ಕೂಡಿಗೆ, ಡಿ. 28: ಮುಳ್ಳುಸೋಗೆ ಗ್ರಾ.ಪಂ ಮಾಸಿಕ ಸಭೆಯು ಗ್ರಾ.ಪಂ. ಅಧ್ಯಕ್ಷೆ ಭವ್ಯ ಅಧ್ಯಕ್ಷತೆಯಲ್ಲಿ ನಡೆಯಿತು.

ಮುಳ್ಳುಸೋಗೆ ಗ್ರಾ.ಪಂ. ಆವರಣದಲ್ಲಿ ನಡೆದ ಸಭೆಯಲ್ಲಿ ಮೊದಲಿಗೆ ಹದಿನಾಲ್ಕನೇ ಹಣಕಾಸಿನ ಯೋಜನೆಯ ಕಾಮಗಾರಿ ಕೈಗೊಳ್ಳುವ ಬಗ್ಗೆ ಸುದೀರ್ಘ ಚರ್ಚೆ ನಡೆದವು. ನಂತರ ಗ್ರಾ.ಪಂ. ವ್ಯಾಪ್ತಿಯ ಎಲ್ಲ್ಲ ಗ್ರಾಮಗಳಿಗೆ ಉಪರಸ್ತೆಗಳ ಕ್ರಿಯಾಯೋಜನೆ ಮತ್ತು ಗೊಂದಿಬಸವನಹಳ್ಳಿ ರಸ್ತೆಯ ಅಭಿವೃದ್ಧಿ ಹಾಗೂ ನಿವೇಶನ ರಹಿತರಿಗೆ ನಿವೇಶನ ನೀಡುವ ಬಗ್ಗೆ ಚರ್ಚಿಸಲಾಯಿತು. ಮುಂದಿನ ದಿನಗಳಲ್ಲಿ ಮೇಲಾಧಿಕಾರಿಗಳೊಂದಿಗೆ ಚರ್ಚಿಸಿ ವಸತಿ ರಹಿತರಿಗೆ ಹಾಗೂ ಪ್ರಕೃತಿ ವಿಕೋಪದಿಂದ ಹಾನಿಗೊಳಗಾದ ಸಂತ್ರಸ್ತರಿಗೆ ನಿವೇಶನ ನೀಡುವ ಬಗ್ಗೆ ಸರ್ವ ಸದಸ್ಯರು ಒಕ್ಕೊರಲಿನಿಂದ ತೀರ್ಮಾನ ಕೈಗೊಳ್ಳಲಾಯಿತು.

ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ರಾಜಶೇಖರ್ ಮಾತನಾಡಿ, ಗ್ರಾ.ಪಂ. ವ್ಯಾಪ್ತಿಯಲ್ಲಿ ಹೆಚ್ಚಿನ ಕಾಮಗಾರಿಗಳನ್ನು ಕೈಗೊಳ್ಳಲು ರಾಷ್ಟ್ರೀಯ ಉದ್ಯೋಗಖಾತ್ರಿ ಯೋಜನೆಗೆ ಗ್ರಾಮಸ್ಥರು, ಹೆಸರು ನೋಂದಾಯಿಸಿಕೊಳ್ಳುವ ಬಗ್ಗೆ ಗ್ರಾಮಸ್ಥರಿಗೆ ತಿಳುವಳಿಕೆ ನೀಡುವ ಮೂಲಕ ಗ್ರಾಮದ ಅಭಿವೃದ್ಧಿ ಕಾಮಗಾರಿಗಳನ್ನು ನಡೆಸಲು ಸಹಕರಿಸಬೇಕು ಎಂದು ತಿಳಿಸಿದರು.

ಈ ಸಂದರ್ಭ ಗ್ರಾ.ಪಂ. ಉಪಾಧ್ಯಕ್ಷ ತಾರಾನಾಥ್, ಸದಸ್ಯರು ಹಾಗೂ ಇನ್ನಿತರರು ಉಪಸ್ಥಿತರಿದ್ದರು.