ಮಡಿಕೇರಿ, ನ. 9: ಕರ್ನಾಟಕ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಕೊಡಗು ಜಿಲ್ಲಾ ಸಮಿತಿ, ನಗರದ ರೋಟರಿ ಮಿಸ್ಟಿ ಹಿಲ್ಸ್ ಹಾಗೂ ಕೂರ್ಗ್ ಸೈನ್ಸ್ ಅಂಡ್ ಎನ್ವಿರಾನ್‍ಮೆಂಟಲ್ ಫೌಂಡೇಶನ್ ಆಶ್ರಯದಲ್ಲಿ 27ನೇ ರಾಷ್ಟ್ರೀಯ ಮಕ್ಕಳ ವಿಜ್ಞಾನ ಸಮಾವೇಶ-2019 ಅಂಗವಾಗಿ ನಗರದ ರೋಟರಿ ಮಕ್ಕಳ ವಿಜ್ಞಾನ ಕೇಂದ್ರದಲ್ಲಿ ಏರ್ಪಡಿಸಿದ್ದ ಜಿಲ್ಲಾಮಟ್ಟದ ವಿಜ್ಞಾನ ಮಾರ್ಗದರ್ಶಿ ಶಿಕ್ಷಕರ ಕಾರ್ಯಾಗಾರದಲ್ಲಿ ರಾಜ್ಯ ಹಾಗೂ ರಾಷ್ಟ್ರೀಯ ಮಕ್ಕಳ ವಿಜ್ಞಾನ ಸ್ಪರ್ಧೆಯಲ್ಲಿ ರಾಜ್ಯಮಟ್ಟದ ಯುವ ವಿಜ್ಞಾನಿ ಪ್ರಶಸ್ತಿಗಳಿಸಿದ ವಿದ್ಯಾರ್ಥಿ ಹಾಗೂ ಜಿಲ್ಲೆಯ ಮೂರು ಬಾಲ ವಿಜ್ಞಾನಿಗಳನ್ನು ರಾಜ್ಯ ವಿಜ್ಞಾನ ಪರಿಷತ್ತು ಕೊಡಗು ಜಿಲ್ಲಾ ಸಮಿತಿ ವತಿಯಿಂದ ಸನ್ಮಾನಿಸಿ, ಗೌರವಿಸಲಾಯಿತು.
ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಶಿಕ್ಷಣ ಇಲಾಖೆ ಹಾಗೂ ರಾಜ್ಯ ವಿಜ್ಞಾನ ಪರಿಷತ್ತು ವತಿಯಿಂದ ಇತ್ತೀಚೆಗೆ ಬಳ್ಳಾರಿ ನಗರದಲ್ಲಿ ನಡೆದ ರಾಜ್ಯಮಟ್ಟದ ಯುವ ವಿಜ್ಞಾನಿಗಳ ಸಮಾವೇಶದಲ್ಲಿ ‘ಗುರುತ್ವಾಕರ್ಷಣೆ ಬಲದಿಂದ ವಿದ್ಯುತ್ ಉತ್ಪಾದನೆ’ ಕುರಿತು ವೈಜ್ಞಾನಿಕ ವಿವರಣೆಯೊಂದಿಗೆ ಉತ್ತಮ ವಿಜ್ಞಾನ ಮಾದರಿ ಪ್ರದರ್ಶಿಸಿ ರಾಜ್ಯಮಟ್ಟದ ಯುವ ವಿಜ್ಞಾನಿ ಪ್ರಶಸ್ತಿಗೆ ಭಾಜನರಾದ ನಗರದ ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯ 9ನೇ ತರಗತಿಯ ಬಿ.ಸಿ. ಅಭಿಜ್ಞಾನ್ ಎಂಬ ವಿದ್ಯಾರ್ಥಿಯನ್ನು ರೋಟರಿ ಮಿಸ್ಟಿ ಹಿಲ್ಸ್ ಅಧ್ಯಕ್ಷ ಎಂ.ಆರ್. ಜಗದೀಶ್ ಸನ್ಮಾನಿಸಿ, ಗೌರವಿಸಿದರು.
