ಮಡಿಕೇರಿ, ಜ.5 : ಸರಕಾರಿ ಆಸ್ಪತ್ರೆ ಸ್ವಚ್ಛತಾ ಸಿಬ್ಬಂದಿ ಮತ್ತು ಇನ್ನಿತರ ವಿಭಾಗದ ಸಿಬ್ಬಂದಿಗಳ ವಿವಿಧ ಬೇಡಿಕೆಗಳನ್ನು ಈಡೇರಿಸು ವಂತೆ ಒತ್ತಾಯಿಸಿ ಜಿಲ್ಲಾಧಿಕಾರಿಗಳ ಮೂಲಕ ಮನವಿ ಸಲ್ಲಿಸುವುದ ರೊಂದಿಗೆ ಸರಕಾರಕ್ಕೆ 10 ದಿನಗಳ ಗಡುವು ನೀಡಲಾಗುವುದು. ಅದರೊಳ ಗಾಗಿ ಬೇಡಿಕೆ ಈಡೇರದಿದ್ದರೆ ಕೆಲಸ ಸ್ಥಗಿತಗೊಳಿಸಿ ಪ್ರತಿಭಟನೆ ನಡೆಸಲಾಗು ವುದು ಎಂದು ಕೊಡಗು ಜಿಲ್ಲಾ ಸರಕಾರಿ ಆಸ್ಪತ್ರೆ ಸ್ವಚ್ಛತಾ ಸಿಬ್ಬಂದಿ ಮತ್ತು ಇನ್ನಿತರ ವಿಭಾಗದ ಸಿಬ್ಬಂದಿಗಳ ಸಂಘದ ಅಧ್ಯಕ್ಷ ಪಿ.ಆರ್.ಭರತ್ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ಸರಕಾರ ಆಸ್ಪತ್ರೆಗಳ ಸ್ವಚ್ಛತೆಗೆ ಇತರ ವಿಭಾಗಗಳಿಗೆ ಖಾಯಂ ಸಿಬ್ಬಂದಿಗಳನ್ನು ನೇಮಕ ಮಾಡುವ ಬದಲು ಗುತ್ತಿಗೆ, ಹೊರಗುತ್ತಿಗೆ ಮೂಲಕ ನೌಕರರನ್ನು ನೇಮಿಸಿಕೊಳ್ಳುತ್ತಿದೆ. ಆದರೆ ಇಂತಹ ಕಾರ್ಮಿಕರ ಗುತ್ತಿಗೆದಾರರಿಗೂ ಕಾರ್ಮಿಕರಿಗೂ ಮುಖ ಪರಿಚಯವೇ ಇಲ್ಲದ ಪರಿಸ್ಥಿತಿ ನಿರ್ಮಾಣವಾಗಿದ್ದು, ಕಾರ್ಮಿಕರನ್ನು ಕೆಲಸಕ್ಕೆ ಬಳಸಿಕೊಳ್ಳುವ ಸರಕಾರಿ ಅಧಿಕಾರಿಗಳು ಕೂಡಾ ಕಾರ್ಮಿಕರ ಕಷ್ಟಕಾರ್ಪಣ್ಯಗಳಿಗೆ ಸ್ಪಂದಿಸುತ್ತಿಲ್ಲ. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ಕೂಡಲೇ ಕಾರ್ಮಿಕರ ಗುತ್ತಿಗೆದಾರರು ಹಾಗೂ ಕಾರ್ಮಿಕ ಮುಖಂಡ ಸಭೆ ಕರೆದು ಕಾರ್ಮಿಕರ ಬೇಡಿಕೆಗಳ ಈಡೇರಿಕೆಗೆ ಮುಂದಾಗಬೇಕು ಎಂದು ಒತ್ತಾಯಿಸಿದರು.
ಗುತ್ತಿಗೆ ಕಾರ್ಮಿಕರು ಯಾವುದೇ ಭದ್ರತೆ ಇಲ್ಲದೆ ಕರ್ತವ್ಯ ನಿರ್ವಹಿಸುವಂತಾಗಿದ್ದು, ವೀರಾಜ ಪೇಟೆ ಸರಕಾರಿ ಆಸ್ಪತ್ರೆಯಲ್ಲಿ ರಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಗುತ್ತಿಗೆ ಸಿಬ್ಬಂದಿಯೊಬ್ಬರ ಮೇಲೆ ಹಲ್ಲೆ ನಡೆದು ಅವರು ಆಸ್ಪತ್ರೆಗೆ ದಾಖಲಾಗಿದ್ದರೂ, ಇದುವರೆಗೆ ಗುತ್ತಿಗೆದಾರರಾಗಲಿ, ಅಧಿಕಾರಿಗಳಾಗಲಿ ಅವರ ಬಗ್ಗೆ ಯಾವುದೇ ಕಾಳಜಿ ವಹಿಸಿಲ್ಲ ಎಂದು ಆರೋಪಿಸಿದರು.
ಮುಷ್ಕರಕ್ಕೆ ಬೆಂಬಲ: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ವಿವಿಧ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಜ.8ರಂದು ನಡೆಸಲಿರುವ ರಾಷ್ಟ್ರ ವ್ಯಾಪಿ ಸಾರ್ವತ್ರಿಕ ಮುಷ್ಕರಕ್ಕೆ ತಮ್ಮ ಸಂಘಟನೆ ಸಂಪೂರ್ಣ ಬೆಂಬಲ ನೀಡಲಿದೆ ಎಂದು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಸಂಘದ ಜಿಲ್ಲಾ ಕಾರ್ಯದರ್ಶಿ ಹೆಚ್.ಜಾನಕಿ, ಪದಾಧಿಕಾರಿ ಟಿ.ಜೆ. ಶೀಲಾ ಉಪಸ್ಥಿತರಿದ್ದರು.