ಕುಶಾಲನಗರ, ನ. 10: ಕುಶಾಲನಗರದಲ್ಲಿ ತಾ. 12 ರಂದು ಜೀವನದಿ ಕಾವೇರಿಗೆ 100ನೇ ಮಹಾ ಆರತಿ ಕಾರ್ಯಕ್ರಮ ಸಂಭ್ರಮ ನಡೆಯಲಿದೆ. ಕಾವೇರಿ ಮಹಾಆರತಿ ಬಳಗ, ಕಾವೇರಿ ರಿವರ್ ಸೇವಾ ಟ್ರಸ್ಟ್, ಶ್ರೀ ಅಯ್ಯಪ್ಪಸ್ವಾಮಿ ದೇವಾಲಯ ಮತ್ತು ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಪಟ್ಟಣದ ಶ್ರೀ ಅಯ್ಯಪ್ಪಸ್ವಾಮಿ ದೇವಾಲಯ ಬಳಿ ಕಾವೇರಿ ಆರತಿ ಕ್ಷೇತ್ರದಲ್ಲಿ ಅಂದು ಸಂಜೆ 4 ಗಂಟೆಗೆ ಪ್ರಾರಂಭಗೊಳ್ಳುವ ಧಾರ್ಮಿಕ ಕಾರ್ಯಕ್ರಮದಲ್ಲಿ ಅರೆಮಾದನಹಳ್ಳಿ ಶ್ರೀ ವಿಶ್ವಕರ್ಮ ಜಗದ್ಗುರು ಮಠದ ಶಿವಸುಜ್ಞಾನತೀರ್ಥ ಮಹಾಸ್ವಾಮಿಗಳು, ಅರಮೇರಿ ಕಳಂಚೇರಿ ಮಠದ ಶಾಂತಮಲ್ಲಿಕಾರ್ಜುನ ಸ್ವಾಮೀಜಿ, ಕಿರಿಕೊಡ್ಲಿ ಮಠದ ಸದಾಶಿವ ಸ್ವಾಮೀಜಿ, ತೊರೆನೂರು ವಿರಕ್ತ ಮಠದ ಮಲ್ಲೇಶ ಸ್ವಾಮೀಜಿ ದಿವ್ಯ ಸಾನಿಧ್ಯ ವಹಿಸಿ ಆಶೀರ್ವಚನ ನೀಡಲಿದ್ದಾರೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿಧಾನಪರಿಷತ್ ಸದಸ್ಯರಾದ ಸುನಿಲ್ ಸುಬ್ರಮಣಿ ವಹಿಸಲಿದ್ದು ಮಹಿಳಾ ಭಜನಾ ಮಂಡಳಿ ಸದಸ್ಯರಿಂದ ಭಜನೆ, ಕೀರ್ತನೆ ಕಾರ್ಯಕ್ರಮ ನಡೆಯಲಿದೆ ಎಂದು ಮಹಾ ಆರತಿ ಬಳಗದ ಪ್ರಕಟಣೆ ತಿಳಿಸಿದೆ.
ಇದೇ ಸಂದರ್ಭ ಕಾವೇರಿ ನದಿ ಸಂರಕ್ಷಣೆ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಜಿಲ್ಲೆಯ ವಿವಿಧೆಡೆ ಬೀದಿ ನಾಟಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕಾವೇರಿ ನದಿಗೆ 100ನೇ ಆರತಿ ನೆನಪಿಗಾಗಿ ನದಿ ತಟದಲ್ಲಿ 100 ಗಿಡಗಳನ್ನು ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುವದು.
ಸಂಜೆ 6 ರಿಂದ ಕಾವೇರಿಗೆ ವಿವಿಧ ರೀತಿಯ ಆರತಿ ಬೆಳಗುವ ಕಾರ್ಯಕ್ರಮಕ್ಕೆ ಪೂರ್ವ ತಯಾರಿ ನಡೆದಿದೆ ಎಂದು ಪ್ರಕಟಣೆ ತಿಳಿಸಿದೆ.