ಮಡಿಕೇರಿ, ನ. 1: ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆಯ 2019-20ನೇ ಸಾಲಿನ ವಾರ್ಷಿಕ ಮಹಾ ಸಭೆಯು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
ನಗರದ ಜಿಲ್ಲಾ ಸ್ಕೌಟ್ಸ್ ಮತ್ತು ಗೈಡ್ಸ್ ಭವನದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಪ್ರತಿಯೊಂದು ಮಗು ಅದ್ಭುತ ಶಕ್ತಿ ಹೊಂದಿರುತ್ತದೆ. ಉತ್ತಮ ಸಾಧನೆಗೈಯ್ಯುವ ನಿಟ್ಟಿನಲ್ಲಿ ಅಗತ್ಯವಾದ ಅರ್ಹತೆ ಹಾಗೂ ಮೌಲ್ಯಗಳನ್ನು ಮೈಗೂಡಿಸಿಕೊಂಡು ಮುನ್ನಡೆಯಬೇಕು ಎಂದರು.
ಮಕ್ಕಳಲ್ಲಿ ಮಾನವೀಯ ಮೌಲ್ಯ ಬಿತ್ತಬೇಕು, ಮಕ್ಕಳು ಶೈಕ್ಷಣಿಕವಾಗಿ ಉತ್ತಮ ಸಾಧನೆ ಮಾಡುವದರ ಜೊತೆಗೆ ಕಬ್, ಬುಲ್ ಬುಲ್, ಸ್ಕೌಟ್ಸ್ ಮತ್ತು ಗೈಡ್ಸ್ ಕಾರ್ಯಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವಂತಾಗಬೇಕು. ಇದರಿಂದ ಶಿಸ್ತು ಹಾಗೂ ತಾಳ್ಮೆ ಮೂಡುತ್ತದೆ. ವ್ಯಕ್ತಿತ್ವದ ಬೆಳವಣಿಗೆಗೆ ಸಹಕಾರಿ ಎಂದು ಜಿಲ್ಲಾಧಿಕಾರಿ ಹೇಳಿದರು. ಪ್ರಕೃತಿ ವಿಕೋಪ ಸಂದರ್ಭದಲ್ಲಿ ಜಿಲ್ಲಾಡಳಿತದೊಂದಿಗೆ ಕೈಜೋಡಿಸಿ ಕೆಲಸ ನಿರ್ವಹಿಸಿದ ಮಕ್ಕಳಿಗೆ ಪ್ರಶಂಸನಾ ಪತ್ರ ನೀಡಿ ಪ್ರೋತ್ಸಾಹಿಸಲಾಗಿದೆ. ಇನ್ನು ಮುಂದೆ ಕೂಡ ಜಿಲ್ಲಾಡಳಿತದೊಂದಿಗೆ ಕೈಜೋಡಿಸುವಂತೆ ಸಲಹೆ ಮಾಡಿದರು.
ಮೂರು ವರ್ಷದೊಳಗಿನ ಮಕ್ಕಳಿಗೆ ಸದಾ ನಗುತ್ತಿರಿ ಎಂಬ ಕಾರ್ಯಕ್ರಮಗಳನ್ನು ಹೆಚ್ಚು ಹೆಚ್ಚಾಗಿ ಆಯೋಜಿಸುವಂತೆ ಹೇಳಿದರು. ತಾಯಂದಿರು ಮಕ್ಕಳನ್ನು ಉತ್ತಮ ಕಾರ್ಯಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವಂತೆ ಪ್ರೋತ್ಸಾಹಿಸಬೇಕು. ಹಾಗೆಯೇ ಶಾಲೆಗಳಲ್ಲಿ ಉತ್ತಮ ಕಾರ್ಯಕ್ರಮ ಆಯೋಜಿಸಿ ಮಕ್ಕಳನ್ನು ಪ್ರೋತ್ಸಾಹಿಸಿ ಎಂದು ಸ್ಕೌಟ್ಸ್ ಮತ್ತು ಗೈಡ್ಸ್ ಶಿಕ್ಷಕರಿಗೆ ಜಿಲ್ಲಾಧಿಕಾರಿ ಅವರು ಸಲಹೆ ನೀಡಿದರು.
