ಸೋಮವಾರಪೇಟೆ, ಅ. 23: ಪಟ್ಟಣದಲ್ಲಿ ನಿರ್ಮಾಣವಾಗಿರುವ ಅಂಬೇಡ್ಕರ್ ಭವನದಲ್ಲಿ ಬೇರೆ ಯಾವದೇ ಸರ್ಕಾರಿ ಕಚೇರಿಗಳನ್ನು ಸ್ಥಾಪಿಸಲು ಅವಕಾಶ ನೀಡುವದಿಲ್ಲ ಎಂದು ದಲಿತ ಜಿಲ್ಲಾ ಹಿತರಕ್ಷಣಾ ಒಕ್ಕೂಟ ಹೇಳಿದೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಒಕ್ಕೂಟದ ಅಧ್ಯಕ್ಷ ನಿರ್ವಾಣಪ್ಪ, ಒಕ್ಕೂಟದ ಸದಸ್ಯರ ಹೋರಾಟದ ಫಲವಾಗಿ ಪಟ್ಟಣದಲ್ಲಿ ಅಂಬೇಡ್ಕರ್ ಭವನ ನಿರ್ಮಾಣವಾಗಿದೆ. ದಲಿತರ ಶ್ರೇಯೋಭಿವೃದ್ಧಿಗೆ ಭವನ ಉಪಯೋಗವಾಗಬೇಕು. ಸಮಾಜ ಕಲ್ಯಾಣ ಇಲಾಖೆಯ ಕಚೇರಿಯನ್ನು ಭವನಕ್ಕೆ ಸ್ಥಳಾಂತರಿಸಲು ತಂತ್ರ ನಡೆಯುತ್ತಿದೆ. ಇಂತಹ ಪ್ರಯತ್ನಕ್ಕೆ ಮುಂದಾದರೆ ದಲಿತಪರ ಸಂಘಟನೆಗಳ ಸಹಕಾರದೊಂದಿಗೆ ಪ್ರತಿಭಟನೆ ಹಮ್ಮಿಕೊಳ್ಳಲಾಗುವದು ಎಂದು ಎಚ್ಚರಿಸಿದರು. ತಾಲೂಕು ಪಂಚಾಯಿತಿ ಸಮೀಪದ ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಪಟ್ಟಭದ್ರ ಹಿತಾಸಕ್ತಿಗಳು ವಿರೋಧ ವ್ಯಕ್ತಪಡಿಸಿದ್ದರು. ಈಗ ನಿಯಮಬಾಹಿರವಾಗಿ ಸರ್ಕಾರಿ ಕಚೇರಿಯನ್ನು ಭವನದಲ್ಲಿ ಸ್ಥಾಪಿಸಲು ಕುತಂತ್ರ ರೂಪಿಸುತ್ತಿದ್ದಾರೆ ಎಂದು ದೂರಿದರು.

ಮಾದಾಪುರ ವ್ಯಾಪ್ತಿಯಲ್ಲಿ ಕಾರ್ಮಿಕರ ಸಂಖ್ಯೆ ಹೆಚ್ಚಾಗಿದ್ದು, ಮುಂದಿನ ಒಂದು ವಾರದಲ್ಲಿ ಎಂ.ಬಿ.ಬಿ.ಎಸ್. ವೈದ್ಯರನ್ನು ನೇಮಿಸದಿದ್ದರೆ ಒಕ್ಕೂಟದ ವತಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗುವದು ಎಂದು ಒಕ್ಕೂಟದ ಉಪಾಧ್ಯಕ್ಷ ಹೆಚ್.ಬಿ. ಸೋಮಪ್ಪ ಹೇಳಿದರು. ಸೋಮವಾರಪೇಟೆ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಹತ್ತಾರು ವರ್ಷ ಗಳಿಂದ ಕರ್ತವ್ಯ ನಿರ್ವಹಿಸುತ್ತಿರುವ ನಾನ್ ಕ್ಲಿನಿಕಲ್ ಸಿಬ್ಬಂದಿಗಳನ್ನು ಕೆಲಸದಿಂದ ಕಿತ್ತುಹಾಕುವ ಪ್ರಯತ್ನಕ್ಕೆ ಮುಂದಾದರೆ ಪ್ರತಿಭಟನೆ ಹಮ್ಮಿ ಕೊಳ್ಳಲಾಗುವದು ಎಂದು ಎಚ್ಚರಿಸಿದರು.

ಗೋಷ್ಠಿಯಲ್ಲಿ ಒಕ್ಕೂಟದ ಉಪಾಧ್ಯಕ್ಷ ಎಂ.ಪಿ. ಹೊನ್ನಪ್ಪ ಇದ್ದರು.