ಮಡಿಕೇರಿ, ಅ. 16: ರಾಷ್ಟ್ರೀಯ ಸೇವಾ ಯೋಜನೆಯು ವಿದ್ಯಾರ್ಥಿ ಗಳಲ್ಲಿ ಸೇವಾ ಮನೋಭಾವ, ಶಿಸ್ತು, ಸಂಯಮ, ಉತ್ತಮ ನಾಯಕತ್ವ ಗುಣ ಹಾಗೂ ಜವಾಬ್ದಾರಿಯುತ ವ್ಯಕ್ತಿತ್ವ ಬೆಳೆಸುವ ಧ್ಯೇಯ ಹೊಂದಿದೆ. ಸೇವೆಯ ಮೂಲಕ ಶಿಕ್ಷಣ ಹೊಂದಲು ಎನ್ನೆಸ್ಸೆಸ್ ಸಹಕಾರಿ ಯಾಗಿದೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಜಿ. ಕೆಂಚಪ್ಪ ಹೇಳಿದರು.

ಪದವಿ ಪೂರ್ವ ಶಿಕ್ಷಣ ಇಲಾಖೆ ಮತ್ತು ಮಡಿಕೇರಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಎನ್‍ಎಸ್‍ಎಸ್ ಘಟಕ ಹಾಗೂ ಮೇಕೇರಿ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ಇಕೋ ಕ್ಲಬ್ ಸ್ವಚ್ಛ ಭಾರತ ಅಭಿಯಾನ ಆಶ್ರಯದಲ್ಲಿ ಮೇಕೇರಿ ಗ್ರಾಮದಲ್ಲಿ ‘ವಿಜ್ಞಾನ ಮತ್ತು ವೈಜ್ಞಾನಿಕ ಮನೋಭಾವನೆಗಾಗಿ ವಿದ್ಯಾರ್ಥಿಗಳು’ ಎಂಬ ವಿಷಯದಡಿ ಏಳು ದಿನಗಳ ಕಾಲ ಏರ್ಪಡಿಸಿದ್ದ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಭಾಷಣ ಮಾಡಿದ ಅವರು, ವಿದ್ಯಾರ್ಥಿಗಳು ತಮ್ಮನ್ನು ಸಾಮಾಜಿಕ ಸೇವಾ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದರು.

ಮುಖ್ಯ ಅತಿಥಿಯಾಗಿದ್ದ ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಎನ್. ಗಾಯತ್ರಿ ಮಾತನಾಡಿ ಎನ್ನೆಸ್ಸೆಸ್ ಶಿಬಿರಗಳು ಸಮಾಜದಲ್ಲಿ ಸಹಬಾಳ್ವೆ, ಮತ್ತಿತರ ಸಾಮಾಜಿಕ ಮೌಲ್ಯಗಳನ್ನು ಬೆಳೆಸಲು ಸಹಕಾರಿಯಾಗಿವೆ’ ಎಂದರು.

ಕಾಲೇಜು ಪ್ರಾಂಶುಪಾಲ ಪಿ.ಆರ್. ವಿಜಯ್ ಮಾತನಾಡಿ, ಯುವ ಜನಾಂಗದಲ್ಲಿ ಪರಿಪೂರ್ಣ ವ್ಯಕ್ತಿತ್ವ ಬೆಳೆಸಲು ಇಂತಹ ಶಿಬಿರಗಳು ಸಹಕಾರಿಯಾಗಿವೆ ಎಂದರು.

ಎನ್ನೆಸ್ಸೆಸ್ ಅಧಿಕಾರಿ ಬಿ.ಡಿ. ರವೀಶ್ ಮಾತನಾಡಿ, ಶಿಬಿರದಲ್ಲಿ ಶ್ರಮದಾನದ ಮೂಲಕ ಕೈಗೊಂಡ ಸೇವಾ ಕಾರ್ಯಗಳ ಕುರಿತು ವಿವರಿಸಿದರು. ಅಧ್ಯಕ್ಷತೆ ವಹಿಸಿದ್ದ ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷ ಎ.ಪಿ. ಧನಂಜಯ ಹಾಗೂ ಶಾಲಾ ಮುಖ್ಯ ಶಿಕ್ಷಕಿ ಎಂ.ಬಿ. ಕುಸುಮಾವತಿ ಮಾತನಾಡಿ ದರು.

ಎಸ್‍ಡಿಎಂಸಿ ಅಧ್ಯಕ್ಷ ರಫೀಕ್ ಖಾನ್, ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯೆ ರಾಜೇಶ್ವರಿ, ಉಪನ್ಯಾಸಕರಾದ ಎಸ್. ನಂದೀಶ್, ಮಹಾಂತೇಶ್, ರಾಜಸುಂದರಂ, ನಮ್ರತ್ ಇದ್ದರು. ಇದಕ್ಕೂ ಮುನ್ನ ಎನ್ನೆಸ್ಸೆಸ್ ಶಿಬಿರಾರ್ಥಿಗಳು ಹಾಗೂ ಶಾಲೆಯ ರಾಷ್ಟ್ರೀಯ ಹಸಿರು ಪಡೆಯ ಇಕೋ ಕ್ಲಬ್‍ನ ವಿದ್ಯಾರ್ಥಿಗಳು ಗ್ರಾಮದಲ್ಲಿ ಪರಿಸರ ಸ್ವಚ್ಛತೆ ಕುರಿತು ಜನರಲ್ಲಿ ಜಾಗೃತಿ ಮೂಡಿಸಿದರು.