ಮಡಿಕೇರಿ, ಜ. 17: ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ತಾ. 26 ರಂದು ನಡೆಯುವ ಗಣರಾಜ್ಯೋತ್ಸವ ಆಚರಣೆ ಸಂಬಂಧ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ನಡೆಯಿತು. ಸಭೆಯಲ್ಲಿ ಮಾತನಾಡಿದ ಅವರು, ಎಲ್ಲಾ ಇಲಾಖಾ ಅಧಿಕಾರಿಗಳು ಮತ್ತು ಸಂಘ-ಸಂಸ್ಥೆಗಳು ಕೈಜೋಡಿಸಿ ಗಣರಾಜ್ಯೋತ್ಸವ ಯಶಸ್ಸಿಗೆ ಸಹಕರಿಸುವಂತೆ ಕೋರಿದರು.
ನಗರದ ಜನರಲ್ ಕೆ.ಎಸ್. ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯುವ ಗಣರಾಜ್ಯೋತ್ಸವ ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ನಡೆಸಲು ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಳ್ಳಬೇಕು. ಬೆಳಗಿನ ಹಾಗೂ ಸಂಜೆಯ ಸಾಂಸ್ಕøತಿಕ ಕಾರ್ಯಕ್ರಮ ಗಳಲ್ಲಿ ಗುಣಮಟ್ಟ ಕಾಯ್ದುಕೊಳ್ಳಬೇಕು. ಅದೇ ರೀತಿ ಸ್ತಬ್ಧಚಿತ್ರಗಳನ್ನು ವಿಷಯಾಧಾರಿತವಾಗಿ ಆಕರ್ಷಣೀಯ ವಾಗಿ ನಿರ್ಮಿಸುವಂತೆ ಸಂಬಂಧಿಸಿದ ಇಲಾಖೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಗಣರಾಜ್ಯೋತ್ಸವ ಆಚರಣೆಗೆ ವಿವಿಧ ಉಪ ಸಮಿತಿಗಳನ್ನು ರಚಿಸಿ ಜವಾಬ್ದಾರಿ ಹಂಚಿಕೆ ಮಾಡಲಾಯಿತು. ಉಪ ಸಮಿತಿಗಳು ತಮಗೆ ವಹಿಸಿರುವ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು.
ಗಣರಾಜ್ಯೋತ್ಸವ ಕಾರ್ಯಕ್ರಮಕ್ಕೆ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಕಡ್ಡಾಯವಾಗಿ ಪಾಲ್ಗೊಳ್ಳಬೇಕು ಎಂದರು. ಮೆರವಣಿಗೆಯನ್ನು ನಗರದ ಕೋಟೆ ಆವರಣದಿಂದ ಪ್ರಾರಂಭಿಸಿ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣಕ್ಕೆ ಸಾಗುವಂತೆ ನೋಡಿಕೊಳ್ಳಲು ಮೆರವಣಿಗೆ ಸಮಿತಿಗೆ ಸೂಚಿಸಲಾಯಿತು. ತಿಂಡಿ, ಲಘು ಉಪಾಹಾರ ಜವಾಬ್ದಾರಿಯನ್ನು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಮೇಲುಸ್ತುವಾರಿ ಆಹಾರ ಸಮಿತಿಗೆ ವಹಿಸಲಾಯಿತು.
ಗಣರಾಜ್ಯೋತ್ಸವ ದಿನದಂದು ಕುಡಿಯುವ ನೀರು ಒದಗಿಸುವುದು, ಜತೆಗೆ ಸ್ವಚ್ಛತೆ ಸಂಬಂಧ ಅಗತ್ಯವಿರುವ ಕಡೆ ಕಸದಬುಟ್ಟಿ ಇಡುವುದು ಮತ್ತಿತರ ಕ್ರಮಗಳನ್ನು ಕೈಗೊಳ್ಳುವಂತೆ ಪೌರಾಯುಕ್ತರಿಗೆ ಸೂಚಿಸಲಾಯಿತು.
ವೇದಿಕೆಯನ್ನು ಲೋಕೋಪ ಯೋಗಿ ಹಾಗೂ ಜಿ.ಪಂ. ಇಂಜಿನಿ ಯರ್ ವಿಭಾಗದವರು ಅಚ್ಚುಕಟ್ಟಾಗಿ ನಿರ್ಮಾಣ ಮಾಡುವಂತೆ ನಿರ್ದೇಶನ ನೀಡಲಾಯಿತು.
ವೈದ್ಯಕೀಯ ಕಾಲೇಜಿನ ನಿರ್ದೇಶಕ ಕಾರ್ಯಪ್ಪ, ಪೊಲೀಸ್ ಇನ್ಸ್‍ಪೆಕ್ಟರ್ ಸಿದ್ದಯ್ಯ, ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ. ಎಂ. ಶಿವಕುಮಾರ್, ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಯ ಉಪ ನಿರ್ದೇಶಕ ಗೌರವ್ ಕುಮಾರ್ ಶೆಟ್ಟಿ, ಮುದ್ರಾಂಕ ಇಲಾಖೆಯ ಉಪ ನಿರ್ದೇಶಕ ಸಿದ್ದರಾಜು, ಜಿಲ್ಲಾ ಉದ್ಯೋಗ ವಿನಿಮಯಾಧಿಕಾರಿ ಜಗನ್ನಾಥ್, ಕ್ಷೇತ್ರ ಶಿಕ್ಷಣಾಧಿಕಾರಿ ಗಾಯತ್ರಿ, ಸಾರ್ವಜನಿಕ ಶಿಕ್ಷಣ ಇಲಾಖೆಯ ದೈಹಿಕ ಶಿಕ್ಷಣಾಧಿಕಾರಿ ವೆಂಕಟೇಶ್, ನಗರಸಭೆ ಸ್ವಚ್ಛತಾ ವಿಭಾಗದ ಅಧಿಕಾರಿ ನಾಚಪ್ಪ, ಜಿ.ಪಂ. ಸಹಾಯಕ ನಿರ್ದೇಶಕ ಜೀವನ್ ಕುಮಾರ್, ಐಟಿಡಿಪಿ ಇಲಾಖೆ ವ್ಯವಸ್ಥಾಪಕ ದೇವರಾಜು, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಮಣಜೂರು ಮಂಜುನಾಥ್, ಪ್ರಾದೇಶಿಕ ಸಾರಿಗೆ ಅಧಿಕಾರಿ ಮಂಜುನಾಥ್ ಶಿರಾಲಿ, ತಹಶೀಲ್ದಾರ್ ಮಹೇಶ್, ಮಲ್ಲೇಶ್, ಜಿಲ್ಲಾ ಸ್ಕೌಟ್ಸ್ ಮತ್ತು ಗೈಡ್ಸ್‍ನ ಜಿಮ್ಮಿ ಸಿಕ್ವೇರಾ ಇತರರು ಇದ್ದರು.