್ಲಿ ಹಾಸನ ಜಿಲ್ಲೆಯ ತಂಡ ಪ್ರಥಮ ಹಾಗೂ ದಕ್ಷಿಣ ಕನ್ನಡ ಜಿಲ್ಲೆ ದ್ವಿತೀಯ ಸ್ಥಾನ ಪಡೆದುಕೊಂಡವು.
14ರ ವಯೋಮಿತಿಯ ಬಾಲಕರ ವಿಭಾಗದಲ್ಲಿ ಹಾಸನ ಜಿಲ್ಲೆ ತಂಡ ಪ್ರಥಮ, ಚಿಕ್ಕಮಗಳೂರು ಜಿಲ್ಲೆ ದ್ವಿತೀಯ ಹಾಗೂ ಬಾಲಕಿಯರ ವಿಭಾಗದಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ, ಮೈಸೂರು ಜಿಲ್ಲೆಯ ತಂಡ ದ್ವಿತೀಯ ಸ್ಥಾನ ಪಡೆದುಕೊಂಡವು.
ಬಹುಮಾನ ವಿತರಣಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೂಡ್ಲೂರು ಯೂನಿಕ್ ಅಕಾಡೆಮಿ ಅಧ್ಯಕ್ಷ ರವಿ ವಹಿಸಿದ್ದರು. ನಂತರ ಮಾತನಾಡಿದ ಅವರು ವಿದ್ಯಾರ್ಥಿಗಳು ವಿಭಾಗೀಯ ಮಟ್ಟದಲ್ಲಿ ವಿಜೇತರಾಗಿ ರಾಜ್ಯಮಟ್ಟದಲ್ಲಿ ಭಾಗವಹಿಸಲು ಗುರುತಿಸಿಕೊಂಡಿದ್ದೀರಿ. ಮುಂದೆ ರಾಜ್ಯ ಮಟ್ಟದಲ್ಲಿಯೂ ವಿಜೇತರಾಗಿ ಕೀರ್ತಿ ತರಬೇಕು ಎಂದು ಹಾರೈಸಿದರು.
ಈ ಸಂದರ್ಭ ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಎಸ್.ಟಿ.ವೆಂಟಕೇಶ್, ಕೊಡಗು ಜಿಲ್ಲೆಯ ಗ್ರೇಡ್-1 ದೈಹಿಕ ಶಿಕ್ಷಣ ಶಿಕ್ಷಕರಾದ ಡಾ.ಸದಾಶಿವಯ್ಯ ಎಸ್.ಪಲ್ಲೇದ್, ಸೋಮವಾರಪೇಟೆ ತಾಲೂಕು ಪ್ರಾಥಮಿಕ ಶಾಲಾ ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಕರುಂಬಯ್ಯ, ಪ್ರಾಥಮಿಕ ಶಾಲಾ ಪದವಿಧರೇತರ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಹೆಚ್.ಕೆ.ಕುಮಾರ್, ಕೂಡ್ಲೂರು ಯೂನಿಕ್ ಅಕಾಡೆಮಿಯ ಕಾರ್ಯಪಾಲಕರು ಮತ್ತು ಸಂಯೋಜಕಿ ಸುಪ್ರೀತ ಎ.ಎಸ್., ಮುಖ್ಯ ಶಿಕ್ಷಕಿ ನೇತ್ರಾವತಿ ಸೇರಿದಂತೆ ವಿವಿಧ ಶಾಲೆಗಳ ದೈಹಿಕ ಶಿಕ್ಷಕರು, ಶಿಕ್ಷಣ ಇಲಾಖೆಯ ಅಧಿಕಾರಿಗಳು ಇದ್ದರು.