ಕೂಡಿಗೆ, ಜ. 14 : ತೊರೆನೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಅಳುವಾರದಲ್ಲಿ ಪೊಲೀಸ್ ತರಬೇತಿ ಕೇಂದ್ರವನ್ನು ತೆರೆಯಲು ಈಗಾಗಲೇ ಜಾಗವನ್ನು ಗುರುತಿಸಿ ಸರ್ವೆ ಕಾರ್ಯನಡೆಯುತ್ತಿದೆ. ಕೊಡಗು ಜಿಲ್ಲೆಯಲ್ಲಿ ಕಳೆದ ಹತ್ತು ವರ್ಷಗಳಿಂದಲೂ ಪೊಲೀಸ್ ತರಬೇತಿ ಕೇಂದ್ರವನ್ನು ತೆರೆಯುವುದರ ಬಗ್ಗೆ ಚಿಂತನೆ ನಡೆಸಿ, ಅಳುವಾರದಲ್ಲಿ ಜಾಗವನ್ನು ಗುರುತಿಸಿ ಪೊಲೀಸ್ ಇಲಾಖೆಯ ಮೂಲಕ ರಾಜ್ಯ ಸರ್ಕಾರಕ್ಕೆ ವರದಿ ಮತ್ತು ಪ್ರಸ್ತಾವನೆಯನ್ನು ಕಳುಹಿಸಲಾಗಿತ್ತು. ಅದರಂತೆ ಸರ್ಕಾರದಿಂದ ಇಲಾಖೆಯ ಮೂಲಕ ಎಲ್ಲಾ ಪ್ರಕ್ರಿಯೆಗಳು ನಡೆಯುತ್ತಿವೆ.

ಇದೀಗ ಅನುದಾನ ಬಿಡುಗಡೆಗೆ ಪ್ರಸ್ತಾವನೆಯನ್ನು ಇಲಾಖೆಯ ಮೂಲಕ ಕಳುಹಿಸಿದ್ದು, ಅನುದಾನ ಬಿಡುಗಡೆಗೆ ಪ್ರಯತ್ನಿಸಲಾಗುವುದು ಎಂದು ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ.ಅಪ್ಪಚ್ಚುರಂಜನ್ ತಿಳಿಸಿದ್ದಾರೆ.

ಕಳೆದ ವಾರ ಜಿಲ್ಲಾ ಪೊಲೀಸ್ ಇಲಾಖೆಯ ವತಿಯಿಂದ ಅಳುವಾರದಲ್ಲಿ 87 ಎಕರೆ ಜಾಗವನ್ನು ಗುರುತಿಸಿ ಸರ್ವೆ ನಡೆಸಿ ಬೇಲಿ ನಿರ್ಮಿಸಲಾಗಿದೆ. ಮುಂದಿನ ದಿನಗಳಲ್ಲಿ ರಾಜ್ಯದ ಗೃಹ ಸಚಿವರೊಂದಿಗೆ ಚರ್ಚಿಸಿ ತರಬೇತಿ ಕೇಂದ್ರವನ್ನು ತೆರಯಲು ಬೇಕಾಗುವ ಎಲ್ಲಾ ವ್ಯವಸ್ಥೆಗೆ ಒತ್ತಾಯ ಮಾಡಲಾಗುವುದು. ಮುಂದಿನ ಬಜೆಟ್‍ನಲ್ಲಿ ಪೊಲೀಸ್ ತರಬೇತಿ ಕೇಂದ್ರಕ್ಕೆ ಬೇಕಾಗಿರುವ ಹೆಚ್ಚು ಹಣವನ್ನು ಶೀಘ್ರವಾಗಿ ಬಿಡುಗಡೆ ಮಾಡುವಂತೆ ಸದನದಲ್ಲಿ ಒತ್ತಾಯಿಸಲಾಗುವುದು. ಮೊದಲ ಹಂತದಲ್ಲಿ ಅನುದಾನ ಬಿಡುಗಡೆ ಮಾಡಿ ತಡೆಗೋಡೆ ನಿರ್ಮಿಸಲು ರಾಜ್ಯಮಟ್ಟದ ಉನ್ನತ ಅಧಿಕಾರಿಗಳೊಂದಿಗೆ ಚರ್ಚಿಸಿ ಕಾಮಗಾರಿ ಕೈಗೊಳ್ಳಲು ಸೂಚಿಸಲಾಗುವುದು ಎಂದು ಎಂ.ಪಿ.ಅಪ್ಪಚ್ಚುರಂಜನ್ ತಿಳಿಸಿದರು.