ಸೋಮವಾರಪೇಟೆ,ಡಿ.8: ‘ವಿಶೇಷಚೇತನರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಸರ್ಕಾರ ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ಫಲಾನುಭವಿಗಳು ತಾಲೂಕು ಕಾನೂನು ಸೇವಾ ಸಮಿತಿಗೆ ಅರ್ಜಿ ಸಲ್ಲಿಸಿ; ಸೌಲಭ್ಯ ದೊರಕಿಸಿಕೊಡುತ್ತೇವೆ’ ಎಂದು ಇಲ್ಲಿನ ನ್ಯಾಯಾಲಯದ ಹಿರಿಯ ಸಿವಿಲ್ ನ್ಯಾಯಾಧೀಶ ಶಿವಪುತ್ರ ಎಸ್. ದಿಂಡಲಕೊಪ್ಪ ಸಲಹೆ ನೀಡಿದರು.
ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ವಿಶೇಷಚೇತನರ ಸಂಘದ ವತಿಯಿಂದ ಚನ್ನಬಸಪ್ಪ ಸಭಾಂಗಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಪ್ರಧಾನ ಸಿವಿಲ್ ನ್ಯಾಯಾಧೀಶೆ ಪ್ರತಿಭಾ ಮಾತನಾಡಿ, ಸಾಧನೆಗೆ ಅಂಗವೈಕಲ್ಯ ಅಡ್ಡಿಯಾಗುವದಿಲ್ಲ. ತಮ್ಮಲ್ಲಿರುವ ಪ್ರತಿಭೆಗಳನ್ನು ಹೊರಜಗತ್ತಿಗೆ ತೋರ್ಪಡಿಸುವಂತಾಗಬೇಕು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಕೀಲರ ಸಂಘದ ಅಧ್ಯಕ್ಷ ಡಿ.ಕೆ. ತಿಮ್ಮಯ್ಯ ವಹಿಸಿದ್ದರು. ವೇದಿಕೆಯಲ್ಲಿ ತಾಲೂಕು ವಿಶೇಷ ಚೇತನರ ಸಂಘದ ಅಧ್ಯಕ್ಷ ಸಂಗಮೇಶ್, ಸ.ಪ.ಪೂ. ಕಾಲೇಜು ಪ್ರಾಂಶುಪಾಲ ಚಂದ್ರಶೇಖರ್, ವಕೀಲ ಎಸ್.ಎಸ್. ಮನೋಹರ್, ಶಿಶು ಅಭಿವೃದ್ಧಿ ಇಲಾಖೆಯ ಅಣ್ಣಯ್ಯ, ನ್ಯಾಯಾಲಯದ ಸಿಬ್ಬಂದಿ ಸೇರಿದಂತೆ ಇತರರು ಉಪಸ್ಥಿತರಿದ್ದರು.