ಸೋಮವಾರಪೇಟೆ, ಜ. 7: ಕೇಂದ್ರ ಸರ್ಕಾರ ಜಾರಿಗೆ ತರುತ್ತಿರುವ ಪೌರತ್ವ ತಿದ್ದುಪಡಿ ಕಾಯ್ದೆಯ ಬಗ್ಗೆ ಕಾಂಗ್ರೆಸ್ ಸೇರಿದಂತೆ ಇತರ ಪಕ್ಷಗಳು ಅಲ್ಪಸಂಖ್ಯಾತ ಮುಸ್ಲಿಂ ಸಮುದಾಯದಲ್ಲಿ ಅನಗತ್ಯ ಆತಂಕ ಸೃಷ್ಟಿಸುತ್ತಿವೆ ಎಂದು ಆರೋಪಿಸಿರುವ ಶಾಸಕ ರಂಜನ್, ಪೌರತ್ವ ಕಾಯ್ದೆಯನ್ನು ಬೆಂಬಲಿಸಿ ತಾ. 17 ರಂದು ಮಡಿಕೇರಿಯಲ್ಲಿ ಬೃಹತ್ ಸಮಾವೇಶ ನಡೆಯಲಿದೆ ಎಂದು ತಿಳಿಸಿದರು.
ಭಾರತೀಯ ಜನತಾ ಪಾರ್ಟಿಯ ಸೋಮವಾರಪೇಟೆ ಮಂಡಲ ವತಿಯಿಂದ ಇಲ್ಲಿನ ಕೊಡವ ಸಮಾಜ ದಲ್ಲಿ ಆಯೋಜಿಸಿದ್ದ ಜನಜಾಗೃತಿ ಅಭಿಯಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಪೌರತ್ವ ತಿದ್ದುಪಡಿ ಕಾಯ್ದೆಯ ಬಗ್ಗೆ ಕಾಂಗ್ರೆಸ್ ಸೇರಿದಂತೆ ಇತರ ಪಕ್ಷಗಳು ಮುಸ್ಲಿಂ ಸಮುದಾಯಕ್ಕೆ ತಪ್ಪು ಸಂದೇಶ ರವಾನಿಸಿ ಸರ್ಕಾರದ ವಿರುದ್ಧ ಎತ್ತಿಕಟ್ಟುತ್ತಿವೆ. ಕಾಯ್ದೆಯ ಬಗ್ಗೆ ಸಂಪೂರ್ಣ ಮಾಹಿತಿ ಪಡೆಯದ ಮಂದಿ, ಅನಗತ್ಯವಾಗಿ ಆತಂಕ ಸೃಷ್ಟಿಸುತ್ತಿದ್ದಾರೆ. ಪ್ರತಿಭಟನೆಯಲ್ಲಿ ಭಾಗವಹಿಸಿದ ಬಹುತೇಕ ಮಂದಿಗೆ ತಾವು ಯಾಕಾಗಿ ಪ್ರತಿಭಟನೆ ಮಾಡುತ್ತಿದ್ದೇವೆ ಎಂಬ ಬಗ್ಗೆಯೇ ಮಾಹಿತಿ ಇಲ್ಲದಾಗಿದೆ ಎಂದರು.
ಮಂಗಳೂರಿನಲ್ಲಿ ನಡೆದ ಹಿಂಸಾಚಾರಕ್ಕೆ ಶಾಸಕ ಯು.ಟಿ. ಖಾದರ್‍ರ ಹೇಳಿಕೆಯೇ ಕಾರಣವಾಗಿದ್ದು, ಅವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಸಾರ್ವಜನಿಕ ಆಸ್ತಿಪಾಸ್ತಿ ಹಾನಿಯನ್ನು ದಂಗೆಕೋರರಿಂದಲೇ ಭರಿಸಲು ಕ್ರಮ ಕೈಗೊಳ್ಳುವಂತೆ ಸರ್ಕಾರವನ್ನು ಆಗ್ರಹಿಸುವುದಾಗಿ ತಿಳಿಸಿದರು.
ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಅಭಿಯಾನದ ಸಂಚಾಲಕ ರಾಬಿನ್ ದೇವಯ್ಯ ಮಾತನಾಡಿ, ಕಾರ್ಯಕರ್ತರು ಪ್ರತಿ ಮನೆಗೆ ತೆರಳಿ ಕಾಯ್ದೆ ಬಗ್ಗೆ ಮಾಹಿತಿ ನೀಡಬೇಕು. ಕಾಯ್ದೆಯನ್ನು ಬೆಂಬಲಿಸಿ ಭಾರತ್ ಮಾತಾ ಪೂಜನ, ಜನಜಾಗೃತಿ ಸಭೆ, ಸಂವಾದ, ಸಹಿ ಸಂಗ್ರಹ, ಪೋಸ್ಟ್ ಕಾರ್ಡ್ ಆಂದೋಲನಗಳನ್ನು ನಡೆಸಬೇಕು ಎಂದರು.
