ಮಡಿಕೇರಿ, ನ. 23: ವಿಧಾನ ಪರಿಷತ್ ಸದಸ್ಯ ಎಂ.ಪಿ. ಸುನಿಲ್ ಸುಬ್ರಮಣಿ ನಗರದ ಕಂದಾಯ ನಿರೀಕ್ಷಕರ ಕಚೇರಿಗೆ ಭೇಟಿ ನೀಡಿ ಪರಿಶೀಲಿಸಿದರು. ಕಂದಾಯ ನಿರೀಕ್ಷಕರ ಕಚೇರಿ ವಾರ್ತಾ ಭವನ ಬಳಿಯ ಪ್ರವಾಸೋದ್ಯಮ ಇಲಾಖೆ ಕಚೇರಿಯಲ್ಲಿದ್ದು, ನಗರದಿಂದ ದೂರದಲ್ಲಿದ್ದು, ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ ಎಂಬ ದೂರುಗಳು ಕೇಳಿಬರುತ್ತಿರುವ ಹಿನ್ನೆಲೆ ವಿಧಾನ ಪರಿಷತ್ ಸದಸ್ಯರು ಭೇಟಿ ನೀಡಿ ಮಾಹಿತಿ ಪಡೆದರು.
ಕಂದಾಯ ನಿರೀಕ್ಷರ ಕಚೇರಿಯ ಸಿಬ್ಬಂದಿಗಳು ಸಾರ್ವಜನಿಕರಿಗೆ ಸ್ಪಂದಿಸುವ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸುವಂತೆ ಸೂಚಿಸಿದರು. ಜಾತಿ, ಆದಾಯ, ಆರ್‍ಟಿಸಿ ಸೇರಿದಂತೆ ಭೂ ದಾಖಲೆಗಳಿಗಾಗಿ ಸಾರ್ವಜನಿಕರು ಕಂದಾಯ ಇಲಾಖೆಯನ್ನು ಅವಲಂಭಿಸಿದ್ದಾರೆ. ಆದ್ದರಿಂದ ಕಂದಾಯ ನಿರೀಕ್ಷಕರು ಮತ್ತು ನಾಡ ಕಚೇರಿಯ ಸಿಬ್ಬಂದಿಗಳು ಸಾರ್ವಜನಿಕರನ್ನು ಸತಾಯಿಸದೆ, ಸಕಾಲದಲ್ಲಿ ಕೆಲಸ ಮಾಡಿಕೊಡಬೇಕು ಎಂದು ಸೂಚಿಸಿದರು. ಈ ಸಂದರ್ಭ ಕಂದಾಯ ನಿರೀಕ್ಷಕ ಶಿವಕುಮಾರ್ ಇತರರು ಇದ್ದರು. ಇದೇ ಸಂದರ್ಭ ಪ್ರವಾಸೋದ್ಯಮ ಇಲಾಖೆ ಕಚೇರಿಗೆ ಭೇಟಿ ನೀಡಿದ ಸುನಿಲ್ ಸುಬ್ರಮಣಿ, ಜಿಲ್ಲೆಯ ಪ್ರವಾಸೋದ್ಯಮ ಅಭಿವೃದ್ಧಿಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಯವರ ಮೂಲಕ ಅಗತ್ಯ ಪ್ರಸ್ತಾವನೆ ಸಲ್ಲಿಸುವಂತೆ ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕರಿಗೆ ಸೂಚಿಸಿದರು. ಈಗಾಗಲೇ ಪ್ರಸ್ತಾವನೆ ಸಲ್ಲಿಸ ಲಾಗಿರುವ ರಾಜಾಸೀಟು ಸೇರಿದಂತೆ ವಿವಿಧ ಪ್ರವಾಸಿ ತಾಣಗಳಲ್ಲಿ ಮೂಲ ಸೌಲಭ್ಯ ಕಲ್ಪಿಸಲು ಪ್ರಸ್ತಾವನೆ ಸಲ್ಲಿಸಿರುವದಕ್ಕೆ ಅನುಮೋದನೆ ದೊರೆತಿದೆಯೇ ಎಂದು ಮಾಹಿತಿ ಪಡೆದರು.
ಪ್ರವಾಸೋದ್ಯಮ ಅಭಿವೃದ್ಧಿಗೆ ಸಂಬಂಧಿಸಿದಂತೆ ಪ್ರಸ್ತಾವನೆ ಸಲ್ಲಿಸಿರುವ ಹಾಗೂ ಬಾಕಿ ಇರುವ ಕಾಮಗಾರಿಗಳ ಸಂಬಂಧ ಮಾಹಿತಿ ಒದಗಿಸುವಂತೆ ಸೂಚಿಸಿದರು. ಪ್ರವಾಸೋದ್ಯಮ ಇಲಾಖೆ ಅಧಿಕಾರಿ ರಾಘವೇಂದ್ರ ಕೆಲವು ಪ್ರಸ್ತಾವನೆಗೆ ಈಗಾಗಲೇ ಅನುಮೋದನೆ ದೊರೆತಿದೆ. ಹೊಸ ಪ್ರಸ್ತಾವನೆ ಈಗಾಗಲೇ ಕಳುಹಿಸಿಕೊಡಲಾಗಿದೆ ಎಂದು ಮಾಹಿತಿ ನೀಡಿದರು.
ಈ ಸಂದರ್ಭ 2017-18ನೇ ಸಾಲಿನ ಪ್ರವಾಸಿ ಟ್ಯಾಕ್ಸಿ ಯೋಜನೆಯಡಿ ಪ್ರವಾಸಿ ಟ್ಯಾಕ್ಸಿಯ ಕೀಯನ್ನು ವಿಧಾನ ಪರಿಷತ್ ಸದಸ್ಯರು ಅರ್ಹರಿಗೆ ವಿತರಿಸಿದರು. ಪ್ರವಾಸೋದ್ಯಮ ಕಚೇರಿಯ ಚೇತನ್ ಇತರರು ಇದ್ದರು.