ಒಡೆಯನಪುರ, ನ. 13: ಕನ್ನಡ ರಾಜ್ಯೋತ್ಸವ ಪ್ರಯುಕ್ತ ಶನಿವಾರಸಂತೆ ಹೋಬಳಿ ಜಾನಪದ ಪರಿಷತ್, ಸ್ಥಳೀಯ ಸುಪ್ರಜ ಗುರುಕುಲ ಆಂಗ್ಲ ಮಾಧ್ಯಮ ವಿದ್ಯಾಸಂಸ್ಥೆ ಸಂಯುಕ್ತ ಆಶ್ರಯದಲ್ಲಿ ಸುಪ್ರಜ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಕನ್ನಡ ಭಾಷೆ, ಸಾಹಿತ್ಯ, ಸಂಸ್ಕøತಿ, ನಾಡು-ನುಡಿ ನೆಲ, ಜಲ, ಸ್ಥಳೀಯ ವಿಶೇಷತೆ ಕುರಿತಾಗಿ ಅರಿವು ಮೂಡಿಸುವ ಉದ್ದೇಶದಿಂದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ತಾಲೂಕು ಮಟ್ಟದ ಕನ್ನಡ ರಸಪ್ರಶ್ನೆ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿತ್ತು. ಸ್ಪರ್ಧೆಯಲ್ಲಿ ತಾಲೂಕಿನ ವಿವಿಧ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗದ ಮಕ್ಕಳು ಪಾಲ್ಗೊಂಡಿದ್ದರು.

ಪ್ರಾಥಮಿಕ ಶಾಲಾ ವಿಭಾಗಕ್ಕೆ ನಡೆದ ಕನ್ನಡ ರಸಪ್ರಶ್ನೆ ಸ್ಪರ್ಧೆಯಲ್ಲಿ ಸುಪ್ರಜ ಗುರುಕುಲ ಪ್ರಾಥಮಿಕ ಶಾಲಾ ತಂಡ ಪ್ರಥಮ ಸ್ಥಾನ ಪಡೆದುಕೊಂಡಿತು. ಶನಿವಾರಸಂತೆ ವಿಘ್ನೇಶ್ವರ ವಿದ್ಯಾಸಂಸ್ಥೆಯ ಗೋಲ್ಡನ್ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಯ ತಂಡ ದ್ವಿತೀಯ ಸ್ಥಾನ ಪಡೆದುಕೊಂಡರೆ ಶನಿವಾರಸಂತೆ ಕಾವೇರಿ ವಿದ್ಯಾಸಂಸ್ಥೆಯ ಪ್ರಾಥಮಿಕ ಶಾಲಾ ತಂಡ ತೃತೀಯ ಸ್ಥಾನ ಪಡೆದುಕೊಂಡಿತು.

ಪ್ರೌಢಶಾಲಾ ವಿಭಾಗದಲ್ಲಿ ಮಸಗೋಡು ಚೆನ್ನಮ್ಮ ಪ್ರೌಢಶಾಲಾ ತಂಡದ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದುಕೊಂಡರು. ಶನಿವಾರಸಂತೆ ವಿಘ್ನೇಶ್ವರ ಬಾಲಕಿಯರ ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿನಿಯರ ತಂಡ ದ್ವಿತೀಯ ಸ್ಥಾನ ಪಡೆದುಕೊಂಡರೆ, ಸುಪ್ರಜ ಗುರುಕುಲ ಪ್ರೌಢಶಾಲಾ ವಿಭಾಗದ ತಂಡ ತೃತೀಯ ಸ್ಥಾನ ಪಡೆದು ಕೊಂಡಿತು. ರಸಪ್ರಶ್ನೆ ಸ್ಪರ್ಧಾ ವಿಜೇತರಿಗೆ ತಾ. 14 ರಂದು ಮಕ್ಕಳ ದಿನಾಚರಣೆ ಪ್ರಯುಕ್ತ ಸುಪ್ರಜ ಗುರುಕುಲ ಶಾಲೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಬಹುಮಾನ ವಿತರಿಸಲಾಗುವದೆಂದು ವಿದ್ಯಾಸಂಸ್ಥೆ ಟ್ರಸ್ಟಿ ಡಿ. ಸುಜಲಾದೇವಿ ತಿಳಿಸಿದರು. ಈ ಸಂದರ್ಭ ವಿದ್ಯಾಸಂಸ್ಥೆ ಕಾರ್ಯದರ್ಶಿ ಎನ್.ಟಿ. ಗುರುಪ್ರಸಾದ್, ಜಾನಪದ ಪರಿಷತ್ ನಿರ್ದೇಶಕ ಸರ್ಪ್‍ರಾಜ್ ಅಹಮದ್ ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು.