ಮಡಿಕೇರಿ, ಜ. 4: ಐದು ವರ್ಷದೊಳಗಿನ ಮಕ್ಕಳಿಗೆ ಪಲ್ಸ್ ಪೋಲಿಯೋ ಹನಿ ಹಾಕುವ ಕಾರ್ಯಕ್ರಮವು ತಾ. 19 ರಂದು ನಡೆಯಲಿದ್ದು, ವಿವಿಧ ಇಲಾಖೆಗಳು ಹಾಗೂ ಸಂಘ ಸಂಸ್ಥೆಗಳು ಅಗತ್ಯ ಸಹಕಾರ ನೀಡುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ ಡಾ. ಸಿ.ವಿ. ಸ್ನೇಹ ತಿಳಿಸಿದ್ದಾರೆ.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಪಲ್ಸ್ ಪೋಲಿಯೋ ಸಿದ್ಧತೆ ಬಗ್ಗೆ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಪಲ್ಸ್ ಪೋಲಿಯೋ ಕಾರ್ಯಕ್ರಮ ಸಂದರ್ಭದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಜೊತೆ ಪಂಚಾಯತ್ ರಾಜ್, ಸಾರ್ವಜನಿಕ ಶಿಕ್ಷಣ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಪ್ರಾದೇಶಿಕ ಸಾರಿಗೆ ಇಲಾಖೆಗಳು ಸಹಕಾರ ನೀಡುವಂತೆ ಸೂಚಿಸಿದರು.

ಶಾಲೆಗಳು, ಬಸ್ ನಿಲ್ದಾಣಗಳಲ್ಲಿ ಹಾಗೂ ಜನ ದಟ್ಟಣೆ ಪ್ರದೇಶಗಳಲ್ಲಿ 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಪೋಲಿಯೋ ಹನಿ ಹಾಕಲು ಸಹಕಾರ ನೀಡಬೇಕು. ಪ್ರಾದೇಶಿಕ ಸಾರಿಗೆ ಇಲಾಖೆಯಿಂದ ಅಗತ್ಯ ವಾಹನ ನಿಯೋಜಿಸುವಂತೆ ಅವರು ತಿಳಿಸಿದರು.

ಪಲ್ಸ್ ಪೋಲಿಯೋ ಕಾರ್ಯಕ್ರಮ ದಿನದಲ್ಲಿ ವಿದ್ಯುತ್ ಸಂಪರ್ಕವನ್ನು ನಿರಂತರವಾಗಿ ಕಲ್ಪಿಸಬೇಕು. ಪಲ್ಸ್ ಪೋಲಿಯೋ ಕಾರ್ಯಕ್ರಮ ಯಶಸ್ಸುಗೊಳಿಸುವ ನಿಟ್ಟಿನಲ್ಲಿ ರೋಟರಿ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ಸಹಕಾರ ಪಡೆಯುವಂತೆ ಸಲಹೆ ಮಾಡಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕೆ. ಮೋಹನ್ ಅವರು ಪಲ್ಸ್ ಪೋಲಿಯೋ ಕಾರ್ಯಕ್ರಮವು ತಾ. 19 ರಂದು ಬೂತ್ ಮಟ್ಟದಲ್ಲಿ ನಡೆಯಲಿದೆ. ತಾ. 20, 21 ಮತ್ತು 22 ರಂದು ಮೂರು ದಿನಗಳ ಕಾಲ ನಗರ ಮತ್ತು ಪಟ್ಟಣ ಪ್ರದೇಶದಲ್ಲಿ ಹಾಗೂ 20 ಮತ್ತು 21 ರಂದು ಎರಡು ದಿನಗಳ ಕಾಲ ಗ್ರಾಮೀಣ ಪ್ರದೇಶದಲ್ಲಿ ಮನೆ ಮನೆಗೆ ತೆರಳಿ ಪೋಲಿಯೋ ಹನಿ ಹಾಕಲಾಗುತ್ತದೆ ಎಂದು ಮಾಹಿತಿ ನೀಡಿದರು.

