ಸೋಮವಾರಪೇಟೆ,ಜ.14: ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಸ್ವಯಂ ಶಿಸ್ತನ್ನು ಅಳವಡಿಸಿಕೊಳ್ಳಬೇಕು ಎಂದು ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಅವರು ಕರೆ ನೀಡಿದರು.
ಇಲ್ಲಿನ ಜ್ಞಾನ ವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಆಯೋಜಿಸಿದ್ದ ಯುವ ದಿನಾಚರಣೆ ಕಾರ್ಯ ಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳೇ ದೇಶದ ಭವಿಷ್ಯವಾಗಿದ್ದು, ಶಿಸ್ತು, ಸಂಯಮ ಹಾಗೂ ದೇಶಭಕ್ತಿಯನ್ನು ಮೈಗೂಡಿಸಿಕೊಳ್ಳಬೇಕು. ತಮ್ಮ ಜೀವನವನ್ನು ತಾವೇ ರೂಪಿಸಿಕೊಳ್ಳುವ ಸ್ವಯಂ ಶಿಲ್ಪಿಗಳಾಗಬೇಕು ಎಂದು ಕಿವಿಮಾತು ನುಡಿದರು.
ಸ್ವಾಮಿ ವಿವೇಕಾನಂದರ ಆದರ್ಶಗಳನ್ನು ಪಾಲಿಸುವ ಮೂಲಕ ರಾಷ್ಟ್ರ ನಿರ್ಮಾಣ ಕಾರ್ಯದಲ್ಲಿ ತೊಡಗಿಸಿಕೊಳ್ಳಬೇಕು. ದುಶ್ಚಟಗಳಿಂದ ದೂರವಿದ್ದು, ಸ್ವಚ್ಛ ಜೀವನ, ಸ್ವಚ್ಛ ಪರಿಸರ ನಿರ್ಮಿಸಬೇಕು ಎಂದು ರಂಜನ್ ತಿಳಿಸಿದರು.
ಕಾರ್ಯಕ್ರಮದ ಅಂಗವಾಗಿ ವಿಷಯವಾರು ವಸ್ತು ಪ್ರದರ್ಶನ ಏರ್ಪಡಿಸಲಾಗಿತ್ತು. ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕøತಿಕ ಕಾರ್ಯಕ್ರಮ ನಡೆಯಿತು. ಎಲ್ಕೆಜಿಯಿಂದ ಹತ್ತನೇ ತರಗತಿವರೆಗೆ ಅತೀ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಶಾಲಾ ಪ್ರಾಂಶುಪಾಲರಾದ ಮನುಬಾಯಿ, ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಚಂದ್ರಾಜು, ಕಾರ್ಯದರ್ಶಿ ವೆಂಕಟೇಶ್, ಸದಸ್ಯರಾದ ಗಣಪತಿ, ಹೆಚ್.ಸಿ. ನಾಗೇಶ್, ಮಹೇಶ್, ಗಜೇಂದ್ರ ಸೇರಿದಂತೆ ಇತರರು ಉಪಸ್ಥಿತರಿದ್ದರು.