ರಾಷ್ಟ್ರೀಯ ವಿಜ್ಞಾನ ಮತ್ತು ತಂತ್ರಜ್ಞಾನ ಸಂವಹನ ಮಂಡಳಿ ವತಿಯಿಂದ “ಸ್ವಚ್ಛ, ಹಸಿರು ಮತ್ತು ಆರೋಗ್ಯವಂತ ರಾಷ್ಟ್ರಕ್ಕಾಗಿ ವಿಜ್ಞಾನ, ತಂತ್ರಜ್ಞಾನ ಮತ್ತು ಆವಿಷ್ಕಾರಗಳು” ಎಂಬ ಕೇಂದ್ರ ವಿಷಯದಡಿ ಒರಿಸ್ಸಾದ ಭುವನೇಶ್ವರಿ ನಗರದಲ್ಲಿ ಕಳೆದ ಸಾಲಿನಲ್ಲಿ ಜರುಗಿದ 26ನೇ ರಾಷ್ಟ್ರೀಯ ಮಕ್ಕಳ ವಿಜ್ಞಾನ ಸಮಾವೇಶದಲ್ಲಿ ‘ಕಣ್ಮರೆಯಾಗುತ್ತಿರುವ ಜಿಲ್ಲೆಯ ಝರಿ ತೊರೆಗಳು ಪರಿಸರ ವ್ಯವಸ್ಥೆಗೆ ಮಾರಕ’ ಎಂಬ ವಿಷಯದ ಕುರಿತು ವೈಜ್ಞಾನಿಕ ಪ್ರಬಂಧ ಮಂಡಿಸಿದ ನಗರದ ಭಾರತೀಯ ವಿದ್ಯಾಭವನ ಕೊಡಗು ವಿದ್ಯಾಲಯದ ಲೇಖನ ಮುತ್ತಕ್ಕ ಹಾಗೂ ‘ಆಧುನಿಕ ಜೀವನ ಶೈಲಿಯ ಕೊಡುಗೆಯೇ ಅನಾರೋಗ್ಯಕರ ಬದುಕಿಗೆ ಕಾರಣ’ ಎಂಬ ವಿಷಯ ಕುರಿತು ಪ್ರಬಂಧ ಮಂಡಿಸಿದ ಇದೇ ಶಾಲೆಯ ಎನ್.ಎನ್. ನಿರುತ್ ಹಾಗೂ ಮಾರ್ಗದರ್ಶಿ ಶಿಕ್ಷಕಿ ಇಶ್ರತ್ ಅವರನ್ನು ನಗರದ ರೋಟರಿ ಕ್ಲಬ್‍ನ ಅಧ್ಯಕ್ಷ ರತನ್ ತಮ್ಮಯ್ಯ ಸನ್ಮಾನಿಸಿ, ಅಭಿನಂದಿಸಿದರು.
ರಾಷ್ಟ್ರೀಯ ಮಕ್ಕಳ ವಿಜ್ಞಾನ ಸಮಾವೇಶದಲ್ಲಿ ತ್ಯಾಜ್ಯದಿಂದ ಸಂಪತ್ತು - ಜೈವಿಕ ಪ್ಲಾಸ್ಟಿಕ್ ಬಳಕೆ ಕುರಿತು ವೈಜ್ಞಾನಿಕ ಪ್ರಬಂಧ ಮಂಡಿಸಿದ ಕೂಡಿಗೆಯ ಅಂಜೆಲಾ ವಿದ್ಯಾನಿಕೇತನ ಶಾಲೆಯ ಹೆಚ್.ಎಸ್. ತೇಜನಾ ಪರವಾಗಿ ತಂಡದ ಸದಸ್ಯೆ ಎಸ್.ಡಿ. ಲೇಖನ ಎಂಬ ಬಾಲ ವಿಜ್ಞಾನಿಯನ್ನು ಜಿಲ್ಲಾ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಉಪಾಧ್ಯಕ್ಷ ಕೆ.ಟಿ. ಬೇಬಿ ಮ್ಯಾಥ್ಯೂ ಸನ್ಮಾನಿಸಿ, ಗೌರವಿಸಿದರು.
