ಕುಶಾಲನಗರ, ನ. 10: ವಿದ್ಯಾರ್ಥಿಗಳ ಪ್ರತಿಭೆಗಳು ಎಲ್ಲೆಡೆ ರಾರಾಜಿಸಲು ಪ್ರತಿಯೊಬ್ಬರೂ ಸಹಕಾರ ನೀಡಬೇಕಿದೆ ಎಂದು ಸೋಮವಾರಪೇಟೆ ತಾಪಂ ಸದಸ್ಯೆ ಪುಷ್ಪ ಜನಾರ್ಧನ್ ಹೇಳಿದರು.

ಬಸವನಹಳ್ಳಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ನಡೆದ ಸೋಮವಾರಪೇಟೆ ತಾಲೂಕು ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಪ್ರತಿಯೊಬ್ಬ ವಿದ್ಯಾರ್ಥಿ ಕೂಡ ಪ್ರತಿಭಾವಂತರಾಗಿರುತ್ತಾರೆ. ಶಿಕ್ಷಣದೊಂದಿಗೆ ಅವರಲ್ಲಿನ ಕಲೆಯನ್ನು ಗುರುತಿಸಿ ಬೆಳಕಿಗೆ ತರಬೇಕಿದೆ. ಸೂಕ್ತ ಪ್ರೋತ್ಸಾಹದ ಮೂಲಕ ಕಲೆಯ ಅಭಿವೃದ್ಧಿಗೆ ಎಲ್ಲರೂ ಕೈಜೋಡಿಸಬೇಕಿದೆ. ವಿದ್ಯಾರ್ಥಿಗಳು ಕೂಡ ತಮಗೆ ದೊರೆತ ಸೌಲಭ್ಯ ಮತ್ತು ಸಹಕಾರವನ್ನು ಬಳಸಿಕೊಂಡು ರಾಷ್ಟ್ರಮಟ್ಟದಲ್ಲಿ ಸಾಧನೆ ತೋರುವಂತಾಗಬೇಕು ಎಂದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಕ್ಷೇತ್ರ ಶಿಕ್ಷಣಾಧಿಕಾರಿ ಮಂಜೇಶ್, ವಿದ್ಯಾರ್ಥಿಗಳಲ್ಲಿ ಅಡಗಿರುವ ಪ್ರತಿಭೆಗಳ ಅನಾವರಣಕ್ಕೆ ಶಿಕ್ಷಣ ಇಲಾಖೆ ಒದಗಿಸುವ ಅದ್ಭುತ ವೇದಿಕೆಯೇ ಈ ಪ್ರತಿಭಾ ಕಾರಂಜಿ. ವಿವಿಧ ಹಂತಗಳಲ್ಲಿ ನಡೆಯುವ ಪ್ರತಿಭಾ ಕಾರಂಜಿಯಲ್ಲಿ ವಿದ್ಯಾರ್ಥಿಗಳು ಹೊಣೆಗಾರಿಕೆಯಿಂದ ತಮ್ಮ ಪ್ರತಿಭೆಯನ್ನು ಸಮರ್ಪಕವಾಗಿ ಪ್ರದರ್ಶಿಸಿದಲ್ಲಿ ಉತ್ತಮ ಅವಕಾಶಗಳು ಲಭಿಸುತ್ತವೆ ಎಂದರು.

ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಂದ ನೃತ್ಯ, ಹಾಡುಗಾರಿಕೆ ಸೇರಿದಂತೆ ವಿವಿಧ ರೀತಿಯ ಸ್ಪರ್ಧಾ ಕಾರ್ಯಕ್ರಮಗಳು ಜರುಗಿದವು.

ಗುಡ್ಡೆಹೊಸೂರು ಗ್ರಾ.ಪಂ. ಅಧ್ಯಕ್ಷೆ ಭಾರತಿ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಸೋಮಶೇಖರ್, ತಾಲೂಕು ಅಧ್ಯಕ್ಷ ಧರ್ಮಪ್ಪ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಚೇತನ್, ತಾಲೂಕು ಅಧ್ಯಕ್ಷ ಎಚ್.ಎನ್.ಮಂಜುನಾಥ್, ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಕುಮಾರ್, ಪ್ರಮುಖರಾದ ಎಚ್.ಎಂ. ವೆಂಕಟೇಶ್, ನಾಗರಾಜ್, ವಸಂತ್, ಮೊರಾರ್ಜಿ ದೇಸಾಯಿ ಶಾಲೆಯ ಪ್ರಾಂಶುಪಾಲ ಚಂದ್ರಶೇಖರ್ ರೆಡ್ಡಿ ಮತ್ತಿತರರು ಇದ್ದರು.