ಮಡಿಕೇರಿ, ಡಿ. 8: ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿ, ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ, ರಾಷ್ಟ್ರೀಯ ಹಸಿರು ಪಡೆ ಹಾಗೂ ವಿಜ್ಞಾನ ಪರಿಷತ್ ಜಿಲ್ಲಾ ಸಮಿತಿ, ಜನರಲ್ ತಿಮ್ಮಯ್ಯ ಪಬ್ಲಿಕ್ ಸ್ಕೂಲ್ ಹಾಗೂ ಕೂರ್ಗ್ ಸೈನ್ಸ್ ಅಂಡ್ ಎನ್ವಿರಾನ್‍ಮೆಂಟ್ ಫೌಂಡೇಶನ್ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾಮಟ್ಟದ 27ನೇ ರಾಷ್ಟ್ರೀಯ ಮಕ್ಕಳ ವಿಜ್ಞಾನ ಸಮಾವೇಶ ಹಾಗೂ ಸ್ವಚ್ಛ, ಹಸಿರು ಮತ್ತು ಪರಿಸರ ಜಾಗೃತಿ ಕಾರ್ಯಕ್ರಮ ನಗರದ ಜನರಲ್ ತಿಮ್ಮಯ್ಯ ಪಬ್ಲಿಕ್ ಸ್ಕೂಲ್‍ನಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಜಿ.ಪಂ. ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್, ವಿಜ್ಞಾನ ವಿಷಯದಲ್ಲಿ ಆಸಕ್ತಿ ಮತ್ತು ಕುತೂಹಲ ಇರಬೇಕು. ಕಲಿಕೆಯ ಜೊತೆಗೆ ವಿಜ್ಞಾನ ವಿಷಯ ಹೆಚ್ಚಾಗಿ ತಿಳಿಯುವದರ ಮೂಲಕ ಹೊಸ ಹೊಸ ಆವಿಷ್ಕಾರ ಕೈಗೊಳ್ಳಬೇಕು ಎಂದರು.

ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಮಾತನಾಡಿ, ವಿದ್ಯಾರ್ಥಿಗಳು ವಿಜ್ಞಾನ ಸಮಾವೇಶ ಕಾರ್ಯಕ್ರಮ ಗಳಲ್ಲಿ ಪಾಲ್ಗೊಳ್ಳಬೇಕು. ಹಿಂಜರಿಕೆ ಬಿಡಬೇಕು. ಅವಕಾಶಗಳನ್ನು ಸರಿಯಾಗಿ ಬಳಸಿಕೊಂಡು ಸ್ಪರ್ಧೆ ಮಾಡಬೇಕು ಎಂದು ಹೇಳಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಡಾ. ಸ್ನೇಹ ಮಾತನಾಡಿ, ಮಕ್ಕಳು ಯಾವ ವಿಷಯದಲ್ಲಿ ಹೆಚ್ಚು ಆಸಕ್ತಿ ಹೊಂದಿದ್ದಾರೆ ಎಂಬದನ್ನು ಗುರುತಿಸಿ ಅವರನ್ನು ಪ್ರೋತ್ಸಾಹಿಸುವ ಕೆಲಸ ಶಿಕ್ಷಕರು ಮತ್ತು ಪೋಷಕರದ್ದಾಗಿದೆ ಎಂದು ಹೇಳಿದರು.

ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯ ಅಧ್ಯಕ್ಷ ಕೆ.ಎಸ್. ದೇವಯ್ಯ ಮಾತನಾಡಿ, ವಿದ್ಯಾರ್ಥಿಗಳು ದಿನ ನಿತ್ಯವೂ ಕ್ರೀಯಾಶೀಲ ಚಟುವಟಿಕೆ ಯಲ್ಲಿ ತೊಡಗಿಸಿಕೊಳ್ಳಿ ಎಂದು ಹೇಳಿದರು.

ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಪಿ.ಎಸ್. ಮಚ್ಚಾಡೋ ವಿದ್ಯಾರ್ಥಿಗಳು ಕಲಿಕೆಯ ಜೊತೆಗೆ ಕ್ರಿಯಾಶೀಲ ಅನ್ವೇಷನೆಯನ್ನು ಮಾಡುತ್ತಾ ಭೌದ್ಧಿಕ ಆಸಕ್ತಿಯನ್ನು ಹೆಚ್ಚಿಸಿಕೊಳ್ಳುವಂತಾಗಬೇಕು ಎಂದರು. ಜಿಲ್ಲಾ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಉಪಾಧ್ಯಕ್ಷ ಕೆ.ಟಿ. ಬೇಬಿ ಮ್ಯಾಥ್ಯೂ ಮಾತನಾಡಿ, ಪ್ರತಿಯೊಬ್ಬ ವಿದ್ಯಾರ್ಥಿಯು ಹೊಸ ಅನ್ವೇಷನೆಯನ್ನು ಮಾಡುತ್ತಿದ್ದಾರೆ ಎಂದು ಹೇಳಿದರು.

ವಿಜ್ಞಾನ ಸಮಾವೇಶದ ಕಾರ್ಯದರ್ಶಿ ಟಿ.ಜಿ. ಪ್ರೇಮ್ ಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಎನ್. ಗಾಯಿತ್ರಿ ಮಾತನಾಡಿದರು. ಸ್ವಚ್ಛ ಹಸಿರು ಪರಿಸರ ಆಂದೋಲನಕ್ಕೆ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಚಾಲನೆ ನೀಡಿದರು. ಕೇಂದ್ರೀಯ ವಿದ್ಯಾಲಯ ವಿದ್ಯಾರ್ಥಿಗಳು ಅನ್ವೇಷಿಸಿದ ಯೋಜನಾ ಕಾರ್ಯ ಪ್ರದರ್ಶಿಸಿದರು. ಸ್ಕೌಟ್ಸ್ ಮತ್ತು ಗೈಡ್ಸ್ ಆಯುಕ್ತ ಜಿಮ್ಮಿ ಸಿಕ್ವೇರಾ, ಜನರಲ್ ತಿಮ್ಮಯ್ಯ ಪಬ್ಲಿಕ್ ಸ್ಕೂಲ್ ಪ್ರಾಂಶುಪಾಲೆ ಬಿ.ಎಂ. ಸರಸ್ವತಿ, ಕಾರ್ಯಾಧ್ಯಕ್ಷ ಸಿ.ಡಿ. ಕಾಳಪ್ಪ, ಜಿಲ್ಲಾ ಲೀಡ್ ಬ್ಯಾಂಕ್ ವ್ಯವಸ್ಥಾಪಕ ಆರ್.ಕೆ. ಬಾಲಚಂದ್ರ ಮತ್ತಿತರರು ಇದ್ದರು. ಡಿಯಾನ ನವೀನ್ ತಂಡ ಪ್ರಾರ್ಥಿಸಿ, ಜೆ. ಶ್ರೀಹರ್ಷ ಸ್ವಾಗತಿಸಿ, ಎಂ.ಎನ್. ವೆಂಕಟ ನಾಯಕ್ ನಿರೂಪಿಸಿದರು.