ಸುಂಟಿಕೊಪ್ಪ, ಅ. 23: ಪದವಿ ಪೂರ್ವ ಶಿಕ್ಷಣ ಇಲಾಖೆ ಮತ್ತು ಮಾದಾಪುರ ಡಿ. ಚನ್ನಮ್ಮ ಪದವಿ ಪೂರ್ವ ಕಾಲೇಜಿನ ಎನ್ನೆಸ್ಸೆಸ್ ಘಟಕದ ವತಿಯಿಂದ ವಿಜ್ಞಾನ ಮತ್ತು ವೈಜ್ಞಾನಿಕ ಮನೋಭಾವನೆಗಾಗಿ ವಿದ್ಯಾರ್ಥಿಗಳು ಎಂಬ ಧ್ಯೇಯ ದೊಂದಿಗೆ ಕಾನ್‍ಬೈಲ್ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಂಡಿರುವ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದಲ್ಲಿ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ವತಿಯಿಂದ ರಾಷ್ಟ್ರೀಯ ಮನೋವೃತ್ತಿ ದಿನದ ಅಂಗವಾಗಿ ವೈಜ್ಞಾನಿಕ ಮನೋಭಾವ ಬೆಳವಣಿಗೆ ಕುರಿತ ಉಪನ್ಯಾಸ ಮತ್ತು ‘ಪವಾಡ ರಹಸ್ಯ ಬಯಲು ಕಾರ್ಯಕ್ರಮ’ ಏರ್ಪಡಿಸಲಾಗಿತ್ತು.

‘ಯುವ ಜನತೆಯಲ್ಲಿ ವೈಜ್ಞಾನಿಕ ಮನೋಭಾವ ಬೆಳವಣಿಗೆ’ ಕುರಿತು ಮಾಹಿತಿ ನೀಡಿದ ಸೂರ್ಲಬ್ಬಿ ಸರ್ಕಾರಿ ಪ್ರೌಢಶಾಲೆಯ ವಿಜ್ಞಾನ ಶಿಕ್ಷಕರೂ ಆದ ರಾಜ್ಯ ವಿಜ್ಞಾನ ಪರಿಷತ್ತಿನ ಜಿಲ್ಲಾ ಸಮಿತಿ ಸಂಯೋಜಕ ಟಿ.ಜಿ. ಪ್ರೇಮಕುಮಾರ್ ಮಾತನಾಡಿ, ವಿದ್ಯಾರ್ಥಿಗಳು ಪ್ರಶ್ನಿಸುವ ಮನೋಭಾವನೆ ಬೆಳೆಸಿಕೊಳ್ಳುವ ಮೂಲಕ ವೈಚಾರಿಕ ಚಿಂತನೆ ಅಳವಡಿಸಿಕೊಳ್ಳಬೇಕು ಎಂದರು.

ರಾಜ್ಯ ವಿಜ್ಞಾನ ಪರಿಷತ್ತಿನ ಜಿಲ್ಲಾ ಸಮಿತಿ ಉಪಾಧ್ಯಕ್ಷರೂ ಆದ ಹೆಬ್ಬಾಲೆ ಪ್ರೌಢಶಾಲೆಯ ಶಿಕ್ಷಕ ಎಂ.ಎನ್. ವೆಂಕಟನಾಯಕ್, ಸಂಪನ್ಮೂಲ ಶಿಕ್ಷಕ ಎಂ.ಎಸ್. ಕೇಶವಮೂರ್ತಿ ಮಾತನಾಡಿದರು. ಎನ್ನೆಸ್ಸೆಸ್ ಶಿಬಿರಾಧಿಕಾರಿ ಮೋಹನ್ ಹೆಗ್ಡೆ ಅಧ್ಯಕ್ಷತೆ ವಹಿಸಿದ್ದರು.

ಪವಾಡ ರಹಸ್ಯ ಬಯಲು: ನಂತರ ನಡೆದ ‘ಪವಾಡ ರಹಸ್ಯ ಬಯಲು ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿ ಎಂ.ಎನ್. ವೆಂಕಟನಾಯಕ್, ವಿವಿಧ ಪವಾಡಗಳ ಹಿಂದಿರುವ ವೈಜ್ಞಾನಿಕ ಸತ್ಯದ ಪ್ರಾತ್ಯಕ್ಷಿಕೆಗಳನ್ನು ಪ್ರದರ್ಶಿಸಿದರು.