ಕಾರ್ಯಕ್ರಮ ಅಧಿಕಾರಿ ಡಾ. ಗೋಪಿನಾಥ್ ಮಾತನಾಡಿ ಜಿಲ್ಲೆಯಲ್ಲಿ 5 ವರ್ಷದೊಳಗಿನ ಒಟ್ಟು 38,409 ಮಕ್ಕಳಿದ್ದು, 4,556 ನಗರ ಪ್ರದೇಶದ ಮಕ್ಕಳು ಹಾಗೂ 33,853 ಗ್ರಾಮೀಣ ಪ್ರದೇಶದ ಮಕ್ಕಳು ಇದ್ದಾರೆ. ಹಾಗೆಯೇ 5 ವರ್ಷದೊಳಗಿನ 9,843 ವಲಸೆ ಮಕ್ಕಳಿದ್ದು, ಪೋಲಿಯೋ ಹನಿ ಹಾಕಬೇಕಿದೆ ಎಂದು ಮಾಹಿತಿ ನೀಡಿದರು.

ಜಿಲ್ಲೆಯಲ್ಲಿ ಪೋಲಿಯೋ ಹನಿ ಹಾಕುವ ನಿಟ್ಟಿನಲ್ಲಿ 472 ಬೂತ್‍ಗಳನ್ನು ಸ್ಥಾಪಿಸಲಾಗಿದೆ. 21 ಟ್ರಾನ್ಸಿಟ್ ತಂಡಗಳನ್ನು ನಿಯೋಜಿಸಲಾಗಿದೆ. 6 ಸಂಚಾರಿ ತಂಡವನ್ನು ನಿಯೋಜಿಸಲಾಗಿದೆ. 1984 ಮಂದಿ ಪೋಲಿಯೋ ಹನಿ ಹಾಕುವವರು, 87 ಮಂದಿ ಮೇಲ್ವಿಚಾರಕರನ್ನು ನಿಯೋಜಿಸಲಾಗಿದೆ. 944 ಮಂದಿ ಮನೆ ಮನೆಗೆ ತೆರಳಿ ಪೋಲಿಯೋ ಹನಿ ಹಾಕಲಿದ್ದಾರೆ ಎಂದು ತಿಳಿಸಿದರು.

ಸಾಂಕ್ರಾಮಿಕ ರೋಗಗಳ ನಿಯಂತ್ರಣಾಧಿಕಾರಿ ಡಾ. ಎಂ. ಶಿವಕುಮಾರ್, ಕುಟುಂಬ ಕಲ್ಯಾಣಾಧಿಕಾರಿ ಡಾ. ಆನಂದ್, ತಾಲೂಕು ವೈದ್ಯಾಧಿಕಾರಿ ಡಾ. ಯತಿರಾಜ್, ವೈದ್ಯಕೀಯ ಕಾಲೇಜಿನ ಪ್ರಾಧ್ಯಾಪಕ ಡಾ. ರಾಮಚಂದ್ರ ಕಾಮತ್, ಪೌರಾಯುಕ್ತ ಎಂ.ಎಲ್. ರಮೇಶ್, ಪ್ರಾದೇಶಿಕ ಸಾರಿಗೆ ಅಧಿಕಾರಿ ಮಂಜುನಾಥ್ ಎಸ್. ಶಿರಾಲಿ, ಪೊಲೀಸ್ ಇನ್ಸ್‍ಪೆಕ್ಟ್‍ರ್ ಜಯರಾಮ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕಿ ಅರುಂಧತಿ, ಕೆಎಸ್‍ಆರ್‍ಟಿಸಿ ಘಟಕದ ವ್ಯವಸ್ಥಾಪಕಿ ಗೀತಾ, ಸಾರ್ವಜನಿಕ ಶಿಕ್ಷಣ ಇಲಾಖೆಯ ದೈಹಿಕ ಶಿಕ್ಷಣಾಧಿಕಾರಿ ವೆಂಕಟೇಶ್, ತಹಶೀಲ್ದಾರ್ ಮಹೇಶ್, ಕಾರ್ಮಿಕ ಇಲಾಖೆಯ ತಾಲೂಕು ಅಧಿಕಾರಿ ಯತ್ನಟ್ಟಿ, ಐಟಿಡಿಪಿ ಇಲಾಖೆ ವ್ಯವಸ್ಥಾಪಕ ದೇವರಾಜು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಶಿಕ್ಷಣಾಧಿಕಾರಿ ರಮೇಶ್, ರಾಷ್ಟ್ರೀಯ ಗ್ರಾಮೀಣ ಆರೋಗ್ಯ ಅಧಿಕಾರಿ ದೇವರಾಜು, ದಿವಾಕರ ಇತರರು ಇದ್ದರು.