ಮಡಿಕೇರಿ, ಅ. 19: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ತಾ. 21 ರಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 2 ಗಂಟೆವರೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಉದ್ಯೋಗಮೇಳ ನಡೆಯಲಿದೆ.

ಈ ಮೇಳದಲ್ಲಿ ಎಸ್‍ಬಿಐ, ಲೈಫ್ ಇನ್ಸೂರೆನ್ಸ್, ಯುಬಿಇಆರ್ ಇಂಡಿಯಾ ಪ್ರೈವೇಟ್ ಲಿಮಿಟೆಡ್, ಬಿಎಸ್‍ಎನ್‍ಎಲ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಮುಂತಾದ ಸಂಸ್ಥೆಗಳಲ್ಲಿ ಖಾಲಿಯಿರುವ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಿದ್ದಾರೆ.

ಎಸ್‍ಎಸ್‍ಎಲ್‍ಸಿ, ಪಿಯುಸಿ, ಐಟಿಐ, ಡಿಪ್ಲೋಮ, ವಾಹನ ಚಾಲನ ಪರವಾನಗಿ ಹಾಗೂ ಯಾವದೇ ಪದವಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಈ ಉದ್ಯೋಗಮೇಳದಲ್ಲಿ ಭಾಗವಹಿಸಬಹುದು. ಅಭ್ಯರ್ಥಿಗಳು ವಿದ್ಯಾರ್ಹತೆಯ ಮೂಲ ದಾಖಲಾತಿಗಳು, ಅನುಭವ ಪ್ರಮಾಣಪತ್ರ (ಅನ್ವಯಿಸುವವರಿಗೆ ಮಾತ್ರ) ಹಾಗೂ ಸ್ವ-ವಿವರಗಳ ಪ್ರತಿಗಳೊಂದಿಗೆ ಹಾಜರಾಗುವಂತೆ ಜಿಲ್ಲಾ ಉದ್ಯೋಗಾಧಿಕಾರಿ ತಿಳಿಸಿದ್ದಾರೆ.

ಹಾಕಿ ಉದ್ಘಾಟನೆ

ಜಿಲ್ಲಾ ಪಂಚಾಯತ್, ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಹಾಗೂ ಇಬ್ನಿವಳವಾಡಿ ಬೋಯಿಕೇರಿ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ ಇವರ ಸಂಯುಕ್ತ ಆಶ್ರಯದಲ್ಲಿ ತಾ. 21 ಮತ್ತು 22 ರಂದು ವಿಭಾಗ ಮಟ್ಟದಲ್ಲಿ ಹಾಗೂ ತಾ. 24 ರಿಂದ 27 ರವರೆಗೆ ರಾಜ್ಯ ಮಟ್ಟದ ಹಾಕಿ ಪಂದ್ಯಾವಳಿ ನಗರದ ಸಾಯಿ ಟರ್ಫ್ ಹಾಕಿ ಮೈದಾನದಲ್ಲಿ ನಡೆಯಲಿದೆ.

ತಾ. 21 ರಂದು ಮಧ್ಯಾಹ್ನ 3.30 ಗಂಟೆಗೆ ವಿಭಾಗದ ಮಟ್ಟದ ಹಾಕಿ ಪಂದ್ಯಾವಳಿಯ ಉದ್ಘಾಟನಾ ಸಮಾರಂಭ ನಗರದ ರೇಸ್ ಕೋರ್ಸ್ ರಸ್ತೆಯಲ್ಲಿರುವ ಸಾಯಿ ಟರ್ಫ್ ಹಾಕಿ ಮೈದಾನದಲ್ಲಿ ನಡೆಯಲಿದೆ. ಹಾಗೆಯೇ ತಾ. 25 ರಂದು ಬೆಳಗ್ಗೆ 10.30 ಗಂಟೆಗೆ ರಾಜ್ಯ ಮಟ್ಟದ ಹಾಕಿ ಪಂದ್ಯಾವಳಿಯ ಉದ್ಘಾಟನಾ ಸಮಾರಂಭ ನಡೆಯಲಿದೆ.

ಪೊಲೀಸ್ ದಿನಾಚರಣೆ

ಕೊಡಗು ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ತಾ. 21 ರಂದು ಬೆಳಗ್ಗೆ 8.30 ಗಂಟೆಗೆ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಪೊಲೀಸ್ ಹುತಾತ್ಮರ ದಿನಾಚರಣೆ ನಡೆಯಲಿದೆ. ಜಿಲ್ಲಾ ಸತ್ರ ನ್ಯಾಯಾಧೀಶರಾದ ವೀರಪ್ಪ ವಿ.ಮಲ್ಲಾಪುರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಮನ್ ಡಿ.ಪಿ. ಇತರರು ಪಾಲ್ಗೊಳ್ಳಲಿದ್ದಾರೆ.

