ಸೋಮವಾರಪೇಟೆ, ಜ. 4: ಸ್ವಾಮಿ ವಿವೇಕಾನಂದ ಜಯಂತ್ಯೋತ್ಸವ ಸಮಿತಿ ವತಿಯಿಂದ ವಿವೇಕಾನಂದ ಜಯಂತಿ ಅಂಗವಾಗಿ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ತಾ. 8 ರಂದು ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ ಎಂದು ಸಮಿತಿಯ ಅಧ್ಯಕ್ಷ ಬಿ.ಎಸ್. ಸದಾನಂದ್ ತಿಳಿಸಿದ್ದಾರೆ.

ತಾ. 8 ರಂದು ಪೂರ್ವಾಹ್ನ 10 ಗಂಟೆಗೆ ಇಲ್ಲಿನ ಮಾನಸ ಸಭಾಂಗಣದಲ್ಲಿ ಸ್ಪರ್ಧೆಗಳು ನಡೆಯಲಿದ್ದು, ಎಲ್‍ಕೆಜಿ, ಯುಕೆಜಿಯಿಂದ 4ನೇ ತರಗತಿವರೆಗಿನ ಮಕ್ಕಳಿಗೆ ಸ್ವಾಮಿ ವಿವೇಕಾನಂದರ ಛದ್ಮವೇಷ ಸ್ಪರ್ಧೆ, 5 ರಿಂದ 7ನೇ ತರಗತಿ ವಿದ್ಯಾರ್ಥಿಗಳಿಗೆ ಸ್ವಾಮಿ ವಿವೇಕಾನಂದರ ಕುರಿತ ಕಿರು ಪ್ರಬಂಧ ಸ್ಪರ್ಧೆ, ಪ್ರೌಢಶಾಲೆ ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ರಸಪ್ರಶ್ನೆ ಸ್ಪರ್ಧೆಯನ್ನು ಆಯೋಜಿಸಲಾಗಿದ್ದು, ಒಂದು ಶಾಲೆಯಿಂದ ಪ್ರತಿ ವಿಭಾಗಕ್ಕೂ 3 ವಿದ್ಯಾರ್ಥಿಗಳು ಭಾಗವಹಿಸಬಹುದಾಗಿದೆ.

ತಾ. 11 ರಂದು ವಿವೇಕಾನಂದ ಜಯಂತಿ: ಸಮಿತಿಯ ವತಿಯಿಂದ ತಾ. 11 ರಂದು ಪೂರ್ವಾಹ್ನ 11 ಗಂಟೆಗೆ ಪಟ್ಟಣದ ಮಾನಸ ಸಭಾಂಗಣದಲ್ಲಿ ಸ್ವಾಮಿ ವಿವೇಕಾನಂದರ 157ನೇ ಜನ್ಮ ದಿನಾಚರಣೆಯನ್ನು ಆಚರಿಸಲಾಗುವದು. ಬಸವಾಪಟ್ಟಣದ ಶ್ರೀ ಸ್ವತಂತ್ರ ಬಸವಲಿಂಗಸ್ವಾಮಿ, ಕಿರಿಕೊಡ್ಲಿ ಮಠಾಧೀಶರಾದ ಶ್ರೀ ಸದಾಶಿವ ಸ್ವಾಮೀಜಿ, ರಾಮಕೃಷ್ಣ ಶಾರದಾಶ್ರಮದ ಬೋಧಸ್ವರೂಪಾನಂದ ಸ್ವಾಮೀಜಿಗಳು ಸಾನ್ನಿಧ್ಯ ವಹಿಸಲಿದ್ದಾರೆ.

ಶಾಸಕರು ಹಾಗೂ ಸಮಿತಿಯ ಗೌರವಾಧ್ಯಕ್ಷರೂ ಆಗಿರುವ ಎಂ.ಪಿ. ಅಪ್ಪಚ್ಚು ರಂಜನ್ ಕಾರ್ಯಕ್ರಮ ಉದ್ಘಾಟಿಸಲಿದ್ದು, ಬಿ.ಎಸ್. ಸದಾನಂದ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಕ್ಷೇತ್ರಶಿಕ್ಷಣಾಧಿಕಾರಿ ಹೆಚ್.ಕೆ. ಪಾಂಡು ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದು, ಸಭಾ ಕಾರ್ಯಕ್ರಮಕ್ಕೂ ಮುನ್ನ ಬೆಳಿಗ್ಗೆ 9.45ಕ್ಕೆ ಇಲ್ಲಿನ ವಿವೇಕಾನಂದ ಪ್ರತಿಮೆಗೆ ಮಾಲಾರ್ಪಣೆ, ನಂತರ ಪಟ್ಟಣದಲ್ಲಿ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಯೋಗದೊಂದಿಗೆ ವಿವಿಧ ಕಲಾ ತಂಡಗಳ ಮೆರವಣಿಗೆ ನಡೆಯಲಿದೆ ಎಂದು ಸದಾನಂದ್ ತಿಳಿಸಿದ್ದಾರೆ.