ಮಡಿಕೇರಿ, ಅ. 15: ಎಲ್ಲಾ ವರ್ಗದ ಜನರಿಗೆ ಉತ್ತಮ ಆರೋಗ್ಯ ಸೌಲಭ್ಯ ದೊರಕಿಸಿಕೊಡುವ ನಿಟ್ಟಿನಲ್ಲಿ ಆಯುಷ್ಮಾನ್ ಭಾರತ್ ಹಾಗೂ ಆರೋಗ್ಯ ಕರ್ನಾಟಕ ಯೋಜನೆಯು ತುಂಬಾ ಅನುಕೂಲವಾಗಿದೆ ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನೂರುನ್ನೀಸಾ ತಿಳಿಸಿದ್ದಾರೆ.
ನಗರದ ಕಾವೇರಿ ಕಲಾಕ್ಷೇತ್ರದಲ್ಲಿ ಮಂಗಳವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ರಾಷ್ಟ್ರೀಯ ನಗರ ಆರೋಗ್ಯ ಅಭಿಯಾನ, ನಗರಸಭೆ ಮತ್ತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ನಗರ ಆರೋಗ್ಯ ಕೇಂದ್ರ, ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಸಂಯುಕ್ತಾಶ್ರಯದಲ್ಲಿ ಡೇ-ನಲ್ಮ್ ಯೋಜನೆಯಡಿ ಸ್ಥಾಪಿತವಾಗಿರುವ ನಗರ ವ್ಯಾಪ್ತಿಯ ಸ್ವ ಸಹಾಯ ಸಂಘಗಳ ಸದಸ್ಯರುಗಳಿಗೆ ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಯೋಜನೆಯ ಕುರಿತು ನಡೆದ ಮಾಹಿತಿ ಕಾರ್ಯಾಗಾರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಖಾಸಗಿ ಆಸ್ಪತ್ರೆಗಳಲ್ಲಿ ಕೆಲವು ಚಿಕಿತ್ಸೆಗಳಿಗೆ ಹೆಚ್ಚಿನ ಹಣ ಪಾವತಿ ಮಾಡಬೇಕಾಗುತ್ತದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಉತ್ತಮ ಆರೋಗ್ಯ ಸೇವೆಗಳು ದೊರೆಯುತ್ತಿದ್ದು, ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಕಾರ್ಡ್ ಹೊಂದಿರುವ ವ್ಯಕ್ತಿಗಳಿಗೆ ಉತ್ತಮ ಚಿಕಿತ್ಸೆ ಪಡೆಯಲು ಸಹಕಾರಿಯಾಗಿದೆ ಎಂದರು. ಜಿಲ್ಲಾ ಆರ್‍ಸಿಎಚ್ ಅಧಿಕಾರಿ ಡಾ.ಎಸ್.ಗೋಪಿನಾಥ್ ಅವರು ಯೋಜನೆಯ ಬಗ್ಗೆ ಪ್ರಾಸ್ತಾವಿಕವಾಗಿ ಮಾತನಾಡಿ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯಡಿ ಬಿಪಿಎಲ್ ಕುಟುಂಬಗಳಿಗೆ ಶೇ.100 ರಷ್ಟು ಆರೋಗ್ಯ ಸಂಬಂಧಿಸಿದ ವೆಚ್ಚ ಭರಿಸಲಿದೆ ಎಂದು ತಿಳಿಸಿದರು.
ಬಿಪಿಎಲ್ ಪಡಿತರ ಚೀಟಿ ಹೊಂದಿರುವವರು ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಕಾರ್ಡ್ ಯೋಜನೆಯಡಿ ನೋಂದಾಯಿಸಿರುವವರಿಗೆ ಒಂದು ವರ್ಷಕ್ಕೆ ರೂ. 5 ಲಕ್ಷವರೆಗೆ ಉಚಿತ ಚಿಕಿತ್ಸ ಸೌಲಭ್ಯ ದೊರೆಯಲಿದೆ. ಎಪಿಎಲ್ ಕಾರ್ಡ್‍ದಾರರಿಗೆ ಸರ್ಕಾರಿ ಪ್ಯಾಕೇಜ್ ದರದ ಶೇ. 30 ರಷ್ಟು ಚಿಕಿತ್ಸಾ ವೆಚ್ಚ ಲಭ್ಯವಿದ್ದು, ವಾರ್ಷಿಕ ಮಿತಿ ಕುಟುಂಬಕ್ಕೆ ರೂ. 1.5 ಲಕ್ಷದವರೆಗೆ ಚಿಕಿತ್ಸೆ ದೊರೆಯಲಿದೆ ಎಂದು ಅವರು ತಿಳಿಸಿದರು.
ಎಬಿಎಆರ್‍ಕೆ ಕಾರ್ಡ್‍ನ್ನು ಸಾರ್ವಜನಿಕ ಆರೋಗ್ಯ ಸಂಸ್ಥೆಗಳಲ್ಲಿ ನೀಡಲಾಗುತ್ತದೆ. ಆಧಾರ್ ಕಾರ್ಡ್ ಮತ್ತು ಪಡಿತರ ಕಾರ್ಡ್‍ಗಳನ್ನು ಹಾಜರುಪಡಿಸಿ ಆರೋಗ್ಯ ಕಾರ್ಡ್ ಪಡೆಯಬಹುದು ಎಂದರು.
ಪೌರಾಯುಕ್ತ ಎಂ.ಎಲ್. ರಮೇಶ್ ಮಾತನಾಡಿ, ಪ್ರತಿಯೊಬ್ಬ ಮಧ್ಯಮ ಮತ್ತು ಕೆಳವರ್ಗದ ಜನರಿಗೆ ಇಂದಿನ ಕಾಲಘಟ್ಟದಲ್ಲಿ ವೈದ್ಯಕೀಯ ವೆಚ್ಚ ಭರಿಸುವದು ತುಂಬಾ ಕಷ್ಟವಾಗಿದೆ. ಈ ಯೋಜನೆಯಿಂದ ಜನ ಸಾಮಾನ್ಯರಿಗೆ ತುಂಬಾ ಅನುಕೂಲವಾಗಲಿದೆ ಎಂದು ಅವರು ತಿಳಿಸಿದರು. ಎಬಿಎಆರ್‍ಕೆ ಜಿಲ್ಲಾ ಸಂಯೋಜಕರಾದ ತೇಜಸ್ ಅವರು ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಯೋಜನೆಯ ಕುರಿತು ವಿಸ್ತøತ ಮಾಹಿತಿ ನೀಡಿದರು. ಕಾರ್ಯಾಗಾರದಲ್ಲಿ ಅರ್ಹರಿಗೆ ಸ್ಥಳದಲ್ಲಿಯೇ ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಕಾರ್ಡ್ ವಿತರಣೆ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ರಮೇಶ್, ಎನ್‍ಸಿಡಿ ವೈದ್ಯಾಧಿಕಾರಿ ಡಾ.ಮಹದೇವಪ್ಪ, ಆರೋಗ್ಯ ಮಿತ್ರರು, ಇತರರು ಇದ್ದರು. ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕರಾದ ದೇವರಾಜ್ ಸ್ವಾಗತಿಸಿದರು.