ಮಡಿಕೇರಿ, ಜ.8: ಸ್ವಾಮಿ ವಿವೇಕಾನಂದರ ಜೀವನ, ತತ್ವ ಮತ್ತು ಸಂದೇಶಗಳನ್ನು ಯುವಜನತೆಗೆ ತಲುಪಿಸುವ ಕಾರ್ಯಕ್ರಮವನ್ನು ತಾ. 12 ರಂದು ಹಮ್ಮಿಕೊಳ್ಳುವಂತೆ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಸ್ನೇಹಾ ಅವರು ಸೂಚಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಅಧಿಕಾರಿಗಳ ಜೊತೆ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆಯನ್ನು ತಾ. 12 ರಂದು ಅರ್ಥಪೂರ್ವವಾಗಿ ಆಯೋಜಿಸುವ ನಿಟ್ಟಿನಲ್ಲಿ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಜಿಲ್ಲೆಯಲ್ಲಿ ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆ ಪ್ರಯುಕ್ತ ರಾಷ್ಟ್ರೀಯ ಯುವ ಸಪ್ತಾಹ ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ಆಯೋಜಿಸಬೇಕು. ಸ್ವಾಮಿ ವಿವೇಕಾನಂದರ ಕುರಿತು ನುರಿತ ವಾಗ್ಮಿಗಳಿಂದ ಮುಖ್ಯ ಭಾಷಣ ಏರ್ಪಡಿಸುವಂತೆ ಅವರು ತಿಳಿಸಿದರು.

ಕಾರ್ಯಕ್ರಮಕ್ಕೆ ಪೂರ್ವಭಾವಿಯಾಗಿ ಶಾಲಾ-ಕಾಲೇಜುಗಳಲ್ಲಿ ವಿವೇಕಾನಂದರ ಕುರಿತು ಆಶುಭಾಷಣ ಸ್ಪರ್ಧೆ, ಚರ್ಚಾ ಸ್ಪರ್ಧೆ, ಪ್ರಬಂಧ ಸ್ಪರ್ಧೆಗಳನ್ನು ಜಿಲ್ಲೆಯ ವಿದ್ಯಾರ್ಥಿಗಳಿಗೆ ಲೀಡ್ ಕಾಲೇಜಿನಲ್ಲಿ ನಡೆಸಿ, ವಿಜೇತರಾದ ವಿದ್ಯಾರ್ಥಿಗಳಿಗೆ ಕಾರ್ಯಕ್ರಮದಂದು ಬಹುಮಾನ ವಿತರಿಸುವಂತೆ ತಿಳಿಸಿದರು.

ವಿದ್ಯಾರ್ಥಿಗಳಿಂದ ಸ್ವಾಮಿ ವಿವೇಕಾನಂದರ ಜೀವನ ಕುರಿತು ಸಾಂಸ್ಕøತಿಕ ಕಾರ್ಯಕ್ರಮಗಳನ್ನು ಆಯೋಜಿಸುವಂತಾಗಬೇಕು. ಆ ನಿಟ್ಟಿನಲ್ಲಿ ಕನ್ನಡ ಮತ್ತು ಸಂಸ್ಕøತಿ, ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆಗಳ ಸಹಕಾರ ಪಡೆಯುವಂತೆ ಸಲಹೆ ಮಾಡಿದರು.

ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಚಿತ್ರ, ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಜಯಲಕ್ಷ್ಮೀ ಬಾಯಿ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಪಿ.ಎಸ್.ಮಚ್ಚಾಡೊ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕಿ ಭವಾನಿ, ಪೊಲೀಸ್ ಇಲಾಖೆಯ ಇನ್ಸ್‍ಪೆಕ್ಟರ್ ನಂದಾ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಮಂಜುನಾಥ, ದೈಹಿಕ ಶಿಕ್ಷಣಾಧಿಕಾರಿ ವೆಂಕಟೇಶ್ ಉಪಸ್ಥಿತರಿದ್ದರು.