ಜಿಲ್ಲಾ ಸ್ಕೌಟ್ಸ್ ಮತ್ತು ಗೈಡ್ಸ್ ಪ್ರಧಾನ ಆಯುಕ್ತ ಕಿಟ್ಟು ಕಾಳಪ್ಪ ಪ್ರಾಸ್ತವಿಕವಾಗಿ ಮಾತನಾಡಿ, ಮೂರು ತಾಲೂಕಿನಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಭವನ ನಿರ್ಮಾಣ ಮಾಡಲು ಸ್ವಂತ ಜಾಗ ಮಂಜೂರಾತಿ ಮಾಡಬೇಕಾಗಿ ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದರು.
ವಿಧಾನ ಪರಿಷತ್ ಸದಸ್ಯ ಸುನೀಲ್ ಸುಬ್ರಮಣಿ ಜಿಲ್ಲಾ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಅಭಿವೃದ್ಧಿಗೆ 2 ಲಕ್ಷ ರೂ. ಅನುದಾನ ಮಂಜೂರು ಮಾಡಿದ್ದು, ಹಣ ಬಿಡುಗಡೆ ಮಾಡುವಂತೆ ಕೋರಿದರು. ಕಬ್, ಬುಲ್ ಬುಲ್, ಸ್ಕೌಟ್ಸ್ ಮತ್ತು ಗೈಡ್ಸ್‍ನಲ್ಲಿ ಇರುವ ಮಕ್ಕಳ ಸಂಖ್ಯೆ ಮತ್ತು ಕಾರ್ಯ ವೈಖರಿಯ ಬಗ್ಗೆ ಜಿಲ್ಲಾ ಸ್ಕೌಟ್ಸ್ ಮತ್ತು ಗೈಡ್ಸ್‍ನ ಆಯುಕ್ತ ಜಿಮ್ಮಿ ಸಿಕ್ವೇರ್ ಮಾಹಿತಿ ನೀಡಿದರು.
ಜಿಲ್ಲಾ ಸ್ಕೌಟ್ಸ್ ಮತ್ತು ಗೈಡ್ಸ್‍ನ ಸಂಚಾಲಕಿ ದಮಯಂತಿ ಹಿಂದಿನ ಸಭಾ ನಡಾವಳಿ, 2018-19ನೇ ಸಾಲಿನ ವರದಿ, 2018-19ನೇ ಸಾಲಿನ ಆಯವ್ಯಯ ಹಾಗೂ ಲೆಕ್ಕಪತ್ರವನ್ನು ಹಾಗೂ 2019 ನೇ ಸಾಲಿನಲ್ಲಿ ಜರುಗಿದ ಕಾರ್ಯಚಟುಟಿಕೆಗಳು ಹಾಗೂ ಯೋಜನಾ ಕಾರ್ಯಕ್ರಮ ಕುರಿತು ಸಭೆಯಲ್ಲಿ ಮಂಡಿಸಿದರು.
ಕಾರ್ಯಕ್ರಮದಲ್ಲಿ ಹಿರಿಯರಾದ ರಾಣಿ ಮಾಚಯ್ಯ, ಖಜಾಂಜಿ ಎ.ಡಿ. ಸೋಮಯ್ಯ, ಮುತ್ತಪ್ಪ ಹಾಗೂ ಸ್ಕೌಟ್ಸ್ ಮತ್ತು ಗೈಡ್ಸ್‍ನ ಶಿಕ್ಷಕರು ಪಾಲ್ಗೊಂಡಿದ್ದರು. ಕಿಟ್ಟು ಕಾಳಪ್ಪ ಸ್ವಾಗತಿಸಿದರು. ಅಲಿಮಾ ನಿರೂಪಿಸಿ, ವಂದಿಸಿದರು.