ಶಿಕ್ಷಣ ಕಾರ್ಯಕ್ರಮ

ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ., ಕೊಡಗು ಜಿಲ್ಲಾ ಸಹಕಾರ ಯೂನಿಯನ್ ನಿ., ಇವರ ಸಂಯುಕ್ತಾಶ್ರಯದಲ್ಲಿ ಜಿಲ್ಲೆಯ ಪ್ಯಾಕ್ಸ್, ಪಿಕಾರ್ಡ್ ಬ್ಯಾಂಕ್, ಎಪಿಸಿಎಂಎಸ್., ಪಟ್ಟಣ ಸಹಕಾರ ಬ್ಯಾಂಕ್, ಪತ್ತಿನ ಸಹಕಾರ ಸಂಘ ಹಾಗೂ ಮಾರಾಟ ಸಹಕಾರ ಸಂಘಗಳ ಅಧ್ಯಕ್ಷರುಗಳಿಗೆ ಚುನಾವಣೆ ಹಾಗೂ ಸಹಕಾರ ಸಂಘಗಳಲ್ಲಿ ದುರುಪಯೋಗದ ಕುರಿತು ಶಿಕ್ಷಣ ಕಾರ್ಯಕ್ರಮವು ತಾ. 21 ರಂದು ಬೆಳಗ್ಗೆ 11 ಗಂಟೆಗೆ ಕೊಡಗು ಜಿಲ್ಲಾ ಸಹಕಾರ ಯೂನಿಯನ್ ಸಭಾಂಗಣದಲ್ಲಿ ನಡೆಯಲಿದೆ.

ಅಧಿಕಾರ ಸ್ವೀಕಾರ

ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ನೂತನ ಅಧ್ಯಕ್ಷರು ಮತ್ತು ಸದಸ್ಯರ ಅಧಿಕಾರ ಸ್ವೀಕಾರ ಕಾರ್ಯಕ್ರಮವು ತಾ. 21 ರಂದು ಬೆಳಗ್ಗೆ 10 ಗಂಟೆಗೆ ನಗರದ ಕೊಡವ ಸಾಹಿತ್ಯ ಅಕಾಡೆಮಿ ಕಚೇರಿಯಲ್ಲಿ ನಡೆಯಲಿದೆ.

ಜನಾಭಿಪ್ರಾಯ ಸಭೆ

ಸೋಮವಾರಪೇಟೆ : ಕುಶಾಲನಗರ ನೂತನ ತಾಲೂಕು ರಚನೆಯ ಕುರಿತು ಜನಾಭಿಪ್ರಾಯ ಸಂಗ್ರಹಿಸುವ ಬಗ್ಗೆ ತಾ. 21ರಂದು ಪೂರ್ವಾಹ್ನ 11 ಗಂಟೆಗೆ ಕುಶಾಲನಗರದ ಕನ್ನಿಕಾ ಇಂಟರ್ ನ್ಯಾಷನಲ್, ಸಭಾಂಗಣದಲ್ಲಿ ಶಾಸಕ ಅಪ್ಪಚ್ದು ರಂಜನ್ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದೆ ಎಂದು ತಹಶೀಲ್ದಾರ್ ಗೋವಿಂದರಾಜು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಹಿಂದೆ ಸಭೆಯನ್ನು ತಾ.22ರಂದು ನಡೆಸಲು ಉದ್ದೇಶಿಸಲಾಗಿತ್ತು. ಕಾರಣಾಂತರಗಳಿಂದ ಸಭೆಯನ್ನು ಒಂದು ದಿನ ಮುಂಚಿತವಾಗಿ ಆಯೋಜಿಸಲಾಗಿದೆ ಎಂದು ತಹಶೀಲ್ದಾರ್ ಹೇಳಿದ್ದಾರೆ.

ಕೆಡಿಪಿ ಸಭೆ

ಸೋಮವಾರಪೇಟೆ : ಇಲ್ಲಿಗೆ ಸಮೀಪದ ಐಗೂರು ಗ್ರಾಮ ಪಂಚಾಯಿತಿ ಕೆಡಿಪಿ ಸಭೆ ತಾ. 21ರಂದು (ನಾಳೆ) ಬೆಳಿಗ್ಗೆ 10.30ಕ್ಕೆ ಪಂಚಾಯಿತಿ ಅಧ್ಯಕ್ಷ ಡಿ.ಎಂ. ರಮೇಶ್ ಅಧ್ಯಕ್ಷತೆಯಲ್ಲಿ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ನಡೆಯಲಿದೆ.

ಮಧ್ಯಾಹ್ನ 2.30ಕ್ಕೆ ‘ನಮ್ಮ ಗ್ರಾಮ ನಮ್ಮ ಯೋಜನೆ’ಯ ವಿಶೇಷ ಗ್ರಾಮ ಸಭೆ ನಡೆಯಲಿದ್ದು, ಸಭೆಯಲ್ಲಿ ಹೋಬಳಿ ಮಟ್ಟದ ಅಧಿಕಾರಿಗಳು ಹಾಗೂ ಗ್ರಾಮ ಮಟ್ಟದ ಅಧಿಕಾರಿಗಳು ಭಾಗವಹಿಸಲಿದ್ದಾರೆ ಎಂದು ಪಿಡಿಒ ಯಾದವ್ ತಿಳಿಸಿದ್ದಾರೆ.

ಆರೋಗ್ಯ ರಕ್ಷಾ ಸಮಿತಿ ಸಭೆ

ಸೋಮವಾರಪೇಟೆ : ಇಲ್ಲಿನ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಆರೋಗ್ಯ ರಕ್ಷಾ ಸಲಹಾ ಸಮಿತಿಯ ಸಭೆ ತಾ.21ರಂದು ಬೆಳಿಗ್ಗೆ 9.30ಕ್ಕೆ ಸಮಿತಿಯ ಅಧ್ಯಕ್ಷರಾದ ಶಾಸಕ ಅಪ್ಪಚ್ಚು ರಂಜನ್ ಅಧ್ಯಕ್ಷತೆಯಲ್ಲಿ, ಆಸ್ಪತ್ರೆಯ ಶಸ್ತ್ರ ಚಿಕಿತ್ಸಕರ ಕೊಠಡಿಯಲ್ಲಿ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.