ಮಡಿಕೇರಿ ಜ. 6: ದೇಶದ ದುಡಿಯುವ ವರ್ಗದ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮತ್ತು ಕೇಂದ್ರ ಸರ್ಕಾರದ ವಿರುದ್ಧ ತಾ. 8 ರಂದು ನಡೆಯಲಿರುವ ರಾಷ್ಟ್ರವ್ಯಾಪಿ ಮುಷ್ಕರಕ್ಕೆ ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ಸ್ (ಸಿಐಟಿಯು)ನ ಜಿಲ್ಲಾ ಘಟಕ ಸಂಪೂರ್ಣ ಬೆಂಬಲ ನೀಡಲಿದೆ ಎಂದು ಸಂಘಟನೆಯ ಪ್ರಮುಖರು ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘಟನೆಯ ಜಿಲ್ಲಾಧ್ಯಕ್ಷ ಮಹಾದೇವ ಹಾಗೂ ಪ್ರಧಾನ ಕಾರ್ಯದರ್ಶಿ ಎ.ಸಿ. ಸಾಬು ಅವರುಗಳು, ಕೇಂದ್ರ ಸರ್ಕಾರದ ಜನ ವಿರೋಧಿ ನೀತಿಗಳನ್ನು ಖಂಡಿಸಿ ಮುಷ್ಕರ ನಡೆಸಲಾಗುತ್ತಿದ್ದು, ಜಿಲ್ಲೆಯ, ತೋಟ ಕಾರ್ಮಿಕರು, ಕಟ್ಟಡ ಕಾರ್ಮಿಕರು, ಅಂಗನವಾಡಿ ಕಾರ್ಯ ಕರ್ತೆಯರು ಹಾಗೂ ಸಹಾಯಕಿ ಯರು, ಬಿಸಿಯೂಟ ನೌಕರರೂ ಸೇರಿದಂತೆ ವಿವಿಧ ಕಾರ್ಮಿಕ ಸಂಘಟನೆಗಳ ಸದಸ್ಯರು ಪ್ರತಿಭಟನೆ ಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದರು. ಜಿಲ್ಲೆಯ ಮೂರು ತಾಲೂಕು ಕೇಂದ್ರಗಳಲ್ಲಿ ಧರಣಿ ಮುಷ್ಕರ ನಡೆಯಲಿದೆ ಎಂದು ತಿಳಿಸಿದರು.
ಮುಷ್ಕರಕ್ಕೆ ಬೆಂಬಲ ನೀಡುವಂತೆ ಈಗಾಗಲೇ ಚೇಂಬರ್ ಆಫ್ ಕಾಮರ್ಸ್, ಖಾಸಗಿ ಬಸ್ ಮಾಲೀಕರು, ಆಟೋ ಚಾಲಕರು ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ಪ್ರಮುಖರಲ್ಲಿ ಮನವಿ ಮಾಡಲಾಗಿದೆ ಎಂದು ಹೇಳಿದ ಪ್ರಮುಖರು, ಕೇಂದ್ರ ಸರಕಾರದ ನೀತಿಗಳನ್ನು ವಿರೋಧಿಸುವ ಪ್ರತಿಯೊಬ್ಬರೂ ಈ ಮುಷ್ಕರದಲ್ಲಿ ಭಾಗವಹಿಸಲಿದ್ದಾರೆ ಎಂದರು.
ಕೇಂದ್ರ ಸರಕಾರದ ನೀತಿಗಳನ್ನು ವಿರೋಧಿಸಿ ವಿವಿಧ ಕ್ಷೇತ್ರಗಳ ಕಾರ್ಮಿಕರು ತಾ. 8 ರಂದು ಪೂರ್ವಾಹ್ನ ಸೋಮವಾರಪೇಟೆ ಹಾಗೂ ವೀರಾಜಪೇಟೆ ತಾಲೂಕು ಕೇಂದ್ರಗಳಲ್ಲಿ ಹಾಗೂ ಮಡಿಕೇರಿಯ ಜಿಲ್ಲಾಧಿಕಾರಿ ಕಚೇರಿ ಎದುರು ಮುಷ್ಕರ ನಡೆಸುವ ಮೂಲಕ ವಿವಿಧ ಬೇಡಿಕೆ ಗಳನ್ನೊ ಳಗೊಂಡ ಮನವಿಯನ್ನು ಸರಕಾರಕ್ಕೆ ಸಲ್ಲಿಸಲಿದ್ದಾರೆ ಎಂದು ಹೇಳಿದರು. ಸುದ್ದಿಗೋಷ್ಠಿಯಲ್ಲಿ ಸಿಐಟಿಯು ಜಿಲ್ಲಾ ಉಪಾಧ್ಯಕ್ಷ ಪಿ.ಆರ್. ಭರತ್, ಎನ್.ಡಿ. ಕುಟ್ಟಪ್ಪನ್, ಖಜಾಂಚಿ ಹೆಚ್.ಬಿ. ರಮೇಶ್ ಹಾಗೂ ಉಪ ಕಾರ್ಯದರ್ಶಿ ರಾಚಪ್ಪಾಜಿ ಉಪಸ್ಥಿತರಿದ್ದರು.