ಗೋಣಿಕೊಪ್ಪ ವರದಿ, ಡಿ. 30: ಬಾಳೆಲೆ ಸಮುದಾಯ ಆರೋಗ್ಯ ಕೇಂದ್ರ ಅವರಣದಲ್ಲಿ ನಿರ್ಮಿಸಲು ಉದ್ದೇಶಿರುವ ಬಾಳೆಲೆ ಹೋಬಳಿ ಕಂದಾಯ ಕಚೇರಿ ನಿರ್ಮಾಣಕ್ಕೆ ವಿರೋಧ ವ್ಯಕ್ತಪಡಿಸಿರುವ ಸ್ಥಳೀಯರು, ಪಟ್ಟಣಕ್ಕೆ ಹೊಂದಿಕೊಂಡಂತಿರುವ ಕಂದಾಯ ಇಲಾಖೆ ಜಾಗದಲ್ಲಿ ಕಟ್ಟಡ ನಿರ್ಮಿಸುವಂತೆ ಒತ್ತಾಯಿಸಿದರು.

ಸೋಮವಾರ ಬಾಳೆಲೆ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಆಯೋಜಿಸಿದ್ದ ಸಾರ್ವಜನಿಕ ಸಭೆಯಲ್ಲಿ ಈ ಬಗ್ಗೆ ವಿರೋಧ ವ್ಯಕ್ತಪಡಿಸಿರುವ ಸ್ಥಳೀಯರು ಪಟ್ಟಣದಲ್ಲಿರುವ ಕಂದಾಯ ಇಲಾಖೆ ಜಾಗದಲ್ಲಿ ನಿರ್ಮಿಸಬೇಕು ಎಂದು ಒತ್ತಾಯಿಸಿದರು.

ಆಸ್ಪತ್ರೆ ಆವರಣದಲ್ಲಿ ನಿರ್ಮಿಸುವುದರಿಂದ ರೋಗಿಗಳಿಗೆ ತೊಂದರೆಯಾಗಲಿದೆ. ನಿತ್ಯ ನೂರಾರು ಜನರು ಕಚೇರಿಗೆ ಬರಬೇಕು. ಪಟ್ಟಣದಿಂದ ಸ್ವಲ್ಪ ದೂರದಲ್ಲಿ ಆಸ್ಪತ್ರೆ ಇರುವುದರಿಂದ ತಲುಪಲು ಕೂಡ ಕಷ್ಟವಾಗಲಿದೆ. ಪ್ರಸ್ತುತ ಕಾರ್ಯ ನಿರ್ವಹಿಸುತ್ತಿರುವ ಕಂದಾಯ ಇಲಾಖೆ ಕಚೇರಿ ಜಾಗದಲ್ಲಿಯೇ ನಿರ್ಮಿಸಬೇಕು ಎಂದು ಪಟ್ಟು ಹಿಡಿದರು.

40 ಲಕ್ಷ ಅನುದಾನವು ಈಗಾಗಲೇ ನಿರ್ಮಿತಿ ಕೇಂದ್ರ ಕಟ್ಟಡ ನಿರ್ಮಾಣಕ್ಕೆ ನೀಡಲಾಗಿದೆ. ಕಟ್ಟಡ ನಿರ್ಮಿಸಿದ ನಂತರ ಸಾರ್ವಜನಿಕರಿಗೆ ಹೆಚ್ಚು ತೊಂದರೆ ಎಂಬವದನ್ನು ಜಿಲ್ಲಾಡಳಿತ ಪರಿಗಣನೆಗೆ ತೆಗೆದು ಕೊಳ್ಳಬೇಕು ಎಂದು ಒತ್ತಾಯಿಸಿದರು.

ಸ್ಥಳೀಯ ಸಂಘ-ಸಂಸ್ಥೆ ಪ್ರಮುಖರು, ಜನಪ್ರತಿನಿಧಿಗಳು, ಸಾರ್ವಜನಿಕರು ಸಭೆಯಲ್ಲಿ ಪಾಲ್ಗೊಂಡು ಆಸ್ಪತ್ರೆ ಆವರಣದಲ್ಲಿ ನಿರ್ಮಿಸುವುದನ್ನು ಕೈಬಿಡುವಂತೆ ಒತ್ತಾಯಿಸಿದರು.

ಸಭೆಯಲ್ಲಿದ್ದ ಉಪ ವಿಭಾಗಾಧಿ ಕಾರಿ ಜವರೇಗೌಡ, ತಹಶೀಲ್ದಾರ್ ಮಹೇಶ್ ಅವರುಗಳಿಗೆ ಮನವಿ ಸಲ್ಲಿಸಿ ಒತ್ತಾಯಿಸಿದರು. ಜಿಲ್ಲಾಧಿಕಾರಿ ಗಮನಕ್ಕೆ ತರುವುದಾಗಿ ಉಪ ವಿಭಾಗಾಧಿಕಾರಿ ಭರವಸೆ ನೀಡಿದರು.

ಈ ಸಂದರ್ಭ ಜಿ.ಪಂ. ಸದಸ್ಯ ಬಾನಂಡ ಪ್ರಥ್ಯು, ಬಾಳೆಲೆ ಗ್ರಾ.ಪಂ. ಅಧ್ಯಕ್ಷೆ ಕಾಂಡೇರ ಕುಸುಮ, ಉಪಾಧ್ಯಕ್ಷ ಕೊಕ್ಕೇಂಗಡ ರಂಜನ್, ನಿಟ್ಟೂರು ಗ್ರಾ.ಪಂ. ಅಧ್ಯಕ್ಷೆ ಅನಿತಾ, ಗೋಣಿಕೊಪ್ಪ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಅಧ್ಯಕ್ಷ ಸುಜಾ ಪೂಣಚ್ಚ, ಪ್ರಮುಖರಾದ ಅಳಮೇಂಗಡ ಬೋಸ್, ಚಿಮ್ಮಣಮಾಡ ಕೃಷ್ಣ, ರಂಜನ್ ಚೆಂಗಪ್ಪ ಇದ್ದರು.