ಮಡಿಕೇರಿ, ಜ. 7: ಪದವಿ ಮತ್ತು ಸ್ನಾತಕೋತ್ತರ ಪದವಿ ಪಡೆದಿರುವ ಯುವ ಜನರು ನಾಗರಿಕ ಸೇವಾ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಯಶಸ್ಸು ಗಳಿಸುವ ನಿಟ್ಟಿನಲ್ಲಿ ಅಗತ್ಯ ತಯಾರಿ ಮಾಡಿಕೊಳ್ಳಬೇಕಿದೆ ಎಂದು ಐಟಿಡಿಪಿ ಇಲಾಖಾ ಅಧಿಕಾರಿ ಶಿವಕುಮಾರ್ ಸಲಹೆ ಮಾಡಿದ್ದಾರೆ.

ನಗರದ ಬ್ಲಾಸಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕೆಎಎಸ್ ಮತ್ತು ಐಎಎಸ್ ಸೇರಿದಂತೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆ ಎದುರಿಸುವ ಕುರಿತು ನಡೆದ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಯಾವುದೇ ಸ್ಪರ್ಧಾತ್ಮಕ ಪರೀಕ್ಷೆ ಎದುರಿಸಲು ಅಗತ್ಯ ತಯಾರಿ ಅತೀ ಮುಖ್ಯ. ಆ ನಿಟ್ಟಿನಲ್ಲಿ ಮಾಹಿತಿ ಸಂಗ್ರಹಿಸಿಕೊಳ್ಳುವುದು, ಹಿಂದಿನ ಪ್ರಶ್ನೆ ಪತ್ರಿಕೆಗಳ ಅಧ್ಯಯನ ಮಾಡುವುದು ಹಾಗೂ ಪ್ರಚಲಿತ ವಿದ್ಯಾಮಾನಗಳ ಬಗ್ಗೆ ತಿಳಿದುಕೊಳ್ಳುವುದು, ವಿಜ್ಞಾನ, ಸಮಾಜ ಕಾರ್ಯ ಹೀಗೆ ಪ್ರತಿಯೊಂದು ವಿಷಯದಲ್ಲಿ ಹಿಡಿತವಿದ್ದಲ್ಲಿ ಯಶಸ್ಸು ಸಾಧಿಸಬಹುದು ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದರು.

ನಾಗರಿಕ ಸೇವಾ ಪರೀಕ್ಷೆಗಳಲ್ಲಿ ಪ್ರಚಲಿತ ವಿದ್ಯಾಮಾನಗಳು, ಐಚ್ಛಿಕ ವಿಷಯಗಳು ಸೇರಿದಂತೆ ಭಾಷಾಂತರಕ್ಕೂ ಸಹ ಒತ್ತು ನೀಡಬೇಕಿದೆ ಎಂದು ಅವರು ತಿಳಿಸಿದರು. ಆಹಾರ ಇಲಾಖೆಯ ಉಪ ನಿರ್ದೇಶಕ ಗೌರವ್ ಕುಮಾರ್ ಶೆಟ್ಟಿ ಮಾಹಿತಿ ನೀಡಿ ಯಾವುದೇ ಪರೀಕ್ಷೆ ಎದುರಿಸುವಲ್ಲಿ ಆಸಕ್ತಿ ಜೊತೆಗೆ ನಿರಂತರ ಅಭ್ಯಾಸ ಇರಬೇಕು ಎಂದರು.

ಸ್ಪರ್ಧಾತ್ಮಕ ಪರೀಕ್ಷೆ ಸಂಬಂಧಿಸಿದಂತೆ ಅಗತ್ಯ ಪುಸ್ತಕಗಳನ್ನು ಸಂಗ್ರಹಿಸಿ ಓದಬೇಕು. ಪ್ರಚಲಿತ ವಿದ್ಯಾಮಾನಗಳ ಬಗ್ಗೆ ತಿಳಿದುಕೊಳ್ಳಬೇಕು ಎಂದು ಅವರು ಹೇಳಿದರು. ಜಿಲ್ಲಾ ಉದ್ಯೋಗ ವಿನಿಮಯಾಧಿಕಾರಿ ಸಿ. ಜಗನ್ನಾಥ್ ಮಾತನಾಡಿ, ಉದ್ಯೋಗ ವಿನಿಮಯ ಇಲಾಖೆಯಿಂದ ನಾಗರಿಕ ಸೇವಾ ಪರೀಕ್ಷೆಗಳು, ಬ್ಯಾಂಕಿಂಗ್ ಪರೀಕ್ಷೆಗಳು ಹೀಗೆ ಹಲವು ಪರೀಕ್ಷೆ ಸಂಬಂಧ ತಯಾರಿ ಮಾಡಿಕೊಳ್ಳುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ. ಇವುಗಳನ್ನು ಬಳಸಿಕೊಂಡು ಸ್ಪರ್ಧಾತ್ಮಕ ಪರೀಕ್ಷೆ ಎದುರಿಸಿ ಜಯ ಪಡೆಯುವಂತಾಗಬೇಕು ಎಂದು ಅವರು ಹೇಳಿದರು.

ಯಾವುದೇ ಕ್ಷೇತ್ರದಲ್ಲಿ ಯಶಸ್ಸು ಸಾಧಿಸಲು ಕಠಿಣ ಪರಿಶ್ರಮ ಇರಬೇಕು. ಹಾಗಾದಾಗ ಮಾತ್ರ ಯಶಸ್ಸು ಪಡೆಯಲು ಸಾಧ್ಯ ಎಂದು ಅವರು ಹೇಳಿದರು. ಸ್ಪರ್ಧಾತ್ಮಕ ಪರೀಕ್ಷೆ ಸಂಬಂಧಿಸಿದಂತೆ ತಾ. 15 ರವರೆಗೆ ತರಬೇತಿ ಕಾರ್ಯಾಗಾರ ನಡೆಯಲಿದ್ದು, ಈ ಅವಕಾಶವನ್ನು ಬಳಸಿಕೊಳ್ಳುವಂತಾಗಬೇಕು ಎಂದು ಮನವಿ ಮಾಡಿದರು. ಬ್ಲಾಸಂ ಶಾಲೆಯ ಪ್ರಾಂಶುಪಾಲೆ ಅನಸೂಯ ಇತರರು ಇದ್ದರು.