ಸಿ.ಇ.ಓ. ಭೇಟಿ-ಸ್ಥಳ ಪರೀಶಿಲನೆ
ಕೂಡಿಗೆ, ಅ. 22: ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬ್ಯಾಡಗೂಟ್ಟ ಗ್ರಾಮದಲ್ಲಿ ಕಸ ವಿಲೇವಾರಿ ಘಟಕ ಪ್ರಾರಂಭಿಸಲು ಈಗಾಗಲೇ ಕಂದಾಯ ಇಲಾಖೆ ವತಿಯಿಂದ 50 ಸೆಂಟು ಜಾಗ ತಾಲೂಕು ಕಾರ್ಯನಿರ್ವಹಣಾಧಿಕಾರಿ ಅವರ ಹೆಸರಿಗೆ ಮಂಜೂರಾಗಿದೆ. ಆದರೆ ಬ್ಯಾಡಗೂಟ್ಟ ಗ್ರಾಮದಲ್ಲಿ ಕಸ ವಿಲೇವಾರಿ ಘಟಕ ಪ್ರಾರಂಭಿಸಬಾರದೆಂದು ಜಿಲ್ಲಾ ಪಂಚಾಯಿತಿ ಅಧಿಕಾರಿಗೆ ಕೆಲವರು ಅರ್ಜಿ ಸಲ್ಲಿಸಿದ್ದರಿಂದ ಜಿ.ಪಂ. ಕಾರ್ಯ ನಿರ್ವಹಣಾಧಿಕಾರಿ ಲಕ್ಷ್ಮೀಪ್ರಿಯ ಬ್ಯಾಡಗೂಟ್ಟ ಗ್ರಾಮಕ್ಕೆ ಭೇಟಿ ನೀಡಿದ್ದರು. ಈ ಸಂದರ್ಭ ಲಕ್ಷ್ಮೀಪ್ರಿಯ ಸ್ಥಳೀಯ ಗ್ರಾಮಸ್ಥರೊಂದಿಗೆ ಮಾತುಕತೆ ನಡೆಸಿದರು. ಬ್ಯಾಡಗೊಟ್ಟ ಕೇಂದ್ರದಲ್ಲಿ ಒಣಕಸ ವಿಲೇವಾರಿ ಮಾಡಿ ಯಂತ್ರಗಳ ಮೂಲಕ ಗೊಬ್ಬರ ಮಾಡಲಾಗುವದು. ಇದರಿಂದ ಗ್ರಾಮದ ಜನರಿಗೆ ತೊಂದರೆ ಆಗುವದಿಲ್ಲ. ಅಲ್ಲದೆ ಜಿಲ್ಲಾ ಪಂಚಾಯಿತಿ ವತಿಯಿಂದ ಕುಟ್ಟ ಗ್ರಾಮ ಪಂಚಾಯಿತಿಯಲ್ಲಿ ನೂತನ ಕಸ ವಿಲೇವಾರಿ ಘಟಕವನ್ನು ಪ್ರಾರಂಭಿಸಲಾಗಿದೆ. ಅಲ್ಲಿಗೆ ಸ್ಥಳೀಯ ಗ್ರಾಮಸ್ಥರು ಹಾಗೂ ಗ್ರಾಮ ಪಂಚಾಯಿತಿ ಆಡಳಿತ ಮಂಡಳಿ ಭೇಟಿ ನೀಡಿ ಮಾಹಿತಿ ಪಡೆದು ನಂತರ ಘಟಕವನ್ನು ಪ್ರಾರಂಭಿಸುವ ಬಗ್ಗೆ ಕ್ರಮ ಕೈಗೊಳ್ಳಲಾಗುವದು ಎಂದರು. ಈ ಸಂದರ್ಭ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಸುನಿಲ್, ಕೂಡಿಗೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪ್ರೇಮಲೀಲಾ, ಗ್ರಾಮ ಪಂಚಾಯಿತಿ ಸದಸ್ಯ ರಾಮಚಂದ್ರ, ಅಭಿವೃದ್ಧಿ ಅಧಿಕಾರಿ ಅಶ್ವಿನಿ, ಸಿಬ್ಬಂದಿ ವರ್ಗದವರು ಇದ್ದರು.