ನಾಪೋಕ್ಲು, ಅ. 15: ಶಿಬಿರಗಳಲ್ಲಿ ಕಲಿತದ್ದನ್ನು ನಿತ್ಯ ಬದುಕಿಗೆ ಅಳವಡಿಸಿಕೊಂಡಾಗ ಯಶಸ್ಸು ಸಾಧ್ಯ. ವಿದ್ಯಾರ್ಥಿಗಳಲ್ಲಿ ಬದ್ಧತೆ ಹಾಗೂ ಶಿಸ್ತು ಇದ್ದರೆ ಶಿಬಿರಗಳಿಂದ ಕಲಿತದ್ದನ್ನು ಭವಿಷ್ಯವನ್ನು ರೂಪಿಸಿಕೊಳ್ಳಲು ಸಹಕಾರಿ ಎಂದು ಇಲ್ಲಿನ ಕರ್ನಾಟಕ ಪಬ್ಲಿಕ್ ಶಾಲೆಯ ಉಪಪ್ರಾಂಶುಪಾಲೆ ಪಿ.ಕೆ. ನಳಿನಿ ಹೇಳಿದರು.
ಇಲ್ಲಿನ ಕರ್ನಾಟಕ ಪಬ್ಲಿಕ್ ಶಾಲೆಯ ಸಭಾಂಗಣದಲ್ಲಿ ವಿವೇಕಾನಂದ ಯೂತ್ಮೂವ್ಮೆಂಟ್, ರೋಟರಿ ಮಿಸ್ಟಿ ಹಿಲ್ಸ್ ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ದಸರಾ ಶಿಬಿರದಲ್ಲಿ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸಾರ್ವಜನಿಕ ಶಿಕ್ಷಣ ಇಲಾಖೆಯ ವಿಷಯ ಪರಿವೀಕ್ಷಕಿ ಗಂಗಮ್ಮ ಮಾತನಾಡಿ, ಸರ್ಕಾರ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳಿಗಾಗಿ ಹಲವು ವೈಜ್ಞಾನಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ. ವಿದ್ಯಾರ್ಥಿಗಳು ವೈಜ್ಞಾನಿಕ ಮನೋಭಾವನೆಯನ್ನು ಬೆಳೆಸಿಕೊಳ್ಳಬೇಕು ಎಂದರು. ಶಿಕ್ಷಕ ಸಿ.ಎಸ್. ಸುರೇಶ್ ಮಾತನಾಡಿ, ಪುಸ್ತಕಗಳನ್ನು ಓದುವದರಿಂದ ಹೆಚ್ಚಿನ ಜ್ಞಾನವೃದ್ಧಿಯಾಗುತ್ತದೆ. ವಿದ್ಯಾರ್ಥಿಗಳು ಉತ್ತಮ ಫಲಿತಾಂಶ ತರಲು ಪ್ರಯತ್ನಿಸಬೇಕು ಎಂದರು. ಮಡಿಕೇರಿ ಉದ್ಯೋಗ ವಿನಿಮಯ ಕೇಂದ್ರದ ಅಧಿಕಾರಿ ಜಗನ್ನಾಥ್ ಶಿಬಿರಾರ್ಥಿಗಳಿಗೆ ವೃತ್ತಿ ಮಾರ್ಗದರ್ಶನ ನೀಡಿದ ಕಾರ್ಯಕ್ರಮದಲ್ಲಿ ವಿವೇಕಾನಂದ ಯೂತ್ ಮೂವ್ಮೆಂಟಿನ ಸಂಯೋಜಕ ರವಿ ಮತ್ತು ಸಿಬ್ಬಂದಿಗಳು ಪಾಲ್ಗೊಂಡಿದ್ದರು.