ವಿಜ್ಞಾನ ಕಾರ್ಯಕ್ರಮದ ಸಂಘಟಕರೂ ಆದ ವಿಜ್ಞಾನ ಪರಿಷತ್ತಿನ ಜಿಲ್ಲಾ ಸಮಿತಿ ಕಾರ್ಯದರ್ಶಿ ಟಿ.ಜಿ. ಪ್ರೇಮಕುಮಾರ್, ರಾಷ್ಟ್ರೀಯ ಮಕ್ಕಳ ವಿಜ್ಞಾನ ಸಮಾವೇಶವು ಮಕ್ಕಳು ತಮ್ಮ ಸುತ್ತಮುತ್ತಲಿನ ಪರಿಸರದಲ್ಲಿ ಮಾಹಿತಿ ಸಂಗ್ರಹಿಸಿ, ವಿಶ್ಲೇಷಿಸಿ ವೈಜ್ಞಾನಿಕ ಯೋಜನೆ ತಯಾರಿಸುವ ಮೂಲಕ ವಿದ್ಯಾರ್ಥಿಗಳಲ್ಲಿ ಅನ್ವೇಷಣೆಯ ಸ್ವಭಾವ ಹಾಗೂ ಸಂಶೋಧನಾ ಪ್ರವೃತ್ತಿ ಬೆಳೆಸಲು ನೆರವಾಗಿದೆ ಎಂದರು.
ಕೆ.ಟಿ. ಬೇಬಿ ಮ್ಯಾಥ್ಯೂ ಮಾತನಾಡಿ, ರಾಷ್ಟ್ರೀಯ ಮಕ್ಕಳ ವಿಜ್ಞಾನ ಸಮಾವೇಶದಲ್ಲಿ ಪ್ರತಿ ವರ್ಷ ಕೊಡಗಿನ ಮಕ್ಕಳು ಭಾಗವಹಿಸಿ ಬಾಲ ವಿಜ್ಞಾನಿಗಳಾಗಿ ಹೊರಹೊಮ್ಮುತ್ತಿರುವದು ಹೆಮ್ಮೆಯ ಸಂಗತಿ. ಇದಕ್ಕೆ ಕಾರಣರಾದ ಮಾರ್ಗದರ್ಶಿ ಶಿಕ್ಷಕರ ಶ್ರಮ ಶ್ಲಾಘನೀಯವಾದುದು ಎಂದರು.
ಜಿಲ್ಲಾ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಆಯುಕ್ತ ಜಿಮ್ಮಿ ಸಿಕ್ವೇರಾ, ವಿಜ್ಞಾನ ಪರಿಷತ್ತಿನ ಜಿಲ್ಲಾ ಸಮಿತಿ ಮಾಜಿ ಉಪಾಧ್ಯಕ್ಷೆ ಡಿ.ಎಂ. ರೇವತಿ, ಸಮಾವೇಶದ ಜಿಲ್ಲಾ ಸಂಯೋಜಕ ಜಿ.ಶ್ರೀಹರ್ಷ, ಜಿಲ್ಲಾ ಶೈಕ್ಷಣಿಕ ಸಂಯೋಜಕ ಎಂ.ಎನ್. ವೆಂಕಟನಾಯಕ್ , ಕೊಡಗು ವಿದ್ಯಾಲಯದ ಮಾರ್ಗದರ್ಶಿ ಶಿಕ್ಷಕಿ ಪೊನ್ನಮ್ಮ ಇದ್ದರು.