ಕುಶಾಲನಗರ, ನ. ೬: ಕಾವೇರಿ ನದಿ ಸಂರಕ್ಷಣೆಯಾದಲ್ಲಿ ಮಾತ್ರ ಜೀವರಾಶಿಗಳ ಉಳಿವು ಸಾಧ್ಯ ಎಂದು ತುಮಕೂರಿನ ಸಿದ್ಧಗಂಗಾ ಮಠದ ಪೀಠಾಧ್ಯಕ್ಷರಾದ ಶ್ರೀ ಶ್ರೀ ಸಿದ್ಧಲಿಂಗ ಮಹಾಸ್ವಾಮೀಜಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಅವರು ಕುಶಾಲನಗರ ಸಮೀಪ ಕೊಪ್ಪ ಗ್ರಾಮಕ್ಕ್ಕೆ ಭೇಟಿ ನೀಡಿದ ಸಂದರ್ಭ ಸುದ್ದಿಗಾರರೊಂದಿಗೆ ಮಾತನಾಡಿ, ಮನುಷ್ಯನ ಬದುಕಿಗೆ ನೀರು ಅತ್ಯಮೂಲ್ಯವಾಗಿದ್ದು ನದಿ, ಜಲಮೂಲಗಳ ಸಂರಕ್ಷಣೆಯಾಗಬೇಕಿದೆ. ಮಾನವನ ಸ್ವಾರ್ಥದಿಂದ ಜಲ ಮೂಲಗಳು ಮಿತಿ ಮೀರಿದ ಪ್ರಮಾಣದಲ್ಲಿ ಕಲುಷಿತಗೊಳ್ಳುತ್ತಿರುವದು ಆತಂಕಕಾರಿ ಬೆಳವಣಿಗೆಯಾಗಿದೆ, ಜೀವನದಿ ಕಾವೇರಿಯ ಬಗ್ಗೆ ಪ್ರತಿಯೊಬ್ಬರೂ ಪವಿತ್ರ ಭಾವನೆ ಹೊಂದಬೇಕು. ಕಳೆದ ಹಲವು ವರ್ಷಗಳಿಂದ ಕುಶಾಲನಗರದಲ್ಲಿ ನದಿಗೆ ಮಹಾ ಆರತಿ ಬೆಳಗುವ ಮೂಲಕ ಜನರಿಗೆ ಅರಿವು ಜಾಗೃತಿ ಮೂಡಿಸುತ್ತಿರುವ ಕಾವೇರಿ ನದಿ ಸ್ವಚ್ಛತಾ ಆಂದೋಲನ ತಂಡದ ಕಾರ್ಯಕ್ರಮಗಳ ಬಗ್ಗೆ ಅವರು ಶ್ಲಾಘನೆ ವ್ಯಕ್ತಪಡಿಸಿದರು.

ಈ ತಿಂಗಳ ೨೯, ೩೦ ರಂದು ನಡೆಯಲಿರುವ ಕಾವೇರಿ ನದಿ ಹಬ್ಬ ಕಾರ್ಯಕ್ರಮದಲ್ಲಿ ದಿವ್ಯ ಸಾನಿಧ್ಯ ವಹಿಸುವಂತೆ ಸಿದ್ಧಗಂಗಾ ಶ್ರೀಗಳಿಗೆ ಸ್ವಚ್ಛತಾ ಆಂದೋಲನ ಪ್ರಮುಖರು ಕೋರಿಕೆ ಸಲ್ಲಿಸಿದರು.

ಈ ಸಂದರ್ಭ ಶ್ರೀ ಕಿರಿಕೊಡ್ಲಿ ಮಠಾಧೀಶರಾದ ಸದಾಶಿವ ಸ್ವಾಮೀಜಿ, ಶ್ರೀ ಕಳಂಚೇರಿ ಮಠಾಧೀಶರಾದ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ, ತೊರೆನೂರು ವಿರಕ್ತ ಮಠದ ಮಲ್ಲೇಶ ಸ್ವಾಮೀಜಿ, ಕಲ್ಲುಮಠದ ಶ್ರೀ ಮಹಾಂತ ಸ್ವಾಮೀಜಿ, ಕಲ್ಲಳ್ಳಿ ಮಠದ ರುದ್ರಮುನಿ ಮಹಾಸ್ವಾಮೀಜಿ, ದುಂಡಳ್ಳಿಯ ಶ್ರೀ ಅಭಿನವ ಸಿದ್ಧಲಿಂಗ ಶಿವಾಚಾರ್ಯ ಸ್ವಾಮೀಜಿ, ಕೊಡ್ಲಿಪೇಟೆಯ ಸಿದ್ಧಲಿಂಗ ಸ್ವಾಮೀಜಿ, ಶಿಡಿಗಳಲೆ ಮಠದ ಶ್ರೀ ಇಮ್ಮಡಿ ಶಿವಲಿಂಗ ಸ್ವಾಮೀಜಿ, ಮನೆಹಳ್ಳಿ ಮಠದ ಶ್ರೀ ಮಹಾಂತ ಶಿವಲಿಂಗ ಸ್ವಾಮೀಜಿಗಳು, ಕಾವೇರಿ ನದಿ ಸ್ವಚ್ಛತಾ ಆಂದೋಲನ ಸಮಿತಿ ಪ್ರಮುಖರಾದ ಎಂ.ಎನ್. ಚಂದ್ರಮೋಹನ್, ಎಂ.ಎನ್. ಕುಮಾರಸ್ವಾಮಿ, ಅಕ್ಷಯ್ ಪನ್ಯಾಡಿ, ವಿನೋದ್, ಸಿದ್ಧರಾಜು, ಚಂದ್ರಶೇಖರ್ ಮತ್ತಿತರರು ಇದ್ದರು.