ಸಿದ್ದಾಪುರ, ಜ. 4: ನೆಲ್ಯಹುದಿಕೇರಿ ಹಾಗೂ ಅಭ್ಯತ್‍ಮಂಗಲ ಗ್ರಾಮದಲ್ಲಿ ಬೀಡುಬಿಟ್ಟಿದ್ದ ಕಾಡಾನೆಗಳ ಹಿಂಡನ್ನು ಅರಣ್ಯ ಇಲಾಖೆ ಸಿಬ್ಬಂದಿ ಕಾಡಿಗಟ್ಟಿಸಲು ಪ್ರಯತ್ನಿಸಿದರೂ, ಕಾಡಾನೆಗಳು ಮರಳಿ ಕಾಫಿ ತೋಟಕ್ಕೆ ಬರುತ್ತಿವೆ.
ನೆಲ್ಯಹುದಿಕೇರಿ ಗ್ರಾಮದ ನಲ್ವತ್ತೆಕ್ರೆಯ ಫಾನ್ಸಿ ಲ್ಯಾಂಡ್ ಹಾಗೂ ಮೇರಿ ಲ್ಯಾಂಡ್ ಕಾಫಿ ತೋಟದಲ್ಲಿ ಬೀಡುಬಿಟ್ಟಿದ್ದ ಕಾಡಾನೆಗಳು ಕಾಫಿ ತೋಟದಲ್ಲಿ ದಾಂಧಲೆ ನಡೆಸುತ್ತಿತ್ತು. ಈ ಹಿನ್ನಲೆಯಲ್ಲಿ ಕಾಫಿ ಬೆಳೆಗಾರರು ಹಾಗೂ ಕಾರ್ಮಿಕರು ಭಯಬೀತರಾಗಿದ್ದರು. ಈ ಬಗ್ಗೆ ಗ್ರಾಮಸ್ಥರು ಅರಣ್ಯ ಇಲಾಖೆಗೆ ದೂರು ನೀಡಿದ ಮೇರೆಗೆ ಶನಿವಾರದಂದು ಕುಶಾಲನಗರ ಉಪವಲಯ ಅರಣ್ಯಾಧಿಕಾರಿ ಸುಬ್ರಾಯ ನೇತೃತ್ವದಲ್ಲಿ ಕಾಡಾನೆಗಳನ್ನು ಕಾಡಿಗಟ್ಟುವÀ ಕಾರ್ಯಾಚರಣೆ ಹಮ್ಮಿಕೊಳ್ಳಲಾಗಿತ್ತು.
ಸಿಬ್ಬಂದಿ ಕಾಫಿ ತೋಟದಲ್ಲಿ ಬೀಡುಬಿಟ್ಟಿದ್ದ ಹತ್ತಕ್ಕೂ ಅಧಿಕ ಕಾಡಾನೆಗಳನ್ನು ಪಟಾಕಿ ಸಿಡಿಸಿ ಕಾರ್ಯಾಚರಣೆ ನಡೆಸಿ ದುಬಾರೆ ಅರಣ್ಯಕ್ಕೆ ಅಟ್ಟಲು ಪ್ರಯತ್ನಿಸಿದರೂ, ಕಾಡಾನೆಗಳು ಮರಳಿ ಕಾಫಿ ತೋಟಕ್ಕೆ ಲಗ್ಗೆ ಇಡುತ್ತಿರುವುದು ಅರಣ್ಯ ಇಲಾಖೆಗೆ ತಲೆನೋವಾಗಿ ಪರಿಣಮಿಸಿದೆ. ಶೀಘ್ರದಲ್ಲಿ ಮತ್ತೆ ಗ್ರಾಮಸ್ಥರಿಗೆ ಮಾಹಿತಿ ನೀಡಿ ಕಾರ್ಯಾಚರಣೆ ನಡೆಸಿ ಕಾಡಾನೆ ಗಳನ್ನು ಕಾಡಿಗಟ್ಟಲಾಗುವುದು ಎಂದು ಉಪವಲಯ ಅರಣ್ಯಾಧಿಕಾರಿ ಸುಬ್ರಾಯ ತಿಳಿಸಿದ್ದಾರೆ.
ಕಾರ್ಯಾಚರಣೆಯಲ್ಲಿ ಅರಣ್ಯ ರಕ್ಷಕ ಚರಣ್‍ಕುಮಾರ್, ಸಿಬ್ಬಂದಿಗಳಾದ ಆಲ್ಬರ್ಟ್ ಡಿಸೋಜ, ವಾಸುದೇವ್ ಸೇರಿದಂತೆ ಇತರರು ಇದ್ದರು. -ವಾಸು