ನಾಪೋಕ್ಲು, ಅ. ೪: ಸ್ಥಳೀಯ ಗ್ರಾಮ ಪಂಚಾಯಿತಿ ತ್ಯಾಜ್ಯ ವಿಲೇವಾರಿಗಾಗಿ ನಾಪೋಕ್ಲುವಿನ ಹಿಂದೂ ರುದ್ರಭೂಮಿಯಲ್ಲಿ ಮೃತದೇಹಗಳನ್ನು ಹೂತಿದ್ದ ಸ್ಥಳದಲ್ಲಿ ಜೆಸಿಬಿ ಸಹಾಯದಿಂದ ಬೃಹತ್ ಗುಂಡಿಯನ್ನು ನಿರ್ಮಾಣ ಮಾಡಿರುವದನ್ನು ವಿಶ್ವಹಿಂದೂ ಪರಿಷತ್ ಹಾಗೂ ಭಜರಂಗದಳ ಸೇರಿದಂತೆ ಹಿಂದೂ ಪರ ಸಂಘಟನೆಗಳು ತೀವ್ರವಾಗಿ ಖಂಡಿಸಿವೆ.
ವಿಶ್ವ ಹಿಂದೂ ಪರಿಷತ್‌ನ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಡಿ.ನರಸಿಂಹ ಹಾಗೂ ಭಜರಂಗದಳದ ಜಿಲ್ಲಾ ಸಂಯೋಜಕ ಚೇತನ್ ಸೇರಿದಂತೆ ಮತ್ತಿತರ ಹಿಂದೂಪರ ಸಂಘಟನೆಗಳ ಪ್ರಮುಖರು, ಸೋಮವಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂದರ್ಭ ಮಾತನಾಡಿದ ವಿಶ್ವಹಿಂದೂ ಪರಿಷತ್‌ನ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಡಿ. ನರಸಿಂಹ, ಈ ಬಗ್ಗೆ ಸರ್ಕಾರ ಮತ್ತು ಜಿಲ್ಲಾಡಳಿತ ಮಧ್ಯೆ ಪ್ರವೇಶಿಸಿ ಪರಿಶೀಲನೆ ನಡೆಸುವ ಮೂಲಕ ಹಿಂದೂ ಸಮಾಜಕ್ಕೆ ನ್ಯಾಯದೊರಕಿಸಿಕೊಡಬೇಕಾಗಿದೆ ಎಂದರು.
ಈ ಸಂದರ್ಭ ಜಿಲ್ಲಾ ಪಂಚಾಯಿತಿ ಸದಸ್ಯ ಪಾಡಿಯಮ್ಮಂಡ ಮುರುಳಿ ಕರುಂಬಮಯ್ಯ, ಭಜರಂಗದಳದ ಜಿಲ್ಲಾ ವಿದ್ಯಾರ್ಥಿ ಪ್ರಮುಖ್ ವಿನಯ್, ನಾಪೋಕ್ಲು ಸಂಚಾಲಕ ಪ್ರದೀಪ್, ಪ್ರಮುಖರಾದ ಅಂಬಿಕಾರ್ಯಪ್ಪ, ಕರವಂಡ ಲವ ಸೇರಿದಂತೆ ಹಿಂದೂ ಸಂಘಟನೆಗಳ ಪ್ರಮುಖರು ಹಾಜರಿದ್ದರು.