ಮಡಿಕೇರಿ, ನ. 8: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಉಪಯೋಜನೆ ಕಾರ್ಯಕ್ರಮ ಪ್ರಗತಿ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಉಪ ಯೋಜನೆ ಕಾರ್ಯಕ್ರಮಗಳು ಪ್ರಗತಿ ಸಾಧಿಸಬೇಕು. ಈಗಾಗಲೇ ಬಿಡುಗಡೆಯಾಗಿರುವ ಅನುದಾನವನ್ನು ಕಾಲಮಿತಿಯಲ್ಲಿ ಸಮರ್ಪಕವಾಗಿ ಬಳಸುವಂತೆ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದರು.
ಎಸ್‍ಸಿಪಿ/ ಟಿಎಸ್‍ಪಿ ಯೋಜನೆ ಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಅದನ್ನು ಅರ್ಥ ಮಾಡಿ ಕೊಂಡು ಅರ್ಹರಿಗೆ ಯೋಜನೆಗಳನ್ನು ತಲಪಿಸಲು ಮುಂದಾಗುವಂತೆ ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು.
ಸಮಾಜ ಕಲ್ಯಾಣ ಇಲಾಖೆ ಸೇರಿದಂತೆ ಕೃಷಿ, ತೋಟಗಾರಿಕೆ, ಪಶುಪಾಲನೆ, ಮೀನುಗಾರಿಕೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಸಣ್ಣ ನೀರಾವರಿ, ವಸತಿ, ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ, ಜೊತೆಗೆ ನಿಗದಿಪಡಿಸಿರುವ ಅನುದಾನವನ್ನು ಪರಿಶಿಷ್ಟರಿಗೆ ತಲಪಿಸುವಂತೆ ಜಿಲ್ಲಾಧಿಕಾರಿ ಅವರು ಸೂಚಿಸಿದರು.
ಲೋಕೋಪಯೋಗಿ ಇಲಾಖೆ ವ್ಯಾಪ್ತಿಯ ಕಾರ್ಯಕ್ರಮಗಳಿಗೆ ಸಂಬಂಧಿಸಿದಂತೆ ಪರಿಶಿಷ್ಟರ ಕಾಲೋನಿಗಳಲ್ಲಿ ಅಗತ್ಯ ಮೂಲ ಸೌಲಭ್ಯ ಕಲ್ಪಿಸಲು ತುರ್ತಾಗಿ ಕ್ರಮ ಕೈಗೊಳ್ಳುವಂತೆ ಅವರು ಸೂಚಿಸಿದರು.
ನಗರ ಸ್ಥಳೀಯ ಸಂಸ್ಥೆಗಳಾದ ಮಡಿಕೇರಿ ನಗರಸಭೆ, ಮೂರು ಪಟ್ಟಣ ಪಂಚಾಯಿತಿಗಳಲ್ಲಿ ಪರಿಶಿಷ್ಟರಿಗೆ ನಿಗದಿಪಡಿಸಿರುವ ಅನುದಾನವನ್ನು ವಿನಿಯೋಗಿಸುವಂತೆ ಸೂಚಿಸ ಲಾಯಿತು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಉಪ ಯೋಜನೆಗೆ ಸಂಬಂಧಿಸಿದಂತೆ ನಾನಾ ಇಲಾಖೆಗಳು ಸರಿಯಾದ ಮಾಹಿತಿ ಒದಗಿಸಬೇಕು. ತಪ್ಪು ಮಾಹಿತಿ ನೀಡಿದ್ದಲ್ಲಿ ಮುಂದಿನ ಕ್ರಮವಹಿಸಬೇಕಾಗುತ್ತದೆ ಎಂದು ಅವರು ಎಚ್ಚರಿಕೆ ನೀಡಿದರು.
ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಭಾರತಿ, ಐಟಿಡಿಪಿ ಇಲಾಖಾ ಅಧಿಕಾರಿ ಶಿವಕುಮಾರ್ ಅವರು ತಮ್ಮ ತಮ್ಮ ಇಲಾಖೆ ವ್ಯಾಪ್ತಿಯ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು.
ಕೃಷಿ ಇಲಾಖೆ ಜಂಟಿ ನಿರ್ದೇಶಕ ರಾಜು ಕೃಷಿಭಾಗ್ಯ, ಕೃಷಿ ಪರಿಕರಗಳು, ಸಾವಯವ ಕೃಷಿ, ಮುಖ್ಯಮಂತ್ರಿ ಅವರ ಸೂಕ್ಷ್ಮ ನೀರಾವರಿ ಯೋಜನೆ, ಕೃಷಿ ವಿಸ್ತರಣೆ ಮತ್ತು ತರಬೇತಿ, ರಾಷ್ಟ್ರೀಯ ಕೃಷಿ ವಿಕಾಸ್ ಯೋಜನೆ, ರೈತರಿಗೆ ಸಹಾಯ, ಸಾವಯವ ಗೊಬ್ಬರ ಹೀಗೆ ಹಲವು ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕೆ. ಮೋಹನ್, ಪಶುಪಾಲನಾ ಇಲಾಖೆಯ ಉಪ ನಿರ್ದೇಶಕರಾದ ತಮ್ಮಯ್ಯ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ಕೆ.ರಾಧ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಮಚ್ಚಾಡೋ, ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಯ ಉಪ ನಿರ್ದೇಶಕರಾದ ಗೌರವ್ ಕುಮಾರ್, ಲೋಕೋಪಯೋಗಿ ಇಲಾಖೆಯ ಎಇಇ ಶಿವರಾಮ್, ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕರಾದ ರಾಘವೇಂದ್ರ, ಕೊಡಗು ವೈದ್ಯಕೀಯ ಕಾಲೇಜಿನ ಆಡಳಿತಾಧಿಕಾರಿ ಮೇರಿ ನಾಣಯ್ಯ, ಜಿ.ಪಂ. ವಸತಿ ವಿಭಾಗದ ಸಹಾಯಕ ನಿರ್ದೇಶಕರಾದ ಜಯಣ್ಣ, ಕೈಮಗ್ಗ ಮತ್ತು ಜವಳಿ ಇಲಾಖೆಯ ಸಹಾಯಕ ನಿರ್ದೇಶಕ ಗುರುಸ್ವಾಮಿ, ಪೌರಾಯುಕ್ತ ಎಂ.ಎಲ್. ರಮೇಶ್, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿಗಳಾದ ಶ್ರೀಧರ್ (ವೀರಾಜಪೇಟೆ), ಸುಜಯ್ ಕುಮಾರ್ (ಕುಶಾಲನಗರ), ನಟರಾಜು (ಸೋಮವಾರಪೇಟೆ), ಇತರರು ಇದ್ದರು.