ಮಡಿಕೇರಿ, ಅ. 18: ಮಡಿಕೇರಿ ತಾಲೂಕು ಕಕ್ಕಬೆ ಗ್ರಾ.ಪಂ. ವ್ಯಾಪ್ತಿಯ ಮರಂದೋಡ ಗ್ರಾಮದ ಕೆರೆತಟ್ಟು ಕಾಲೋನಿಯ ನಿವಾಸಿಗಳ ಮೂಲಭೂತ ಸಮಸ್ಯೆಗಳ ಬಗ್ಗೆ ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಗಮನ ಸೆಳೆದ ಪರಿಣಾಮ ಬೇಡಿಕೆಗಳಿಗೆ ಸೂಕ್ತ ಸ್ಪಂದನ ದೊರೆತಿದೆ.

ಪತ್ರಿಕಾ ಹೇಳಿಕೆ ನೀಡಿರುವ ಕೊಡಗು ಪ್ರಜಾ ಪರಿವರ್ತನಾ ವೇದಿಕೆಯ ಜಿಲ್ಲಾಧ್ಯಕ್ಷ ಹೆಚ್.ಎಸ್. ಮುತ್ತಪ್ಪ ಅವರು, ಬಡ ವರ್ಗದ ಸಮಸ್ಯೆಗಳನ್ನು ಖುದ್ದು ಪರಿಶೀಲಿಸಿ ಅಗತ್ಯ ಕ್ರಮಕ್ಕೆ ಆದೇಶ ಮಾಡಿರುವ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಕ್ರಮ ಸ್ವಾಗತಾರ್ಹವೆಂದು ಹೇಳಿದ್ದಾರೆ.

ಕುಡಿಯುವ ನೀರಿನ ವ್ಯವಸ್ಥೆ, ಅಂಗನವಾಡಿ ಕೇಂದ್ರ, ವಿದ್ಯುತ್ ಸಂಪರ್ಕ, ಕಾಡಾನೆ ಹಾವಳಿ ತಡೆ, ಕಾಲೋನಿಗೆ ಹೋಗುವ ರಸ್ತೆ ಅಭಿವೃದ್ಧಿ, ಅಂಬೇಡ್ಕರ್ ಭವನ ನಿರ್ಮಾಣ, ಸಂಚಾರಿ ನ್ಯಾಯಬೆಲೆ ಅಂಗಡಿ ಸೇರಿದಂತೆ ವಿವಿಧ ಬೇಡಿಕೆಗಳ ಮನವಿ ಪತ್ರವನ್ನು ಜಿ.ಪಂ.ಗೆ ಸಲ್ಲಿಸಲಾಗಿತ್ತು.

ಇದಕ್ಕೆ ಸಕಾಲದಲ್ಲಿ ಸ್ಪಂದಿಸಿದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಲಕ್ಷ್ಮೀಪ್ರಿಯ ಅವರು ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣಾಧಿಕಾರಿಗಳು ಖುದ್ದು ಸ್ಥಳಕ್ಕೆ ಭೇಟಿ ನೀಡಿ ಸ್ಥಳೀಯ ನಿವಾಸಿಗಳೊಂದಿಗೆ ಮುಕ್ತವಾಗಿ ಚರ್ಚಿಸಿದ್ದಾರೆ. ಅಂಗನವಾಡಿ ಶಿಕ್ಷಕಿ ಹಾಗೂ ಸಹಾಯಕಿಯರನ್ನು ನೇಮಕ ಮಾಡುವದರೊಂದಿಗೆ ಮೂಲಭೂತ ಸೌಲಭ್ಯಗಳನ್ನು ಒದಗಿಸಿಕೊಡುವದಾಗಿ ಭರವಸೆ ನೀಡಿದ್ದಾರೆ. ಹಿರಿಯ ಅಧಿಕಾರಿಗಳು ನೀಡಿರುವ ಆದೇಶವನ್ನು ಇತರ ಅಧಿಕಾರಿಗಳು ಶೀಘ್ರ ಅನುಷ್ಠಾನಕ್ಕೆ ತರಬೇಕೆಂದು ಒತ್ತಾಯಿಸಿದ್ದಾರೆ.

ಅಧಿಕಾರಿಗಳ ಭೇಟಿ ಸಂದರ್ಭ ಕಕ್ಕಬೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಪ್ರಜಾ ಪರಿವರ್ತನ ವೇದಿಕೆಯ ಮಡಿಕೇರಿ ತಾಲೂಕು ಅಧ್ಯಕ್ಷ ಸಿ.ಕೆ. ರಮೇಶ್, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಹೊನ್ನಪ್ಪ, ಎ.ಎ. ಬಾಲಕೃಷ್ಣ, ವೀರಾಜಪೇಟೆ ತಾಲೂಕು ಅಧ್ಯP್ಷÀ ಎ.ಎ. ಪವನ್ ಮತ್ತಿತರರು ಹಾಜರಿದ್ದರು.