ತಾ. 17ರಂದು ಮಡಿಕೇರಿಯಲ್ಲಿ ನಡೆಯುವ ಸಮಾವೇಶದಲ್ಲಿ ಕನಿಷ್ಟ 10 ಸಾವಿರ ಮಂದಿ ಭಾಗವಹಿಸುವ ನಿರೀಕ್ಷೆಯಿದೆ. ದೇಶದ ಆಂತರಿಕ ಮತ್ತು ಬಾಹ್ಯ ರಕ್ಷಣೆಯಲ್ಲಿ ಇಂತಹ ಕಾಯ್ದೆಗಳು ಅವಶ್ಯವಾಗಿದ್ದು, ಈ ಹಿಂದೆ ಪ್ರಧಾನಿಯಾಗಿದ್ದ ಕಾಂಗ್ರೆಸ್‍ನ ಮನಮೋಹನ್ ಸಿಂಗ್ ಅವರೇ ಈ ಬಗ್ಗೆ ಒತ್ತಾಯಿಸಿದ್ದರು. ಆದರೆ ಇಂದು ಕಾಂಗ್ರೆಸ್ ಪಕ್ಷ ಮುಸ್ಲಿಂ ಸಮುದಾಯ ವನ್ನು ತಪ್ಪು ದಾರಿಗೆ ಎಳೆಯುವ ಪ್ರಯತ್ನ ನಡೆಸುತ್ತಿದೆ ಎಂದು ದೂರಿದರು.
ವಿಧಾನ ಪರಿಷತ್ ಮಾಜೀ ಸದಸ್ಯ ಎಸ್.ಜಿ. ಮೇದಪ್ಪ ಮಾತನಾಡಿ, ಕಾಯ್ದೆಯ ಅನುಕೂಲತೆಯನ್ನು ಶಕ್ತಿ ಕೇಂದ್ರದ ಮಟ್ಟಕ್ಕೆ ತಲುಪಿಸಬೇಕು. ಸರ್ಕಾರ ಹಾಗೂ ಮೋದಿಯ ವಿರುದ್ಧ ಯಾವದೇ ಭ್ರಷ್ಟಾಚಾರ ಆರೋಪ ಮಾಡಲಾಗದ ಕಾಂಗ್ರೆಸ್, ಈ ಕಾಯ್ದೆಯನ್ನು ತನ್ನ ಬೇಳೆ ಬೇಯಿಸಿಕೊಳ್ಳಲು ಬಳಸುತ್ತಿದೆ. ಇಂತಹ ಕುತಂತ್ರಕ್ಕೆ ಬಿಜೆಪಿ ಸರ್ಕಾರ ಹಾಗೂ ಕಾರ್ಯಕರ್ತರು ತಕ್ಕ ಉತ್ತರ ನೀಡಬೇಕಿದೆ ಎಂದರು.
ಕಾರ್ಯಕ್ರಮದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಬಿ.ಬಿ. ಭಾರತೀಶ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿ.ಕೆ. ಲೋಕೇಶ್, ಮಹಿಳಾ ಮೋರ್ಚಾ ಅಧ್ಯಕ್ಷೆ ಯಮುನ ಚಂಗಪ್ಪ, ತಾ.ಪಂ. ಉಪಾಧ್ಯಕ್ಷ ಅಭಿಮನ್ಯುಕುಮಾರ್ ಅವರುಗಳು ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಂಡಲ ಸಮಿತಿ ಅಧ್ಯಕ್ಷ ಕೊಮಾರಪ್ಪ ವಹಿಸಿದ್ದರು. ವೇದಿಕೆಯಲ್ಲಿ ಸೋಮವಾರಪೇಟೆ ಮಂಡಲದ ನಿಯೋಜಿತ ಅಧ್ಯಕ್ಷ ಮನುಕುಮಾರ್ ರೈ, ಪ್ರಮುಖರಾದ ಸುಮಾ ಸುದೀಪ್, ಉಷಾ ತೇಜಸ್ವಿ ಸೇರಿದಂತೆ ಇತರರು ಉಪಸ್ಥಿತರಿದ್ದರು.