ಮಡಿಕೇರಿ, ಜ. 6 : ಜಿಲ್ಲೆಯ ವಿದ್ಯಾರ್ಥಿಗಳ ಶೈಕ್ಷಣಿಕ ಚಟುವಟಿಕೆಗಳಿಗೆ ನೆರವಾಗುವ ಉದ್ದೇಶದಿಂದ ಕೊಡಗು ವಿಕಸನ ಸಂಸ್ಥೆ ಆರಂಭವಾಗಿದೆ.

ರಾಜ್ಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅವರ ಮಾರ್ಗದರ್ಶನದಲ್ಲಿ ಈ ಸಂಸ್ಥೆಯನ್ನು ರಚಿಸಲಾಗಿದ್ದು, ಉದ್ಯಮಿ ಚೈಯ್ಯಂಡ ಸತ್ಯ ಗಣಪತಿ, ಪತ್ರಕರ್ತರಾದ ಅಜ್ಜಮಾಡ ರಮೇಶ್ ಕುಟ್ಟಪ್ಪ, ಕಿಶೋರ್ ರೈ ಕತ್ತಲೆಕಾಡು ಈ ತಂಡದಲ್ಲಿದ್ದಾರೆ. ಜಿಲ್ಲೆಯಲ್ಲಿರುವ ವಿದ್ಯಾರ್ಥಿಗಳ ಪಠ್ಯ ಚಟುವಟಿಕೆಗೆ ಅನುಕೂಲವಾಗುವ ನಿಟ್ಟಿನಲ್ಲಿ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಉದ್ದೇಶವಿದೆ. ಜತೆಗೆ ಮುಖ್ಯವಾಗಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ನೆರವಾಗುವ ಉದ್ದೇಶವನ್ನು ಸಂಸ್ಥೆ ಹೊಂದಿದೆ ಎಂದು ಸಂಸ್ಥೆಯ ಮುಂದಾಳು ಚೈಯ್ಯಂಡ ಸತ್ಯ ಗಣಪತಿ ತಿಳಿಸಿದ್ದಾರೆ.

ಶಿಕ್ಷಣದಲ್ಲಿ ಹಿಂದುಳಿದ ವಿದ್ಯಾರ್ಥಿಗಳಿಗೆ ಮಾನಸಿಕ ಸ್ಥೈರ್ಯ ತುಂಬಿ ಅವರನ್ನು ಮುನ್ನೆಲೆಗೆ ತರುವ ನಿಟ್ಟಿನಲ್ಲಿ ಶ್ರಮಿಸಲಾಗುವುದು. ಅದರ ಭಾಗವಾಗಿ ಜನವರಿ ಹಾಗೂ ಫೆಬ್ರವರಿ ತಿಂಗಳಿನಲ್ಲಿ ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಸಂದರ್ಭ ಮಾನಸಿಕ ಸಿದ್ಧತೆ ಹಾಗೂ ಭಯವಿಲ್ಲದೆ ಪರೀಕ್ಷೆ ಎದುರಿಸುವ ಬಗ್ಗೆ ಕಾರ್ಯಾಗಾರ ಹಮ್ಮಿಕೊಳ್ಳಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.